ರಾಜ್ಯ

ರಾಜ್ಯದ 4 ವಿಮಾನ ನಿಲ್ದಾಣಗಳಿಗೆ ಮಹನೀಯರ ಹೆಸರಿಡಲು ಸದನ ಒಪ್ಪಿಗೆ; ಕೇಂದ್ರಕ್ಕೆ ಶಿಫಾರಸು

Manjula VN

ಬೆಂಗಳೂರು: ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳ ಹೆಸರನ್ನು ಬದಲಾಯಿಸುವ ನಿರ್ಣಯವನ್ನು ಕರ್ನಾಟಕ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.

ನಾಲ್ಕು ವಿಮಾನ ನಿಲ್ದಾಣಗಳಿಗೆ ಪ್ರಮುಖ ವ್ಯಕ್ತಿಗಳ ಹೆಸರಿಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ನಿರ್ಣಯ ಇದಾಗಿದೆ. ಈ ನಿರ್ಣಯ ಸರ್ವಾನುಮತದಿಂದ ಅಂಗೀಕಾರವಾಗಿದೆ.

ನಿರ್ಣಯದ ಪ್ರಕಾರ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಡಾ.ಕೆ.ವಿ.ಪುಟ್ಟಪ್ಪ (ಕುವೆಂಪು) ಹಾಗೂ ವಿಜಯಪುರ ವಿಮಾನ ನಿಲ್ದಾಣಕ್ಕೆ ಶ್ರೀ ಜಗದ್ಜ್ಯೋತಿ ಬಸವೇಶ್ವರ ಹೆಸರಿಸಲು ನಿರ್ಧರಿಸಲಾಗಿದೆ.

ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ಮಂಡಿಸಿದ ನಿರ್ಣಯಕ್ಕೆ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರು ಒಮ್ಮತದಿಂದ ಅಂಗೀಕಾರ ನೀಡಿದರು. ಪ್ರತಿಪಕ್ಷ ನಾಯಕ ಆರ್‌. ಅಶೋಕ್‌, ಬಿಜೆಪಿಯ ಬಸನಗೌಡ ಪಾಟೀಲ್‌ ಯತ್ನಾಳ್‌, ಅರವಿಂದ ಬೆಲ್ಲದ್‌, ಆರಗ ಜ್ಞಾನೇಂದ್ರ, ಕಾಂಗ್ರೆಸ್‌ನ ಅಬ್ಬಯ್ಯ ಪ್ರಸಾದ್‌ ಸೇರಿದಂತೆ ಹಲವರು ಸ್ವಾಗತಿಸಿದರು.

ಬಿಜೆಪಿಯ ವಿ.ಸುನೀಲ್‌ ಕುಮಾರ್‌, ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯ ಹೆಸರಿಡಬೇಕು ಎಂದು ಆಗ್ರಹಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಎಂ.ಬಿ. ಪಾಟೀಲ್‌, ''ಮಂಗಳೂರು, ಮೈಸೂರು, ಕಲಬುರಗಿ ವಿಮಾನ ನಿಲ್ದಾಣಕ್ಕೆ ಗಣ್ಯರ ಹೆಸರಿಡುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು,'' ಎಂದು ಹೇಳಿದರು.

ಈ ನಡುವೆ ಅಬ್ಬಯ್ಯ ಪ್ರಸಾದ್‌, ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್‌ ಅವರ ಹೆಸರಿಡಬೇಕು ಎಂದು ಒತ್ತಾಯಿಸಿದ್ದಕ್ಕೆ ಬಿಜೆಪಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಬಿಜೆಪಿ- ಕಾಂಗ್ರೆಸ್‌ ಸದಸ್ಯರ ನಡುವೆ ಮಾತಿನ ವಾಕ್ಸಮರ, ವಾಗ್ವಾದ ನಡೆಯಿತು..

SCROLL FOR NEXT