ಬೆಳಗಾವಿ: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಕಾರಿನಲ್ಲಿ ಸಾಗಿಸುತ್ತಿದ್ದ ದಾಖಲೆ ಇಲ್ಲದ 1.54 ಕೋಟಿ ರೂ. ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಹೆಚ್ಚಿನ ತನಿಖೆಗಾಗಿ ಪೊಲೀಸರು ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಕಾರನ್ನು ಅಡ್ಡಗಟ್ಟಿ 1.54 ಕೋಟಿ ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ದಾಖಲಿಸಿಕೊಂಡು ಐಟಿ ಇಲಾಖೆಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೇ 10 ರಂದು ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಮೇ 13ಕ್ಕೆ ಮತಎಣಿಕೆ ನಡೆಯಲಿದೆ.
ಮಾರ್ಚ್ 29 ರಂದು ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ 76.70 ಕೋಟಿ ರೂಪಾಯಿ ನಗದು, 42.82 ಕೋಟಿ ರೂಪಾಯಿ ಮೌಲ್ಯದ ಮದ್ಯ, 49.71 ಕೋಟಿ ರೂ. ಮೌಲ್ಯದ 656.97 ಕೆಜಿ ಚಿನ್ನ ಸೇರಿದಂತೆ 204 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.