ಬೆಂಗಳೂರು: ಬಾಂಬ್ ಇಡುವವರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ ಎಂದು ಹೇಳಿಕೆ ನೀಡುವ ಮೂಲಕ ಬಿಜೆಪಿ ಶಾಸಕ ಎನ್ ಮುನಿರತ್ನ ಶುಕ್ರವಾರ ವಿವಾದವನ್ನು ಸೃಷ್ಟಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಕಾಂಗ್ರೆಸ್ ಬೆಂಬಲದಿಂದಲೇ ಶಾಲೆಗಳಿಗೆ ಬಾಂಬ್ ಬೆದರಿಕೆಗಳು ಹೆಚ್ಚಾಗುತ್ತಿವೆ. ಆದರೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ನಾನು ಹೇಳುವುದಿಲ್ಲ' ಎಂದು ಹೇಳಿದರು.
ಈಗ ಬಿಜೆಪಿಯ ದೊಡ್ಡ ದೊಡ್ಡ ನಾಯಕರು ಮುಸ್ಲಿಂ ಸಮುದಾಯದ ಸ್ಪೀಕರ್ ಯುಟಿ ಖಾದರ್ ಅವರಿಗೆ ನಮಸ್ಕರಿಸುತ್ತಾರೆ ಎಂಬ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆ ಜನರಿಗೆ ನೋವುಂಟು ಮಾಡಿದೆ. ರಾಜ್ಯ ಸರ್ಕಾರವು ತನ್ನ ಸಚಿವರು ಜವಾಬ್ದಾರಿಯುತವಾಗಿ ಮಾತನಾಡುವಂತೆ ಸೂಚಿಸಬೇಕು ಎಂದು ಸಲಹೆ ನೀಡಿದರು.
ಈ ಕುರಿತು ವಿವಾದ ಭುಗಿಲೇಳುತ್ತಿದ್ದಂತೆ ಸ್ಪಷ್ಟನೆ ನೀಡಿದ್ದ ಸಚಿವ ಜಮೀರ್, ಕಾಂಗ್ರೆಸ್ ಪಕ್ಷ ಮುಸ್ಲಿಂ ಸಮಾಜಕ್ಕೆ ಕೊಟ್ಟಿರುವ ಗೌರವದ ಬಗ್ಗೆ ನಾನು ಮಾತನಾಡಿದ್ದೇನೆ. ನಾನು ಹೈದರಾಬಾದ್ ನಲ್ಲಿ ಯಾವುದೇ ವ್ಯಕ್ತಿ ಅಥವಾ ಪಕ್ಷದವರ ಬಗ್ಗೆ ಅಗೌರವದಿಂದ ಮಾತನಾಡಿಲ್ಲ. ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಅತ್ಯುನ್ನತ ಗೌರವ ನೀಡಿದೆ ಎಂಬುದನ್ನೇ ಅಲ್ಲಿ ಪ್ರಸ್ತಾಪಿಸಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದರು.
ಇದನ್ನೂ ಓದಿ: ಕಾಂಗ್ರೆಸ್ ಪಕ್ಷ ಮುಸ್ಲಿಂ ಸಮಾಜಕ್ಕೆ ಕೊಟ್ಟಿರುವ ಗೌರವದ ಬಗ್ಗೆ ನಾನು ಮಾತನಾಡಿದ್ದು: ಸಚಿವ ಜಮೀರ್ ಸ್ಪಷ್ಟನೆ
ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯೆ
ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ಶಾಲೆಗಳಿಗೆ ಅನಾಮಧೇಯ ವ್ಯಕ್ತಿಗಳು ಬಾಂಬ್ ಬೆದರಿಕೆ ಒಡ್ಡಿರುವುದು ಕಳವಳಕಾರಿ. ಮಕ್ಕಳು, ಪೋಷಕರು ತೀವ್ರವಾಗಿ ಕಳವಳಗೊಂಡಿದ್ದು, ಅವರಲ್ಲಿ ಭೀತಿ ಸೃಷ್ಟಿಸಿ, ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ದುರುದ್ದೇಶದಿಂದಲೇ ದುಷ್ಟಶಕ್ತಿಗಳು ಇಂತಹ ಹುನ್ನಾರ ನಡೆಸಿರಬಹುದು ಎಂದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರವು ಯಾವುದೇ ಕಾರಣಕ್ಕೂ ಈ ಘಟನೆಯನ್ನು ಲಘುವಾಗಿ ಪರಿಗಣಿಸಬಾರದು. ಪೋಷಕರು ಮಕ್ಕಳನ್ನು ಧೈರ್ಯವಾಗಿ ಶಾಲೆಗಳಿಗೆ ಕಳಿಸುವಂತಹ ಸುರಕ್ಷತೆ, ಭದ್ರತೆಯ ಖಾತರಿಯನ್ನು ನೀಡಬೇಕು ಎಂದು ತಿಳಿಸಿದರು.
ಈ ಬೆದರಿಕೆಗಳ ಬಗ್ಗೆ ಅಮೂಲಾಗ್ರ ತನಿಖೆ ನಡೆಸಿ, ಇದರ ಹಿಂದೆ ಯಾರಿದ್ದಾರೆ? ಮೂಲ ಯಾವುದು ಎನ್ನುವುದನ್ನು ಪತ್ತೆ ಹಚ್ಚಿ ದುಷ್ಟರ ಹೆಡೆಮುರಿ ಕಟ್ಟಬೇಕು. ಈ ಬಗ್ಗೆ ಕೇಂದ್ರ ಸರ್ಕಾರದ ನೆರವು ಪಡೆಯುವ ಬಗ್ಗೆ ರಾಜ್ಯ ಸರ್ಕಾರ ಮೀನಾಮೇಷ ಎಣಿಸಬಾರದು ಎಂದು ಸಲಹೆ ನೀಡಿದ್ದಾರೆ.