ಹುಬ್ಬಳ್ಳಿ: ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯ ಮೇಲಾದ ದೌರ್ಜನ್ಯ ಘಟನೆಯನ್ನು ರಾಜಕೀಯ ಲಾಭಕ್ಕೆ ಬಳಸುವ ದುರ್ಬುದ್ಧಿ ತೋರಿರುವ ಬಿಜೆಪಿ ನಾಯಕರು ಸತ್ಯಶೋಧನೆಯ ಹೆಸರಿನಲ್ಲಿ ನ್ಯಾಯಾಲಯದ ಆದೇಶ, ನಿರ್ದೇಶನಗಳನ್ನು ಗಾಳಿಗೆ ತೂರಿ ಸಂತ್ರಸ್ತೆಯನ್ನು ಭೇಟಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಮುಖ್ಯಮಂತ್ರಿ, ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಸಂದರ್ಶಕರ ಭೇಟಿಯು ಆಕೆಯ ಆರೋಗ್ಯ ಹಾಗೂ ಚಿಕಿತ್ಸೆಯ ಮೇಲೆ ಪರಿಣಾಮ ಬೀರಲಿದೆ. ಹಾಗಾಗಿ, ಮಹಿಳೆಯ ಹಿತದೃಷ್ಟಿಯಿಂದ ಸಂದರ್ಶಕರ ಭೇಟಿಯನ್ನು ನಿರ್ಬಂಧಿಸುವುದು ಅಗತ್ಯ ಎಂದು ಭಾವಿಸುವುದಾಗಿ ಹೈಕೋರ್ಟ್ ಹೇಳಿರುವುದಾಗಿ ತಿಳಿಸಿದ್ದಾರೆ.
ಯಾವುದೇ ವ್ಯಕ್ತಿ, ಸಮೂಹ, ಗುಂಪು, ಸಂಘಟನೆ, ರಾಜಕೀಯ ಪಕ್ಷಗಳು ಹಾಗೂ ಇನ್ನಿತರರು ಮಹಿಳೆಯ ಚಿಕಿತ್ಸೆಯ ಹೊಣೆ ಹೊತ್ತಿರುವ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಯವರ ಪೂರ್ವ ಲಿಖಿತ ಅನುಮತಿ ಇಲ್ಲದೇ ಸಂತ್ರಸ್ತ ಮಹಿಳೆಯನ್ನು ಭೇಟಿಯಾಗಬಾರದು ಎಂದು ಆದೇಶಿಸಿದೆ. ಹೀಗಿದ್ದರೂ ಒಂದು ಅಮಾನುಷ ಘಟನೆಯನ್ನು ರಾಜಕೀಯ ಲಾಭಕ್ಕೆ ಬಳಸುವ ದುರ್ಬುದ್ಧಿ ತೋರಿರುವ ಬಿಜೆಪಿ ನಾಯಕರು ಸತ್ಯಶೋಧನೆಯ ಹೆಸರಿನಲ್ಲಿ ನ್ಯಾಯಾಲಯದ ಆದೇಶ, ನಿರ್ದೇಶನಗಳನ್ನು ಗಾಳಿಗೆ ತೂರಿ ಸಂತ್ರಸ್ತೆಯನ್ನು ಭೇಟಿಯಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇದಕ್ಕೂ ಮುನ್ನಾ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಬಿಜೆಪಿಯ ಸತ್ಯಶೋಧನಾ ತಂಡದ ಭೇಟಿ ರಾಜಕೀಯ ಪ್ರೇರಿತ. ಈ ಪ್ರಕರಣದಲ್ಲಿ ಸರ್ಕಾರ ಕಾನೂನು ರೀತ್ಯ ಎಲ್ಲ ಕ್ರಮಗಳನ್ನು ತೆಗೆದುಕೊಂಡಿದೆ. ಗೃಹಸಚಿವರು ಆಸ್ಪತ್ರೆಗೆ ತೆರಳಿ ಸಂತ್ರಸ್ಥೆಯನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ದೌರ್ಜನ್ಯಕ್ಕೊಳಗಾದ ಮಹಿಳೆಗೆ ಪರಿಹಾರ ನೀಡಲು ಕ್ರಮಕೈಗೊಳ್ಳಲಾಗಿದ್ದು, ಆರೋಪಿಗಳನ್ನು ತಕ್ಷಣ ಬಂಧಿಸಲಾಗಿದೆ ಎಂದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಈ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ನ್ಯಾಷನಲ್ ಕ್ರೈಂ ಬ್ಯೂರೋ ಪ್ರಕಾರ ಬಿಜೆಪಿ ಅವಧಿಯಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ಹೆಚ್ಚು ನಡೆದಿವೆ. ಉತ್ತರಪ್ರದೇಶದ ಬಿಜೆಪಿಯ ಶಾಸಕರೊಬ್ಬರು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅಪರಾಧಕ್ಕಾಗಿ 25 ವರ್ಷ ಜೈಲುಶಿಕ್ಷೆಗೆ ಗುರಿಯಾಗಿದ್ದಾರೆ. ಇದರ ಬಗ್ಗೆ ನಡ್ಡಾ ಪ್ರತಿಕ್ರಿಯೆ ನೀಡಿದ್ದಾರ? ಎಂದು ಪ್ರಶ್ನಿಸಿದರು.
ನವದೆಹಲಿಯ ಸಂಸತ್ ಭವನದಲ್ಲಿ ಭದ್ರತಾ ಲೋಪವಾಗಿರುವ ಬಗ್ಗೆ ಸಂಸತ್ತಿನ ವಿಪಕ್ಷಗಳು ರಾಜಕೀಯ ಎಲ್ಲಿ ಮಾಡುತ್ತಿವೆ? ಸಂಸತ್ತಿನಲ್ಲಿ ಭದ್ರತಾ ಲೋಪವಾಗಿರುವುದು ಸತ್ಯ. ಈ ಸತ್ಯವನ್ನು ಹೇಳಿದರೆ ರಾಜಕೀಯ ಹೇಗಾಗುತ್ತೆ? ಎಂದು ಪ್ರಶ್ನಿಸಿದ ಮುಖ್ಯಮಂತ್ರಿ, ಜಾತಿ ಗಣತಿ ವರದಿ ಇನ್ನೂ ಸರ್ಕಾರದ ಕೈಸೇರಿಲ್ಲ. ಹೀಗಾಗಿ ಯಾರಿಗೂ ಆ ವರದಿಯಲ್ಲಿರುವ ಅಂಶಗಳೇನು ಎಂಬ ಮಾಹಿತಿ ಇಲ್ಲ, ಕೇವಲ ಊಹೆಗಳ ಮೇಲೆ ಮಾತನಾಡುತ್ತಿದ್ದಾರೆ. ವರದಿ ಬಂದ ಮೇಲೆ ಸಾಧಕ - ಬಾಧಕಗಳೇನು ಎಂದು ತಿಳಿಯುತ್ತದೆ ಎಂದು ತಿಳಿಸಿದರು.