ರಾಜ್ಯ

ರಾಜ್ಯದಲ್ಲಿ ಹೆಚ್ಚಿನ ಮೃಗಾಲಯಗಳ ಸ್ಥಾಪನೆಗೆ ಚಿಂತನೆ: ಅಧಿಕಾರಿಗಳು

Manjula VN

ಮೈಸೂರು: ಕಾಡುಪ್ರಾಣಿಗಳು ವಿನಾಶದ ಭೀತಿಯನ್ನು ಎದುರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ವನ್ಯಜೀವಿಗಳ ಮಹತ್ವ ಮತ್ತು ಅವುಗಳ ಸರಕ್ಷಣೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಕರ್ನಾಟಕ ಅರಣ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜವೇದ್ ಅಖ್ತರ್ ಅವರು ಬುಧವಾರ ಹೇಳಿದ್ದಾರೆ.

ಕೇಂದ್ರ ಮೃಗಾಲಯ ಪ್ರಾಧಿಕಾರ ಮತ್ತು ಮೈಸೂರು ಮೃಗಾಲಯ ಆಯೋಜಿಸಿದ್ದ ಮೃಗಾಲಯಗಳ ನಿರ್ದೇಶಕರ ರಾಷ್ಟ್ರೀಯ ಸಮ್ಮೇಳನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹೆಚ್ಚಿನ ಮೃಗಾಲಯಗಳ ಸ್ಥಾಪನೆಗೆ ಚಿಂತನೆ ನಡೆಸಲಾಗಿದೆ. ಈ ಮೃಗಾಲಯಗಳಿಗೆ ಅಗತ್ಯವಿರುವ ಸಂಪನ್ಮೂಲಗಳ ಒದಗಿಸುವಂತೆ ಕೇಂದ್ರ ಸರ್ಕಾರ ಹಾಗೂ ಕೇಂದ್ರ ಮೃಗಾಲಯ ಪ್ರಾಧಿಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಮಕ್ಕಳನ್ನು ಮೊಬೈಲ್ ಮತ್ತು ಟಿವಿಯಿಂದ ದೂರ ಇರಿಸಲು ಮೃಗಾಲಯ ಮತ್ತು ವನ್ಯ ಪ್ರಾಣಿಗಳ ಸಂರಕ್ಷಣೆ ಜಾಗೃತಿ ಕಾರ್ಯ ನಡೆಯುತ್ತಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಮತ್ತೊಂದು ಮೃಗಾಲಯ ಸ್ಥಾಪಿಸಲು ಉದ್ದೇಶಿಸಲಾಗಿದೆ. ಸಿಎಸ್ಆರ್ ಅನುದಾನದಲ್ಲಿ ಅನುಷ್ಠಾನಗೊಳಿಸಲಾಗುವುದು. ಈಗಾಗಲೇ ಬೆಳಗಾವಿ ಮೃಗಾಲಯವನ್ನು ಉತ್ತಮವಾಗಿ ಅಭಿವೃದ್ಧಿಪಡಿಸಿದ್ದು, ಅಲ್ಲಿ ರಕ್ಷಣಾ ಕೇಂದ್ರ ಸ್ಥಾಪಿಸುವ ಯೋಜನೆ ಇದೆ. ಮತ್ತಷ್ಟು ಮೃಗಾಲಯ ಆರಂಭಿಸಲು ಕೇಂದ್ರ ಸರ್ಕಾರ ಮತ್ತು ಕೇಂದ್ರ ಮೃಗಾಲಯ ಪ್ರಾಧಿಕಾರದಿಂದ ಸಂಪನ್ಮೂಲ ಒದಗಿಸಿದರೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಈ ವೇಳೆ ದೇಶದ ವಿವಿಧ ಮೃಗಾಲಯಗಳ 60ಕ್ಕೂ ಹೆಚ್ಚು ನಿರ್ದೇಶಕರು ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು.

SCROLL FOR NEXT