ರಾಜ್ಯ

ಕಾಗೋಡು ತಿಮ್ಮಪ್ಪಗೆ ದೇವರಾಜ ಅರಸು ಪ್ರಶಸ್ತಿ ಪ್ರದಾನ

Srinivasamurthy VN

ಬೆಂಗಳೂರು: ಹಿರಿಯ ರಾಜಕಾರಣಿ ಮತ್ತು ಕಾಂಗ್ರೆಸ್ ಪಕ್ಷದ  ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರಿಗೆ ಭಾನುವಾರ ದೇವರಾಜ ಅರಸು ಪ್ರಶಸ್ತಿ ಪ್ರದಾನ ಮಾಡಲಾಯಿತು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಹಮ್ಮಿಕೊಂಡಿದ್ದ ದೇವರಾಜು ಅರಸು ಅವರ 108 ನೇ ಜನ್ಮ ದಿನಾಚರಣೆ ಹಾಗೂ ಡಿ. ದೇವರಾಜ ಅರಸು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರಿಗೆ ಅರಸು ಪ್ರಶಸ್ತಿ ನೀಡಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 'ಸಮಾಜವಾದಿ ಚಳವಳಿ ಮತ್ತು ಗೇಣಿ ಹೋರಾಟಗಾರ ಕಾಗೋಡು ತಿಮ್ಮಪ್ಪ ಅವರಿಗೆ ದೇವರಾಜು ಅರಸು ಪ್ರಶಸ್ತಿ ಲಭಿಸಿರುವುದರಿಂದ ಪ್ರಶಸ್ತಿಯ ಮೌಲ್ಯ ಹೆಚ್ಚಾಗಿದೆ. ನಾನು ಮುಖ್ಯಮಂತ್ರಿ ಆಗಿರುವ ಅವಧಿಯಲ್ಲೇ ಕಾಗೋಡು ತಿಮ್ಮಪ್ಪ ಅವರಿಗೆ ಅರಸು ಪ್ರಶಸ್ತಿ ಲಭಿಸಿರುವುದು ನನಗೆ ಅತ್ಯಂತ ಖುಷಿಯಾಗಿದೆ. ಬಹಳಷ್ಟು ಯುವ ನಾಯಕರನ್ನು ಕಾಗೋಡು ತಿಮ್ಮಪ್ಪ ಬೆಳೆಸಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ಎಸ್ ತಂಗಡಗಿ, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಸಕ ಗೋಪಾಲಕೃಷ್ಣ ಬೇಳೂರು, ನಾಗರಾಜ ಯಾದವ್, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಉಪಸ್ಥಿತರಿದ್ದರು.
 

SCROLL FOR NEXT