ಬೆಂಗಳೂರು: ನಗರದ ಮಾಗಡಿ ರಸ್ತೆ ನೈಸ್ ರೋಡ್ ಜಂಕ್ಷನ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಅಮೆಜಾನ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಸಂತೋಷ್ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸಂತೋಷ್ ಅವರು ರಾತ್ರಿ ಕೆಲಸ ಮುಗಿಸಿ ಕಾರಿನಲ್ಲಿ ಸಾಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ನೈಸ್ ರಸ್ತೆ ಜಂಕ್ಷನ್ ಬಳಿ ನಿಂತಿದ್ದ ಲಾರಿಗೆ ಕಾರು ಹಿಂದಿನಿಂದ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದ್ದು ಸಂತೋಷ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಳಗ್ಗೆ ಈ ಘಟನೆ ಬೆಳಕಿಗೆ ಬಂದಿದ್ದು, ಕಾರೂ ಸಂಪೂರ್ಣ ನಜ್ಜುಗುಜ್ಜಾಗಿದೆ. ಹೀಗಾಗಿ ಕಾರು ವಿಪರೀತ ವೇಗದಲ್ಲಿ ಇತ್ತು ಎಂದು ಹೇಳಲಾಗುತ್ತಿದೆ. ಸಂತೋಷ್ ಅವರ ಕುಟುಂಬಿಕರು, ಸ್ನೇಹಿತರು ಆಗಮಿಸಿದ್ದು, ಮೃತದೇಹವನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.