ರಾಜ್ಯ

ವಿಧಾನಸಭಾ ಚುನಾವಣೆ: ಬಿಜೆಪಿ ಅಸಮಾಧಾನ ಸ್ಫೋಟ ಬೆನ್ನಲ್ಲೇ ಸಿಎಂ ಬೊಮ್ಮಾಯಿ ಟೆಂಪಲ್ ರನ್!

Manjula VN

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಟಿಕೆಟ್ ವಂಚಿತರ ಬಂಡಾಯ ಜೋರಾಗಿದೆ. ಈ ನಡುವಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ದೇಗುಲಗಳಿಗೆ ಭೇಟಿ ನೀಡುತ್ತಿದ್ದು, ವಿಶೇಷ ಪೂಜೆಗಳನ್ನು ಸಲ್ಲಿಸುತ್ತಿದ್ದಾರೆ.

ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಬುಧವಾರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು.

ಧರ್ಮಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ, ರಾಜ್ಯದ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದ್ದೇನೆ. ಸತ್ಯಕ್ಕೆ ಜಯ ಸಿಗಲಿದೆ ಎಂದು ಹೇಳಿದರು.

ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಸುಳ್ಯದಲ್ಲಿ ಆರು ಬಾರಿ ಶಾಸಕರಾಗಿದ್ದ ಎಸ್.ಅಂಗಾರ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಅಂಗಾರ ಅವರು ಸಜ್ಜನ ರಾಜಕಾರಣಿ. ಅವರೊಂದಿಗೆ ವೈಯಕ್ತಿಕವಾಗಿ ಮಾತನಾಡುತ್ತೇನೆಂದು ಹೇಳಿದರು.

ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಬಿಜೆಪಿ ಶಾಸಕ ಲಕ್ಷ್ಮಣ ಸವದಿ ಕುರಿತು ಮಾತನಾಡಿ, ಸವದಿ ಅವರು, ಪಕ್ಷ ಮತ್ತು ನನ್ನೊಂದಿಗೆ ನಿಕಟ ಬಾಂಧವ್ಯವನ್ನು ಹೊಂದಿದ್ದಾರೆ, ಕೋಪದಲ್ಲಿ ಹೇಳಿಕೆಗಳನ್ನು ನೀಡುತ್ತಿದ್ದರು, ಅವರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಇತ್ಯರ್ಥಪಡಿಸಲಾಗುತ್ತದೆ ಎಂದು ತಿಳಿಸಿದರು.

ಕೆ ಎಸ್ ಈಶ್ವರಪ್ಪ ಅವರ ಕುರಿತು ಮಾತನಾಡಿ, ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ಪಡೆದಿಲ್ಲ, ಚುನಾವಣಾ ರಾಜಕೀಯದಲ್ಲಿ ಇರುತ್ತಾರೆ, ಹೈಕಮಾಂಡ್ ಅವರ ಜೊತೆ ಮಾತನಾಡಲಿದೆ ಎಂದರು.

ಬಳಿಕ ಕುಕ್ಕೆ ಸುಬ್ರಹ್ಮಣ್ಯದಿಂದ ಆಗಮಿಸಿದ ಮುಖ್ಯಮಂತ್ರಿಗಳು, ಮಂಗಳೂರಿನ ಮಂಗಳಾದೇವಿ ಹಾಗೂ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರಕ್ಕೆ ಭೇಟಿ ನೀಡಿದರು. ಮುಂದಿನ ದಿನಗಳಲ್ಲಿ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ, ಉಳ್ಳಾಲ ಸಮೀಪದ ಸೋಮೇಶ್ವರ ದೇವಸ್ಥಾನ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೂ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ.

ಟಿಕೆಟ್ ಘೋಷಣೆಯಾದ ನಂತರ ಸಚಿವ ವಿ ಸುನೀಲ್ ಕುಮಾರ್ ಅವರು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಹೊಸಲಿಗಮ್ಮನ ದರ್ಶನ ಪಡೆದು ಕುಕ್ಕೆಯಲ್ಲಿ ‘ಶೇಷ ಸೇವೆ’ ಅರ್ಪಿಸಿದರು. ಬಳಿಕ ಆದಿ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದರು.

SCROLL FOR NEXT