ರಾಜ್ಯ

ಉದ್ಯೋಗಾಕಾಂಕ್ಷಿಗಳಿಗೆ Good News: ಜನವರಿಯಲ್ಲಿ ರಾಜ್ಯ ಸರ್ಕಾರದಿಂದಲೇ ಉದ್ಯೋಗ ಮೇಳ!

Srinivasamurthy VN

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಜನವರಿ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲು ಯೋಜಿಸಿದೆ.

ಹೌದು.. ಜನವರಿಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಉದ್ಯೋಗ ಮೇಳ ನಡೆಯಲಿದ್ದು, ಅದನ್ನು ಪರಿಣಾಮಕಾರಿಯಾಗಿ ಆಯೋಜಿಸಲು ಸಚಿವರ ತಂಡವನ್ನು ರಚಿಸಲಾಗುವುದು ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ.

ರಾಜ್ಯ ಮಟ್ಟದ ಉದ್ಯೋಗ ಮೇಳ ಆಯೋಜಿಸುವ ಸಂಬಂಧ ಹಿರಿಯ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಇಂದು ಪೂರ್ವಭಾವಿ ಸಭೆ ನಡೆಸಿದರು. ಈ ವೇಳೆ ರಾಜ್ಯದ ಯುವಕರಿಗೆ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಉದ್ಯೋಗ ನೀತಿಯ ಅಗತ್ಯವನ್ನು ಒತ್ತಿ ಹೇಳಿದ ಅವರು, ನೀತಿಯನ್ನು ರೂಪಿಸಲು ಸಿದ್ಧತೆಗಳನ್ನು ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.

ಕೈಗಾರಿಕಾ ಸಚಿವ ಎಂ ಬಿ ಪಾಟೀಲ್, ಐಟಿ ಮತ್ತು ಬಿಟಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಕೌಶಲ್ಯಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿಸುಧಾಕರ್, ಯುವ ಸಬಲೀಕರಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ ನಾಗೇಂದ್ರ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನೊಳಗೊಂಡ ಸಚಿವರ ತಂಡವನ್ನು ಸಿಎಂ ಸಿದ್ದರಾಮಯ್ಯ ರಚಿಸಿದರು. 

ಸಚಿವರ ತಂಡವು ಉದ್ಯೋಗದಾತರೊಂದಿಗೆ ಸಭೆ ಮತ್ತು ಚರ್ಚೆಗಳನ್ನು ನಡೆಸಬೇಕು ಮತ್ತು ಉದ್ಯೋಗ ಮೇಳದಲ್ಲಿ ಹೆಚ್ಚಿನ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದಂತೆ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದ ಸಿದ್ದರಾಮಯ್ಯ, ಉದ್ಯೋಗಾಕಾಂಕ್ಷಿಗಳ ಕೌಶಲ್ಯದ ನಡುವಿನ ಅಂತರವನ್ನು ಕಡಿಮೆ ಮಾಡಲು ಕೈಗಾರಿಕೆಗಳೊಂದಿಗೆ ಚರ್ಚಿಸಿ ದೂರಗಾಮಿ ಕಾರ್ಯಕ್ರಮ ರೂಪಿಸಲು ಮತ್ತು ಕೈಗಾರಿಕೆಗಳ ಅಗತ್ಯತೆಗಳು ಪೂರೈಸಲು ಶಿಫಾರಸು ಮಾಡುವಂತೆ ಸಚಿವರ ತಂಡಕ್ಕೆ ಸೂಚಿಸಿದರು.

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಗೃಹ ಸಚಿವ ಜಿ ಪರಮೇಶ್ವರ್ ಸೇರಿದಂತೆ ಸಚಿವರು ಸಭೆಯಲ್ಲಿ ಉಪಸ್ಥಿತರಿದ್ದರು.

SCROLL FOR NEXT