ರಾಜ್ಯ

ಕಲಬುರಗಿ: ವಸತಿ ಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಮುಖ್ಯೋಪಾಧ್ಯಾಯ, ಕಂಪ್ಯೂಟರ್ ಆಪರೇಟರ್ ಬಂಧನ

Lingaraj Badiger

ಕಲಬುರಗಿ: ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಸತಿ ಶಾಲೆಯೊಂದರಲ್ಲಿನ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಸತಿ ಶಾಲೆಯ ಮುಖ್ಯೋಪಾಧ್ಯಾಯ ಚೇತನ ರೆಡ್ಡಿ ಹಾಗೂ ಕಂಪ್ಯೂಟರ್ ಆಪರೇಟರ್ ಸಂಗಮೇಶ ಅವರನ್ನು ಮಂಗಳವಾರ ಬಂಧಿಸಲಾಗಿದೆ.

ಮುಖ್ಯೋಪಾಧ್ಯಾಯ, ಕಂಪ್ಯೂಟರ್ ಆಪರೇಟರ್ ವಿರುದ್ಧ ಕೊಂಚಾವರಂ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆ ಅಡಿ ಹಾಗೂ ಜಾತಿನಿಂದನೆ ಪ್ರಕರಣ ದಾಖಲಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಚೇತನರೆಡ್ಡಿ ಹಾಗೂ ಸಂಗಮೇಶ ಅವರು ತಮಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಶಾಲೆಯ ವಿದ್ಯಾರ್ಥಿನಿಯರು ತಮ್ಮ ಪೋಷಕರಿಗೆ ವಿಷಯ ತಿಳಿಸಿದ್ದಾರೆ. ನಂತರ ಪೋಷಕರು ಮತ್ತು ಗ್ರಾಮಸ್ಥರು ಸೋಮವಾರ ಶಾಲೆಗೆ ತೆರಳಿ ಮುಖ್ಯ ಶಿಕ್ಷಕ ಹಾಗೂ ಕಂಪ್ಯೂಟರ್ ಆಪರೇಟರ್ ಇಬ್ಬರಿಗೂ ಥಳಿಸಿದ್ದಾರೆ. ಘಟನಾ ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಪ್ರಭುಲಿಂಗ್ ಅವರು ಭೇಟಿ ನೀಡಿ ಪಾಲಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿದರು.

ಬಳಿಕ ಕೊಂಚಾವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಹೆಡ್ ಮಾಸ್ಟರ್ ಚೇತನ್‌ಕುಮಾರ್ ರೆಡ್ಡಿ ಮತ್ತು ಕಂಪ್ಯೂಟರ್ ಆಪರೇಟರ್ ಸಂಗಮೇಶ್ ಅವರನ್ನು ಬಂಧಿಸಲಾಗಿದೆ.

ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಇಂದು ಕೊಂಚಾವರಂನಲ್ಲಿ ಧರಣಿ ನಡೆಸಿದರು.

ಕಲಬುರಗಿ ಸಂಸದ ಡಾ.ಉಮೇಶ ಜಾಧವ್, ಜಿಲ್ಲಾಧಿಕಾರಿ ಯಶವಂತ್ ಗುರ್ಕಾರ್ ಮಂಗಳವಾರ ಕೊಂಚಾವರಂನ ವಸತಿ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು. ಕೊಂಚಾವರಂನ ವಸತಿ ಶಾಲೆಗೆ ಮಹಿಳಾ ವಾರ್ಡನ್ ಹಾಗೂ ಮಹಿಳಾ ಕಂಪ್ಯೂಟರ್ ಆಪರೇಟರ್ ನೇಮಕ ಮಾಡುವಂತೆ ಸಮಾಜ ಕಲ್ಯಾಣ ಇಲಾಖೆಗೆ ಸೂಚನೆ ನೀಡಿರುವುದಾಗಿ ಯಶವಂತ ಗುರ್ಕಾರ್ ತಿಳಿಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಮಹಿಳಾ ಸಿಬ್ಬಂದಿ ಲಭ್ಯವಿಲ್ಲದಿದ್ದರೆ ಮಹಿಳಾ ಮುಖ್ಯೋಪಾಧ್ಯಾಯರು ಹಾಗೂ ಮಹಿಳಾ ಕಂಪ್ಯೂಟರ್ ಆಪರೇಟರ್ ಸೇವೆಯನ್ನು ಡೆಪ್ಯುಟೇಶನ್ ಆಧಾರದ ಮೇಲೆ ನೀಡುವಂತೆ ಶಾಲಾ ಶಿಕ್ಷಣ ಇಲಾಖೆಗೆ ತಿಳಿಸಲಿ ಎಂದಿದ್ದಾರೆ.

SCROLL FOR NEXT