ಸಚಿವ ಕೃಷ್ಣ ಬೈರೇಗೌಡ 
ರಾಜ್ಯ

ಬರಗಾಲ: ಸಚಿವ ಕೃಷ್ಣ ಬೈರೇಗೌಡ ಉತ್ತರಕ್ಕೆ ಅಸಮಾಧಾನ, ಬಿಜೆಪಿ ಶಾಸಕರಿಂದ ಕಲಾಪ ಬಹಿಷ್ಕಾರ

ಬರಗಾಲದ ಕುರಿತು ವಿಧಾನಸಭೆಯಲ್ಲಿ ನಡೆದ ಚರ್ಚೆಯ ವೇಳೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ನೀಡಿದ ಉತ್ತರಕ್ಕೆ ಅಸಮಾಧಾನಗೊಂಡ ಬಿಜೆಪಿ ಶಾಸಕರು, ಕಲಾಪ ಬಹಿಷ್ಕರಿಸಿದ ಬೆಳವಣಿಗೆಗಳು ಬುಧವಾರ ನಡೆಯಿತು.

ಬೆಳಗಾವಿ: ಬರಗಾಲದ ಕುರಿತು ವಿಧಾನಸಭೆಯಲ್ಲಿ ನಡೆದ ಚರ್ಚೆಯ ವೇಳೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ನೀಡಿದ ಉತ್ತರಕ್ಕೆ ಅಸಮಾಧಾನಗೊಂಡ ಬಿಜೆಪಿ ಶಾಸಕರು, ಕಲಾಪ ಬಹಿಷ್ಕರಿಸಿದ ಬೆಳವಣಿಗೆಗಳು ಬುಧವಾರ ನಡೆಯಿತು.

ವಿಧಾನ ಪರಿಷತ್ ಕಲಾಪದಲ್ಲಿ ರಾಜ್ಯದಲ್ಲಿ ಉಂಟಾಗಿರುವ ಬರಗಾಲದ ಪರಿಸ್ಥಿತಿಯನ್ನು ನಿಭಾಯಿಸಲು ಮುಂಜಾಗ್ರತಾ ಕ್ರಮಕೈಗೊಳ್ಳುವ ಕುರಿತು ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಎನ್ ರವಿಕುಮಾರ, ನಿರಾಣಿ ಹನುಮಂತಪ್ಪ ರುದ್ರಪ್ಪ ಹಾಗೂ ಛಲವಾದಿ ನಾರಾಯಣಸ್ವಾಮಿ ಅವರು ನಿಯಮ 68ರ ಮೇರೆಗೆ ಎತ್ತಿದ ಚರ್ಚೆಗೆ ಸರ್ಕಾರದ ಪರವಾಗಿ ಕೃಷ್ಣಬೈರೇಗೌಡ ಅವರು ಉತ್ತರಿಸಿದರು.

ಬರ ನಿರ್ವಹಣೆಗಾಗಿ ನಾವು ಈಗಾಗಲೇ ಕೇಂದ್ರ ಸರ್ಕಾರಕ್ಕೆ 18,171 ಕೋಟಿ ರೂ. ಪರಿಹಾರವನ್ನು ಎನ್‌ಡಿಆರ್‌ಎಫ್ ಅನ್ವಯ ಕೋರಿ ಮನವಿ ಮಾಡಿದ್ದೇವೆ. ಸೆಪ್ಟೆಂಬರ್ 23ರಂದು ಕೇಂದ್ರ ಕೃಷಿ, ಗೃಹ ಸಚಿವರ ಭೇಟಿಗೆ ಪ್ರಯತ್ನ ಕೂಡ ನಡೆಸಲಾಗಿದೆ. ಕೇಂದ್ರ ಬರ ಅಧ್ಯಯನ ತಂಡವು ರಾಜ್ಯದಲ್ಲಿ ಅಕ್ಟೋಬರ್ 4 ರಿಂದ ಅಕ್ಟೋಬರ್ 9ರ ವರೆಗೆ ರಾಜ್ಯದ 13 ಜಿಲ್ಲೆಗಳಲ್ಲಿ ಭೇಟಿ ನೀಡಿ ಬರದ ಪರಿಸ್ಥಿತಿಯನ್ನು ಅವಲೋಕಿಸಿದೆ. ಈ ತಂಡದವರಿಗೆ ನಾವು ರಾಜ್ಯದಲ್ಲಿನ ಬರ ಪರಿಸ್ಥಿತಿಯ ತೀವ್ರತೆಯನ್ನು ಮನವರಿಕೆ ಮಾಡಿದ್ದೇವೆ ಎಂದು ಹೇಳಿದರು.

ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ಸೇರಿದಂತೆ ಒಟ್ಟು 12 ರಾಜ್ಯಗಳಲ್ಲಿ ಮಳೆ ಕೊರತೆಯಾಗಿದೆ. ಎಲ್ಲ ರಾಜ್ಯಗಳು ಬರ ಪರಿಹಾರಕ್ಕೆ ಕೇಂದ್ರಕ್ಕೆ ಮನವಿ ಮಾಡುವ ವಿಷಯದಲ್ಲಿ ಕರ್ನಾಟಕ ರಾಜ್ಯವು ಮಂಚೂಣಿಯಲ್ಲಿದೆ. ನಾವು ಮನವಿ ಮಾಡಿದ ತಿಂಗಳ ನಂತರ ಆಂಧ್ರಪ್ರದೇಶ ಮತ್ತು ಎರಡು ತಿಂಗಳ ನಂತರ ಮಹಾರಾಷ್ಟ್ರದಿಂದ ಕೇಂದ್ರಕ್ಕೆ ಮನವಿ ಸಲ್ಲಿಕೆಯಾಗಿವೆ. ಇದು ಬರ ನಿರ್ವಹಣೆ ವಿಷಯದಲ್ಲಿ ರಾಜ್ಯವು ಸಾಕಷ್ಟು ಮುಂಜಾಗ್ರತೆ ವಹಿಸಿದೆ ಎಂಬುದನ್ನು ತಿಳಿಸುತ್ತದೆ ಎಂದು ಸಚಿವರು ಸದಸ್ಯರಿಗೆ ಮನವರಿಕೆ ಮಾಡಿದರು.

ರಾಜ್ಯದ 26 ಗ್ರಾಮಗಳಲ್ಲಿ 22 ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲಾಗುತ್ತಿದೆ. 89 ಗ್ರಾಮಗಳಲ್ಲಿ ಬಾಡಿಗೆ ಆಧಾರದ ಮೇಲೆ ಖಾಸಗಿ ಬೋರ್​ವೆಲ್ ಮೂಲಕ ನೀರು ಪೂರೈಸಲಾಗುತ್ತಿದೆ. ಪ್ರತಿ 15 ದಿನಕ್ಕೊಮ್ಮೆ ಅಧಿಕಾರಿಗಳಿಗೆ ಬರ ನಿರ್ವಹಣೆ ಕುರಿತು ಸಭೆ ನಡೆಸಲಾಗುತ್ತಿದೆ. ಸಮಸ್ಯಾತ್ಮಕ ಗ್ರಾಮಗಳನ್ನು ಪಟ್ಟಿ ಮಾಡಿ ಅಂತಹ ಕಡೆಗಳಲ್ಲಿ ಮುಂದೆ ಎದುರಾಗಲಿರುವ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಈಗಿನಿಂದಲೇ ಟೆಂಡರ್ ಪ್ರಕ್ರಿಯೆ ನಡೆಸಿ ನೀರು ಸರಬರಾಜು ಸಿದ್ಧತೆಗೆ ಅಗತ್ಯ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಜನವರಿ, ಫೆಬ್ರುವರಿ ಮತ್ತು ಮಾರ್ಚ್​ನಲ್ಲಿ ಜಾನುವಾರುಗಳಿಗೆ ಮೇವಿನ ಪೂರೈಕೆಗೆ ಅನುಕೂಲವಾಗುವಂತೆ 7,63,000 ಮೇವಿನ ಬೀಜದ ಕಿಟ್‌ಗಳನ್ನು ವಿತರಿಸಲಾಗಿದೆ. ರಾಜ್ಯದ ಮೇವನ್ನು ಬೇರೆಡೆ ಸಾಗಿಸದಂತೆ ಈಗಾಗಲೇ ನವೆಂಬರ್ 22ರಂದೇ ನಿರ್ಬಂಧ ಆದೇಶ ಹೊರಡಿಸಲಾಗಿದೆ. ನೀರು ಸರಬರಾಜು, ಮೇವು ಖರೀದಿ ಸೇರಿದಂತೆ ಬರ ನಿರ್ವಹಣೆಗಾಗಿ ಜಿಲ್ಲಾ ಹಂತದಲ್ಲಿ ಈಗಾಗಲೇ 895 ಕೋಟಿ ರೂ.ಗಳನ್ನು ಇಟ್ಟಿದ್ದೇವೆ.

