ರಾಜ್ಯ

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೈಗಾರಿಕೆಗಳ ಸ್ಥಾಪಿಸಿ: ಉದ್ಯಮಿಗಳಿಗೆ ಸಚಿವ ನಿರಾಣಿ

Manjula VN

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಉದ್ಯಮಿಗಳು ಸರ್ಕಾರ ನೀಡುತ್ತಿರುವ ಸವಲತ್ತುಗಳನ್ನು ಪಡೆದು ಈ ಪ್ರದೇಶದಲ್ಲಿ ಕೈಗಾರಿಕೆಗಳ ಸ್ಥಾಪಿಸುವಂತೆ ಮಧ್ಯಮ ಮತ್ತು ಬೃಹತ್ ಕೈಗಾರಿಕೆಗಳ ಸಚಿವ ಮುರುಗೇಶ್ ನಿರಾಣಿ ಅವರು ಸೋಮವಾರ ಹೇಳಿದರು.

ಮಹಿಳಾ ಉದ್ಯಮಿಗಳ ಒಕ್ಕೂಟ ಮತ್ತು ಕೆ-ಎಲ್ಎಎಂಪಿ ಸಂಸ್ಥೆ ಜಂಟಿಯಾಗಿ ಆಯೋಜಿಸಿದ್ದ ಇ-ಕಾಮರ್ಸ್ ಡಿಜಿಟಲ್ ಮಾರ್ಕೆಟಿಂಗ್ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶಿಕ್ಷಣ ಮತ್ತು ಉದ್ಯಮಶೀಲತೆ ಕೈಗಾರಿಕೆಗಳ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸಿದೆ. ಕಲ್ಯಾಣ ಕರ್ನಾಟಕ ಭಾಗದ ಸಾವಿರಾರು ಜನರು ಪ್ರತಿಷ್ಠಿತ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದರೂ ಕೈಗಾರಿಕೆ ಸ್ಥಾಪಿಸಲು ಮುಂದೆ ಬರುತ್ತಿಲ್ಲ. ಹೀಗಾಗಿ ಕಲ್ಯಾಣ ಕರ್ನಾಟಕ ಭಾಗದ ಉದ್ಯಮಿಗಳು ಸರ್ಕಾರ ನೀಡುತ್ತಿರುವ ಸವಲತ್ತುಗಳನ್ನು ಪಡೆದು ಈ ಪ್ರದೇಶದಲ್ಲಿ ಕೈಗಾರಿಕೆಗಳ ಸ್ಥಾಪಿಸಬೇಕು ಎಂದು ಹೇಳಿದರು.

"ಮೇಕ್ ಇನ್ ಇಂಡಿಯಾ" ಉಪಕ್ರಮವನ್ನು ನಾವು ಜಾರಿಗೆ ತರಬೇಕು ಮತ್ತು ನಮ್ಮದೇ ಜನರು ಉತ್ಪಾದಿಸುವ ಉತ್ಪನ್ನಗಳನ್ನು ನಾವು ಖರೀದಿಸಬೇಕು ಎಂದು ತಿಳಿಸಿದರು.

ಕಲಬುರಗಿ-ದಕ್ಷಿಣ ಶಾಸಕ ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಮಾತನಾಡಿ, ಬಹುರಾಷ್ಟ್ರೀಯ ಕಂಪನಿಗಳು ಡಿಜಿಟಲ್ ವಹಿವಾಟಿನ ಮೂಲಕ ಹಣ ಗಳಿಸುವ ಅವಕಾಶ ಕಲ್ಪಿಸಿದ್ದು, ಇದನ್ನು ಮಹಿಳಾ ಉದ್ಯಮಿಗಳು ಬಳಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಮಾಜಿ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ, ಭಾರತಿ ಪಾಟೀಲ್, ನಂದಿನಿ ನಿಸ್ಟಿ, ಜಯಶ್ರೀ ಮುದ್ದಾ, ವಿಶಾಲಾಕ್ಷಿ ಕರಡ್ಡಿ ಮತ್ತಿತರರು ಭಾಗವಹಿಸಿದ್ದರು.

SCROLL FOR NEXT