ಬೆಂಗಳೂರು: ವಸಿಷ್ಠ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವಂಚನೆ ಪ್ರಕರಣ ಹಾಗೂ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಅವ್ಯವಹಾರದ ತನಿಖೆಯನ್ನು ಸಿಬಿಐಗೆ ವಹಿಸಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.
ಇದೇ ವರ್ಷ ಜನವರಿಯಲ್ಲಿ ಹಿಂದಿನ ಬಿಜೆಪಿ ಸರ್ಕಾರ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಅಕ್ರಮವನ್ನು ಸಿಬಿಐ ತನಿಖೆಗೆ ವಹಿಸುವ ಬಗ್ಗೆ ಅಂದಿನ ಸಹಕಾರ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಆದರೆ ಅದನ್ನು ಜಾರಿಗೊಳಿಸಿರಲಿಲ್ಲ. ಈಗ ರಾಜ್ಯ ಸರ್ಕಾರ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಾಗೂ ವಸಿಷ್ಠ ಕೋ-ಆಪರೇಟಿವ್ ಸೊಸೈಟಿ ಹಗರಣವನ್ನು ಸಿಬಿಐ ವಹಿಸಿದೆ.
ಗುರು ರಾಘವೇಂದ್ರ ಬ್ಯಾಂಕಿನಲ್ಲಿ 1,500 ಕೋಟಿ ರೂ. ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, 38,000 ಗ್ರಾಹಕರನ್ನು ಸಂಕಷ್ಟಕ್ಕೆ ತಳ್ಳಿದೆ. ಗುರು ರಾಘವೇಂದ್ರ ಬ್ಯಾಂಕ್ ಒಂದೇ ದಿನದಲ್ಲಿ 90 ಖಾತೆಗಳಿಗೆ 60 ಕೋಟಿ ರೂ. ಮೌಲ್ಯದ ಸಾಲಗಳನ್ನು ಬಿಡುಗಡೆ ಮಾಡಿದೆ ಎಂದು ಲೆಕ್ಕ ಪರಿಶೋಧನೆಯ ವರದಿ ಹೇಳಿದೆ.
ಇನ್ನು ಬೆಂಗಳೂರಿನ ಹನುಮಂತ ನಗರದಲ್ಲಿರುವ ವಸಿಷ್ಠ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದ 450 ರಿಂದ 500 ಕೋಟಿ ವಂಚನೆ ನಡೆದಿದೆ. ಬ್ಯಾಂಕ್ ನ ಅಧ್ಯಕ್ಷರ ಕುಟುಂಬಕ್ಕೆ 100 ಕೋಟಿಗೂ ಹೆಚ್ಚಿನ ಸಾಲ ನೀಡಲಾಗಿದೆ. ಬ್ಯಾಂಕ್ ಅಧ್ಯಕ್ಷರ ಮಗನ ಹೆಸರಲ್ಲೇ ಅನೇಕ ರೀತಿಯ ಲೋನ್ ಗಳನ್ನ ನೀಡಲಾಗಿದೆ. ನೂರಾರು ಕೋಟಿ ಲೋನ್ ನೀಡಿದರೂ, ಯಾವುದೇ ದಾಖಲೆಗಳನ್ನು ಪಡೆದಿಲ್ಲ ಎಂದು ಗ್ರಾಹಕರು ಆರೋಪಿಸಿದ್ದಾರೆ.