ಬೆಂಗಳೂರು: ಕಳೆದ ಕೆಲವು ವರ್ಷಗಳಿಂದ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಕಳಪೆ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಶಿಕ್ಷಣ ಇಲಾಖೆಯು ಶಿಕ್ಷಕರಿಗೆ ತಮ್ಮ ಸಂಸ್ಥೆಗಳಲ್ಲಿ ಉತ್ತಮ ಶೇಕಡಾವಾರು ಫಲಿತಾಂಶವನ್ನು ಖಚಿತಪಡಿಸಿಕೊಳ್ಳುವಂತೆ ಸೂಚನೆ ನೀಡಿದೆ.
ಪ್ರಸಕ್ತ ಸಾಲಿನ ಪರೀಕ್ಷೆಯಲ್ಲಿ ಶೇ.70 ರಷ್ಟು ಪಿಯು ವಿದ್ಯಾರ್ಥಿಗಳು ಮತ್ತು ಶೇ.80 ರಷ್ಟು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗುವಂತೆ ಶಿಕ್ಷಕರು ಖಚಿತಪಡಿಸಿಕೊಳ್ಳಬೇಕು. ಇಲ್ಲದಿದ್ದರೆ, ಶಿಕ್ಷಕರನ್ನು ಬದಲಾಯಿಸುವ ಕುರಿತು ಇಲಾಖೆ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಹೇಳಿದೆ.
ಈ ಬಗ್ಗೆ ಇಲಾಖೆಯ ಸಹಾಯಕ ಆಯುಕ್ತ ಡಿಎಸ್ ಉಮೇಶ್ ಅವರು ಖಚಿತಪಡಿಸಿದ್ದಾರೆ. ಪಾಲಿಕೆ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಈ ಬಗ್ಗೆ ಒಂದು ಅಥವಾ ಎರಡು ದಿನದಲ್ಲಿ ಸುತ್ತೋಲೆ ಹೊರಡಿಸಲಾಗುತ್ತದೆ ಎಂದು ಹೇಳಿದ್ದಾರೆ.
ಬಿಬಿಎಂಪಿ ಕಲ್ಯಾಣ ಕ್ರಮಗಳ ವಿಶೇಷ ಆಯುಕ್ತ ರಾಮಪ್ರಸಾದ್ ಮನೋಹರ್ ಅವರು ಮಾತನಾಡಿ, ಬಿಬಿಎಂಪಿ ಶಾಲಾ ಶಿಕ್ಷಕರಿಗೆ ತರಬೇತಿ ನೀಡಲು ಕೆಲ ಸಂಸ್ಥೆಗಳಿಗೆ ಹೊರಗುತ್ತಿಗೆ ನೀಡಲಾಗಿದೆ. ಈ ಸಂಸ್ಥೆಗಳು ಶಿಕ್ಷಕರ ಬೋಧನೆ ಮೇಲೆ ಪರಿಣಾಮ ಬೀರುತ್ತದೆ. ಸುಧಾರಣೆಯ ಮೇಲೆ ನಮಗೆ ವಿಶ್ವಾಸವಿದೆ. ಬಿಬಿಎಂಪಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳ ಭವಿಷ್ಯ ನಮಗೆ ಮುಖ್ಯ ಎಂದು ತಿಳಿಸಿದ್ದಾರೆ.
ಕಳೆದ ವರ್ಷ, ಬಿಬಿಎಂಪಿ ಶಾಲೆಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ 71.27 ಮತ್ತು ಪಿಯುಸಿ ಪರೀಕ್ಷೆಯಲ್ಲಿ 66 ಶೇಕಡಾವಾರು ಫಲಿತಾಂಶವನ್ನು ವರದಿ ಮಾಡಿತ್ತು.
ಪಾಲಿಕೆಯು 33 ಪ್ರೌಢಶಾಲೆಗಳು ಮತ್ತು 18 ಪಿಯು ಕಾಲೇಜುಗಳನ್ನು ಹೊಂದಿದ್ದು, 728 ಗುತ್ತಿಗೆ ಮತ್ತು 180 ಖಾಯಂ ಶಿಕ್ಷಕರನ್ನು ನೇಮಿಸಿಕೊಂಡಿದೆ. ಈ ವರ್ಷ 2,736 ಎಸ್‌ಎಸ್‌ಎಲ್‌ಸಿ ಹಾಗೂ 3,326 ದ್ವಿತೀಯ ಪಿಯು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ನಿಯಮಿತವಾಗಿ ತರಗತಿಗಳಿಗೆ ಹಾಜರಾಗದ ವಿದ್ಯಾರ್ಥಿಗಳು ಸರಿಯಾಗಿ ಸಿದ್ಧರಾಗದ ಕಾರಣ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದುವುದು ಸಾಧ್ಯವಾಗುವುದಿಲ್ಲ ಎಂದು ಪಾಲಿಕೆ ಶಿಕ್ಷಣ ಇಲಾಖೆ ನಂಬಿದ್ದು, ಈ ಹಿನ್ನೆಲೆಯಲ್ಲಿ ಹಾಜರಾತಿ ಕೊರತೆ ಇರುವ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ನಿರಾಕರಿಸುವಂತೆ ಅಧಿಕಾರಿಗಳು ಶಾಲೆಗಳಿಗೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.