ರಾಜ್ಯ

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

Manjula VN

ಬೆಂಗಳೂರು: ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗಿಗಳ ಸಹಾಯಕರು ತಂಗಲು ವ್ಯವಸ್ಥೆ ಕಲ್ಪಿಸದೇ ಇರುವುದು ಸೇರಿದಂತೆ ಅಲ್ಲಿನ ಅವ್ಯವಸ್ಥೆಗಳ ಕುರಿತು ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್‌. ಫಣೀಂದ್ರ ಅವರು, ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಈ ಸಂಬಂಧ ವಿಚಾರಣೆ ಆರಂಭಿಸಿದ್ದಾರೆಂದು ವರದಿಗಳು ತಿಳಿಸಿವೆ.

ಆಸ್ಪತ್ರೆಯಲ್ಲಿರುವ ಸಮಸ್ಯೆಗಳ ಕುರಿತು ಮಾಧ್ಯಮದಲ್ಲಿ ಪ್ರಕಟವಾದ ವರದಿ ಆಧರಿಸಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿರುವ ಉಪಲೋಕಾಯುಕ್ತರು, 4 ವಾರಗಳೊಳಗೆ ಪ್ರತಿಕ್ರಿಯೆ ನೀಡುವಂತೆ ವಿಕ್ಟೋರಿಯಾ ಆಸ್ಪತ್ರೆಗೆ ನೋಟಿಸ್‌ ಜಾರಿಗೊಳಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರು ಹಾಗೂ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಿಂದಲೂ ವರದಿ ಕೇಳಿದ್ದಾರೆಂದು ತಿಳಿದುಬಂದಿದೆ.

ವೈದ್ಯರು ಮತ್ತು ಸಿಬ್ಬಂದಿ ಕೊರತೆ, ರೋಗಿಗಳ ಸಹಾಯಕರಿಗೆ ವಸತಿ ಸೌಲಭ್ಯದ ಕೊರತೆ, ವಾಹನಗಳ ನಿಲುಗಡೆ ವ್ಯವಸ್ಥೆಯಲ್ಲಿ ಸಮಸ್ಯೆ, ಔಷಧ ಪೂರೈಕೆಯಲ್ಲಿ ಲೋಪ ಸೇರಿದಂತೆ ಹಲವು ಅಂಶಗಳ ಕುರಿತು ಲೋಕಾಯುಕ್ತ ವಿಚಾರಣೆ ಆರಂಭಿಸಿದೆ ಎನ್ನಲಾಗಿದೆ.

SCROLL FOR NEXT