ಬರ ಹಿನ್ನೆಲೆಯಲ್ಲಿ ಜನರು ಗುಳೆ ಹೋಗುವುದನ್ನು ತಡೆಯಲು ಎಲ್ಲಾ ರೀತಿಯ ಅಗತ್ಯ ಕ್ರಮ ವಹಿಸಲಾಗಿದೆ. ಒಟ್ಟು 13 ಕೋಟಿ ರೂಪಾಯಿ ಮಾನವ ದಿನಗಳ ಅನುದಾನ ನಮ್ಮ ರಾಜ್ಯಕ್ಕೆ ಲಭ್ಯವಾಗಿದೆ. ಈ ಗುರಿಯನ್ನು ಈಗಾಗಲೇ ನಾವು ತಲುಪಿದ್ದು, ಈ ಅವಧಿಯಲ್ಲಿ ನರೇಗಾಕ್ಕೆ ನಾವು ವಿಶೇಷ ಆದ್ಯತೆ ನೀಡಿದ್ದೇವೆ. ಬರ ಹಿನ್ನೆಲೆಯಲ್ಲಿ ಮಾನವು ಉದ್ಯೋಗ ದಿನಗಳನ್ನು 50 ದಿನಗಳಿಗೆ ಹೆಚ್ಚಿಸಲು ಸೆ.23ರಂದು ಮನವಿ ಮಾಡಿದ್ದೇವೆ ಎಂದರು.

ಬರ ನಿರ್ವಹಣೆಗಾಗಿ ತಮ್ಮ ಅಧ್ಯಕ್ಷತೆಯಲ್ಲಿ ಈಗಾಗಲೇ ಸಂಪುಟ ಉಪ ಸಮಿತಿಯೊಂದನ್ನು ರಚಿಸಲಾಗಿದೆ. ಜೂನ್‌ದಿಂದ ಇಲ್ಲಿವರೆಗೆ ಒಟ್ಟು 8 ಸಭೆಗಳು ನಡೆದಿವೆ. ತಾವು ರಾಜ್ಯದ ಜಿಲ್ಲೆಗಳಿಗೆ ತೆರಳಿ ಬರದ ತಯಾರಿ ಕೆಲಸವನ್ನು ಅವಲೋಕಿಸಿದ್ದನ್ನು ಸಚಿವರು ತಿಳಿಸಿದರು. ರಾಜ್ಯ ನಾಲ್ಕು ವಿಭಾಗಗಳ ಅಧಿಕಾರಿಗಳ ಸಭೆ ನಡೆಸಿ ಬರ ನಿರ್ವಹಣೆಯ ಬಗ್ಗೆ ಸಮಗ್ರ ಚರ್ಚಿಸಿದ್ದಾಗಿ ಸಚಿವರು ತಿಳಿಸಿದರು.

ಬರ ನಿರ್ವಹಣೆ ವಿಷಯವನ್ನು ಯಾರು ಕೂಡ ಹಗುರವಾಗಿ ತೆಗೆದುಕೊಳ್ಳಬಾರದು. ಖುದ್ದು ಶಾಸಕರೇ ನೋಡಬೇಕು ಎಂದು ಮಾನ್ಯ ಮುಖ್ಯಮಂತ್ರಿಗಳು ಸಚಿವ ಸಂಪುಟ ಸಭೆಯಲ್ಲಿ ಎಲ್ಲ ಶಾಸಕರಿಗೆ ಈಗಾಗಲೇ ಸೂಚನೆ ನೀಡಿದ್ದಾರೆ. ಬರ ನಿರ್ವಹಣೆಗಾಗಿ 18,171 ಕೋಟಿ ರೂ. ಪರಿಹಾರವನ್ನು ಎನ್‌ಡಿಆರ್‌ಎಫ್ ಅನ್ವಯ ರಾಜ್ಯಕ್ಕೆ ನೀಡಲು ಕೋರಿ ಮಾನ್ಯ ಮುಖ್ಯಮಂತ್ರಿಗಳು ಈಗಾಗಲೇ ಎರಡ್ಮೂರು ಬಾರಿ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಈಗಾಗಲೇ 183 ಟಾಸ್ಕ್​ಫೋರ್ಸ್ ಸಭೆಗಳು ನಡೆದಿವೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ 133 ಸಭೆಗಳು ಜರುಗಿವೆ. ಕೇಂದ್ರ ಗೃಹ, ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಭೇಟಿ ಮಾಡಿ ರಾಜ್ಯದ ಬರ ಪರಿಸ್ಥಿತಿಯ ಬಗ್ಗೆ ಮನವರಿಕೆ ಮಾಡಿದ್ದೇವೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದಸ್ಯರಿಗೆ ವಿವರಿಸಿದರು.

ಆದಾಗ್ಯೂ, ಬರ ಪರಿಸ್ಥಿತಿಯ ಕುರಿತು ಸಚಿವರ ಉತ್ತರದಿಂದ ವಿರೋಧ ಪಕ್ಷದ ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು. ಬರಪೀಡಿತವಾಗಿರುವ ಹಲವಾರು ಪ್ರದೇಶಗಳಲ್ಲಿ ಪರಿಸ್ಥಿತಿ ನಿಭಾಯಿಸಲು ಸರ್ಕಾರವು ಸಾಕಷ್ಟು ಕ್ರಮಗಳನ್ನು ತೆಗೆದುಕೊಂಡಿಲ್ಲ. ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಕಲಾಪವನ್ನು ಬಹಿಷ್ಕರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT