ರಾಜ್ಯ

ಮೈಸೂರಿನಲ್ಲಿ ರಾಜ್ಯ ಮಟ್ಟದ ವಕೀಲರ ಸಮ್ಮೇಳನ: ಮುಖ್ಯ ಅತಿಥಿಗಳ ಪಟ್ಟಿಯಿಂದ ಡಿಸಿಎಂ ಡಿಕೆಶಿ ಹೆಸರು ಔಟ್!

Nagaraja AB

ಬೆಂಗಳೂರು: ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ಇದೇ 12 ರಂದು  ಮೈಸೂರಿನಲ್ಲಿ ಆಯೋಜಿಸಿರುವ ಎರಡು ದಿನಗಳ ರಾಜ್ಯ ಮಟ್ಟದ ವಕೀಲರ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದ ಮುಖ್ಯ ಅತಿಥಿಗಳ ಪಟ್ಟಿಯಿಂದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಹೆಸರನ್ನು ಕೈಬಿಟ್ಟಿದೆ. ಶಿವಕುಮಾರ್ ವಿರುದ್ಧ ಪ್ರಕರಣಗಳು ಬಾಕಿ ಇರುವಾಗ ನ್ಯಾಯಾಧೀಶರೊಂದಿಗೆ ವೇದಿಕೆ ಹಂಚಿಕೊಳ್ಳುವ ಬಗ್ಗೆ ಆಕ್ಷೇಪ ವ್ಯಕ್ತವಾಗಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮೇಳನವನ್ನು ಉದ್ಘಾಟಿಸಲಿದ್ದು, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎ. ಎಸ್.  ಬೋಪಣ್ಣ, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ, ಬಾರ್ ಕೌನ್ಸಿಲ್ ಆಫ್ ಇಂಡಿಯಾ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ, ಕರ್ನಾಟಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ಹಲವಾರು ಪ್ರಕರಣಗಳು ಬಾಕಿ ಇರುವ ಸಮಯದಲ್ಲಿ ಆಗಸ್ಟ್ 12 ರ ಕಾರ್ಯಕ್ರಮದಲ್ಲಿ ಸುಪ್ರೀಂಕೋರ್ಟ್ ನ್ಯಾಯಾಧೀಶರು ಮತ್ತು ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಅವರೊಂದಿಗೆ ಡಿಕೆ ಶಿವಕುಮಾರ್ ವೇದಿಕೆ ಹಂಚಿಕೊಳ್ಳುವುದಕ್ಕೆ ಬಿಜೆಪಿ ಶಾಸಕ ಮತ್ತು ಮಾಜಿ ಕಾನೂನು ಸಚಿವ ಎಸ್ ಸುರೇಶ್ ಕುಮಾರ್ ಅವರು  ಆಕ್ಷೇಪ ವ್ಯಕ್ತಪಡಿಸಿ ಕರ್ನಾಟಕ ಹೈಕೋರ್ಟ್‌ನ ರಿಜಿಸ್ಟ್ರಾರ್‌ಗೆ ಪತ್ರ ಬರೆದ ನಂತರ ಶಿವಕುಮಾರ್ ಅವರ ಹೆಸರನ್ನು ಕೈಬಿಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಹಲವು ಪ್ರಕರಣಗಳು ಬಾಕಿ ಇರುವ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಾಧೀಶರೊಂದಿಗೆ ವೇದಿಕೆ ಹಂಚಿಕೊಳ್ಳುವುದು ಸರಿಯೇ ಎಂದು ಬಿಜೆಪಿಯ ಹಿರಿಯ ನಾಯಕ ಸುರೇಶ್ ಕುಮಾರ್ ಪ್ರಶ್ನಿಸಿದ್ದರು. 

ಶಿವಕುಮಾರ್ ಅವರನ್ನು 2019ರ ಸೆಪ್ಟೆಂಬರ್‌ನಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿತ್ತು. 50 ದಿನಗಳ ಕಾಲ ಜೈಲಿನಲ್ಲಿದ್ದ ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.ತನಿಖಾ ಏಜೆನ್ಸಿ ಕಳೆದ ವರ್ಷ ಮೇನಲ್ಲಿ ದೆಹಲಿ ನ್ಯಾಯಾಲಯದಲ್ಲಿ ಅವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿತ್ತು.

SCROLL FOR NEXT