ರಾಜ್ಯ

ಲೋಕಸಭಾ ಚುನಾವಣೆಗೆ ಸಿದ್ಧತೆ: ಯುವ ಮತದಾರರ ಸೆಳೆಯಲು 5ನೇ ಗ್ಯಾರಂಟಿ 'ಯುವನಿಧಿ' ಯೋಜನೆಗೆ ಇಂದು ಸಿಎಂ ಚಾಲನೆ

Manjula VN

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷ, ಯುವ ಮತದಾರರ ಮನ ಗೆಲ್ಲಲು ಮಂಗಳವಾರ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಚಾಲನೆ ನೀಡುತ್ತಿದೆ.

ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ.

ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ವತಿಯಿಂದ ಯುವನಿಧಿ ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಎಂಬ ಶೀರ್ಷಿಕೆಯಡಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ಇನ್ನು ರಾಷ್ಟ್ರ ಕವಿ, ಯುವ ಸಮುದಾಯದ ಸ್ಪೂರ್ತಿ ಕುವೆಂಪುರವರ ಪುಣ್ಯಭೂಮಿ ಶಿವಮೊಗ್ಗದಲ್ಲಿ 2024ರ ಜನವರಿ 12ರಂದು ಈ ಯೋಜನೆಗೆ ಚಾಲನೆ ನೀಡಲು ಸರ್ಕಾರ ಸಿದ್ದತೆ ಮಾಡಿಕೊಂಡಿದೆ. ಅಂದೇ ಯೂತ್ ಐಕಾನ್ ವಿವೇಕಾನಂದರ ಜನ್ಮ ಜಯಂತಿ ಎನ್ನುವುದು ಮತ್ತೊಂದು ಗಮನಾರ್ಹ ವಿಚಾರವಾಗಿದೆ.

ಏನಿದು ಯುವನಿಧಿ ಯೋಜನೆ?
ಕಾಂಗ್ರೆಸ್‌ ಪಕ್ಷವು ಚುನಾವಣಾ ಪೂರ್ವದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿತ್ತು. ಇದರಂತೆ ಅಧಿಕಾರಕ್ಕೆ ಬಂದ ಬಳಿಕ ಐದು ಗ್ಯಾರಂಟಿಗಳ ಪೈಕಿ ನಾಲ್ಕು ಯೋಜನೆಗಳನ್ನು ಈಗಾಗಲೇ ಜಾರಿಗೆ ತಂದಿದ್ದು, ಇದೀಗ 5ನೇ ಗ್ಯಾರಂಟಿ ಯೋಜನೆ (ಯುವನಿಧಿ ಯೋಜನೆ) ಜಾರಿಯಾಗುತ್ತಿದೆ.

ಯೋಜನೆಯಲ್ಲಿ ಯುವಕರಿಗೆ ಕೆಲಸ ಸಿಗುವವರೆಗೆ ಹಣ ಲಭ್ಯವಾಗಲಿದೆ.  2022-23ನೇ ಸಾಲಿನಲ್ಲಿ ಪದವಿ, ಡಿಪ್ಲೋಮಾ ತೇರ್ಗಡೆ ಆಗಿ 6 ತಿಂಗಳಿಂದ ಉದ್ಯೋಗ ಸಿಗದೇ ಇರುವವರಿಗೆ ಯುವನಿಧಿ ಯೋಜನೆಯ ಲಾಭ ಸಿಗಲಿದೆ.

ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್, ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್ ಸೇರಿದಂತೆ ಇತರೆ ಸೇವಾ ಕೇಂದ್ರಗಳಲ್ಲಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಳ್ಳಲು ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಭರಿಸಬೇಕಾದ ಅಗತ್ಯ ಇಲ್ಲ.

ಯೋಜನೆ ಮೂಲಕ ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ 3000 ರೂ. ನಿಗದಿ ಮಾಡಿದ್ದರೆ, ಡಿಪ್ಲೊಮ ಪಾಸ್ ನಿರುದ್ಯೋಗಿಗಳಿಗೆ ಮಾಸಿಕ 1500 ರೂ. ಸಿಗಲಿದೆ. ಕರ್ನಾಟಕ ಸರ್ಕಾರದ ಯುವ ನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆಯನ್ನು 2 ವರ್ಷಗಳ ಅವಧಿಗೆ ನಿರುದ್ಯೋಗಿ ಯುವಕರಿಗೆ ಮಾತ್ರ ನೀಡಲಾಗುತ್ತದೆ. ಫಲಾನುಭವಿಯು 2 ವರ್ಷಗಳ ನಂತರ ಅಥವಾ 2 ವರ್ಷಗಳ ಅವಧಿಯಲ್ಲಿ ಉದ್ಯೋಗವನ್ನು ಕಂಡುಕೊಂಡರೆ ನಿರುದ್ಯೋಗ ಭತ್ಯೆಯನ್ನು ತಕ್ಷಣವೇ ನಿಲ್ಲಿಸಲಾಗುತ್ತದೆ.

SCROLL FOR NEXT