ರಾಜ್ಯ

ಭ್ರಷ್ಟಾಚಾರ ಪ್ರಕರಣ: ಯಡಿಯೂರಪ್ಪ, ಕುಟುಂಬ ಸದಸ್ಯರ ವಿರುದ್ಧ ಕೇಸ್ ದಾಖಲಿಸಿದ ಲೋಕಾಯುಕ್ತ ಪೊಲೀಸರು

Lingaraj Badiger

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಹಾಗೂ ಅವರ ಕುಟುಂಬದ ಹಲವು ಸದಸ್ಯರ ವಿರುದ್ಧ ಲೋಕಾಯುಕ್ತ ಪೊಲೀಸರು ಕೇಸ್ ದಾಖಲಿಸಿದ್ದಾರೆ.

ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಕುಟುಂಬ ಸದಸ್ಯರು ಅಧಿಕಾರ ದುರುಪಯೋಗಪಡಿಸಿಕೊಂಡು ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣ ಕುರಿತು ಎಫ್ ಐಆರ್ ದಾಖಲಿಸಿ, ತನಿಖೆ ನಡೆಸುವಂತೆ ಹೆಚ್ಚುವರಿ ನಗರ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಕಳೆದ ಬುಧವಾರ ಆದೇಶಿಸಿತ್ತು.

ಕೋರ್ಟ್ ಆದೇಶದಂತೆ ಯಡಿಯೂರಪ್ಪ ಹಾಗೂ ಅವರ ಪುತ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿರುವ ಬಿ ವೈ ವಿಜಯೇಂದ್ರ, ಅವರ ಮೊಮ್ಮಗ ಮತ್ತು ಆಗಿನ ಬಿಡಿಎ ಆಯುಕ್ತರು ಸೇರಿದಂತೆ ಬಿಜೆಪಿಯ ಹಿರಿಯ ನಾಯಕ ಮತ್ತು ಅವರ ಸಂಬಂಧಿಕರ ವಿರುದ್ಧ ಶುಕ್ರವಾರ ಪ್ರಕರಣ ದಾಖಲಿಸಲಾಗಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆಗೆ  ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನ್ಸ್ ಸ್ಟ್ರಕ್ಷನ್ ಕಂಪನಿಯಿಂದ ಕೋಟ್ಯಂತರ ರೂ. ನಗದು ಹಾಗೂ ಶೆಲ್ ಕಂಪನಿಗಳ ಮೂಲಕ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಅವರು ದೂರು ನೀಡಿದ್ದರು. ದೂರಿ ಆಧಾರದ ಮೇಲೆ ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ಐಪಿಸಿಯ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ನಗರದ ಬಿದರಹಳ್ಳಿಯ ಕೋನದಾಸಪುರದಲ್ಲಿ ಬಿಡಿಎ ಅಪಾರ್ಟ್‌ಮೆಂಟ್‌ ನಿರ್ಮಾಣಕ್ಕೆ ಟೆಂಡರ್‌ ನೀಡಿದ್ದಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.

2019 ರಿಂದ 2021 ರವರೆಗೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ರಾಮಲಿಂಗಂ ಕನ್ಸ್ ಸ್ಟ್ರಕ್ಷನ್ ಕಂಪನಿಯಿಂದ ಹಾಗೂ ಅವರ ಒಡೆತನದ ಶೆಲ್ ಕಂಪನಿಗಳಿಂದ ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

SCROLL FOR NEXT