ರಾಜ್ಯ

ಬಾಲ್ಯ ವಿವಾಹ ತಡೆಗೆ 'ಸ್ಫೂರ್ತಿ ಯೋಜನೆ': ಅನುದಾನ ಬಿಡುಗಡೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ

Sumana Upadhyaya

ಬೆಂಗಳೂರು: ರಾಜ್ಯದಲ್ಲಿ ಬಾಲ್ಯ ವಿವಾಹವನ್ನು ತಡೆಗಟ್ಟಲು 'ಸ್ಪೂರ್ತಿ ಯೋಜನೆ' ಆರಂಭಿಸಲಾಗಿದ್ದು, ಇದಕ್ಕಾಗಿ ರಾಜ್ಯ ಸಚಿವ ಸಂಪುಟ ನಿನ್ನೆ ಶುಕ್ರವಾರ 12.51 ಕೋಟಿ ರೂಪಾಯಿ ಬಿಡುಗಡೆ ಮಾಡಲಿದೆ. ಯೋಜನೆಯ ಭಾಗವಾಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ವರ್ಷಪೂರ್ತಿ ಜಾಗೃತಿ ಅಭಿಯಾನ ನಡೆಯಲಿದೆ ಎಂದು ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ತಿಳಿಸಿದ್ದಾರೆ.

ನಿನ್ನೆ ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಸಚಿವರು, ಯೋಜನೆಯನ್ನು ಜಾರಿಗೆ ತರಲು ಸರ್ಕಾರೇತರ ಸಂಸ್ಥೆಗಳನ್ನು ಸಂಪರ್ಕಿಸಲಾಗಿದೆ. ಪ್ರಾಯೋಗಿಕ ಮಾದರಿಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಯೋಜನೆಯನ್ನು ಈಗಾಗಲೇ ಜಾರಿಗೆ ತರಲಾಗಿದ್ದು ಅಲ್ಲಿ ಯಶಸ್ವಿಯಾಗಿದೆ. ಅದನ್ನೀಗ ಇನ್ನಷ್ಟು ಜಿಲ್ಲೆಗಳಿಗೆ ವಿಸ್ತರಿಸಲಾಗುವುದು. ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ ಅವರಲ್ಲಿ ಕೌಶಲ್ಯಾಭಿವೃದ್ಧಿ ಮಾಡಲಾಗುವುದು ಎಂದರು.

ಬಾಗಲಕೋಟೆ, ವಿಜಯಪುರ, ಬೆಳಗಾವಿ, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳನ್ನು ಗುರುತಿಸಲಾಗಿದ್ದು ಇಲ್ಲಿ ಯೋಜನೆ ಜಾರಿಗೊಳಿಸಲಾಗುವುದು. ಕೇಂದ್ರ ಸರ್ಕಾರ ಕೂಡ ಯೋಜನೆಗೆ ನೆರವು ನೀಡಿದೆ ಎಂದರು.

ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್ (PM-ABHIM) ಅಡಿಯಲ್ಲಿ 114 ಆರೋಗ್ಯ ಮತ್ತು ಕ್ಷೇಮಾಭಿವೃದ್ಧಿ ಕೇಂದ್ರಗಳನ್ನು ನಗರ ಪ್ರದೇಶಗಳಲ್ಲಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆ ಪ್ರದೇಶಗಳಲ್ಲಿ ತೆರೆಯಲಾಗಿದ್ದು ಅವುಗಳನ್ನು ನಮ್ಮ ಕ್ಲಿನಿಕ್ ಆಗಿ ಪರಿವರ್ತಿಸಲಾಗುವುದು ಎಂದರು.

ರಾಜ್ಯದಲ್ಲಿ 300 ನಮ್ಮ ಕ್ಲಿನಿಕ್ ಗಳನ್ನು ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ. ಇದೀಗ ಕೇಂದ್ರ ಸರ್ಕಾರ ಅನುದಾನ ನೀಡಿದ ಬಳಿಕ 114 ಕ್ಲಿನಿಕ್ ಗಳನ್ನು ತೆರೆಯಲಾಗುವುದು. 500 ನಮ್ಮ ಕ್ಲಿನಿಕ್ ಗಳನ್ನು ಸ್ಥಾಪಿಸುವ ಗುರಿ ಹೊಂದಿದ್ದೇವೆ ಎಂದರು.

ಫೆಬ್ರವರಿ 17ಕ್ಕೆ ಬಜೆಟ್ ಮಂಡನೆ: ಈ ವರ್ಷ ಜಂಟಿ ಸದನದಲ್ಲಿ ರಾಜ್ಯ ಬಜೆಟ್ ಮಂಡಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ರಾಜ್ಯಪಾಲರ ಭಾಷಣದೊಂದಿಗೆ ಬಜೆಟ್ ಅಧಿವೇಶನ ಫೆಬ್ರವರಿ 10ರಂದು ಆರಂಭವಾಗಲಿದ್ದು, ಸಿಎಂ ಬೊಮ್ಮಾಯಿಯವರು ಫೆಬ್ರವರಿ 17ರಂದು ಬಜೆಟ್ ಮಂಡಿಸಲಿದ್ದಾರೆ.

SCROLL FOR NEXT