ಬೆಂಗಳೂರು: ನಾಗಮಂಗಲ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಹಾಗೂ ನಿರ್ವಾಹಕ ಜಗದೀಶ್ ಆತ್ಮಹತ್ಯೆಗೆ ಯತ್ನಿಸಿದ ಆರೋಪದ ಕುರಿತು ಸಿಐಡಿ ವರದಿ ಹಾಗೂ ಶಿಫಾರುಗಳ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ವಿಧಾನಸಭೆಗೆ ಮಾಹಿತಿ ನೀಡಿದರು.
ಚಾಲಕನ ಆತ್ಮಹತ್ಯೆಗೆ ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಅವರೇ ಹೊಣೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಆರೋಪಿಸಿದ್ದರು.
ಈ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ನೀಡಿದ್ದು, ತನಿಖೆಯ ವರದಿಯನ್ನು ಅಧಿಕಾರಿಗಳು ಸರ್ಕಾರಕ್ಕೆ ಸಲ್ಲಿಸಿದ್ದು, ವರದಿಯನ್ನು ಗುರುವಾರ ಗೃಹ ಸಚಿವರು ವಿಧಾನಸಭೆಯಲ್ಲಿ ಮಂಡಿಸಿದರು.
ವರದಿಯಲ್ಲಿ ಸಿಐಡಿ ನಾಗಮಂಗಲ ಜೆಡಿಎಸ್ ಮಾಜಿ ಶಾಸಕ ಸುರೇಶ್ ಗೌಡ ವಿರುದ್ಧ ಕಾನೂನು ಕ್ರಮಕ್ಕೆ ಶಿಫಾರಸು ಮಾಡಿದೆ. ಅಲ್ಲದೆ, ಚಾಲಕ ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ಸಿಐಡಿ ತಿಳಿಸಿದೆ ಎಂದು ಹೇಳಿದರು.
ನಿಗಮದ ವಿಭಾಗೀಯ ನಿಯಂತ್ರಕರು ಜಗದೀಶ್ ಅವರನ್ನು ಮದ್ದೂರು ಘಟಕಕ್ಕೆ ವರ್ಗಾವಣೆ ಮಾಡಿದ್ದರು. ಅಲ್ಲಿಗೆ ಹೋಗಲು ಇಷ್ಟವಿಲ್ಲದೆ ಆತ್ಮಹತ್ಯೆಗೆ ಯತ್ನಿಸಿದ್ದರು. ವರ್ಗಾವಣೆ ತಪ್ಪಿಸಿಕೊಳ್ಳಲು ಈ ಪ್ರಯತ್ನ ಮಾಡಿದ್ದರು ಎಂಬುದು ಸಿಐಡಿ ತನಿಖೆಯಲ್ಲಿ ಪತ್ತೆಯಾಗಿದೆ.
ಇದನ್ನೂ ಓದಿ: ಕೆಎಸ್‌ಆರ್‌ಟಿಸಿ ಚಾಲಕ ಜಗದೀಶ್ ಆತ್ಮಹತ್ಯೆಗೆ ಯತ್ನ ಪ್ರಕರಣ; ಗೃಹ ಇಲಾಖೆಯಿಂದ ತನಿಖೆ: ಡಾ. ಜಿ ಪರಮೇಶ್ವರ್
ಆತ್ಮಹತ್ಯೆಗೆ ಯತ್ನಿಸಿದ್ದ ಜಗದೀಶ್ ಮತ್ತು ಆತ್ಮಹತ್ಯೆಗೆ ಅನುಮತಿ ಕೋರುವ ಪತ್ರ ಬರೆದುಕೊಟ್ಟಿದ್ದ ಮತ್ತೊಬ್ಬ ಚಾಲಕ ಎಂ.ಎಸ್. ನವೀನ್‌ಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ನಿಗಮದ ನಾಗಮಂಗಲ ಘಟಕದ ಸಹಾಯಕ ಕಾರ್ಯ ಅಧೀಕ್ಷಕ ಎಸ್.ಎಲ್. ಮಂಜುನಾಥ್ ಕರ್ತವ್ಯಲೋಪ ಎಸಗಿರುವುದು ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸದೇ ಠಾಣಾಧಿಕಾರಿ ಅಶೋಕ್ ಕುಮಾರ್ ಮತ್ತು ಪೊಲೀಸ್ ಇನ್‌ಸ್ಪೆಕ್ಟರ್ ಕೂಡ ಲೋಪ ಎಸಗಿದ್ದಾರೆ. ಅವರ ವಿರುದ್ಧವೂ ಕ್ರಮಕ್ಕೆ ಶಿಫಾರಸು ಮಾಡಲಾಗಿದೆ’ ಎಂದು ವಿವರ ನೀಡಿದರು.
ಆತ್ಮಹತ್ಯೆಗೆ ಯತ್ನಿಸಿದ್ದ ಚಾಲಕನನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾಜಿ ಶಾಸಕ ಸುರೇಶ್ ಗೌಡ ಅವರು ಆಂಬುಲೆನ್ಸ್ ತಡೆದಿರುವುದು ತನಿಖೆಯಲ್ಲಿ ದೃಢಪಟ್ಟಿದೆ. ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು, ಪ್ರಕರಣ ಸಂಬಂಧ 38 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಆತ್ಮಹತ್ಯೆಗೆ ಯತ್ನಕ್ಕೆ ಯಾವುದೇ ಪ್ರಚೋದನೆಗಳೂ ಕಂಡುಬಂದಿಲ್ಲ ಎಂದು ಹೇಳಿದರು.
ವರದಿಗೆ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರು ಆಕ್ಷೇಪ ವ್ಯಕ್ತಪಡಿಸಿದರು. ಈ ಪ್ರಕರಣವನ್ನು ಜೆಡಿಎಸ್‌ನ ಎಚ್.ಡಿ. ಕುಮಾರಸ್ವಾಮಿ ರಾಜಕೀಯಕ್ಕೆ ಬಳಸಿಕೊಂಡಿದ್ದಾರೆ. ಕಾಂಗ್ರೆಸ್ ಶಾಸಕರನ್ನು ಕೆಟ್ಟದಾಗಿ ಬಿಂಬಿಸುವ ಪ್ರಯತ್ನ ನಡೆದಿದೆ. ಈ ಸಂಚಿನ ಹಿಂದಿರುವವರನ್ನು ರಕ್ಷಿಸಲಾಗುತ್ತಿದೆ’ ಎಂದು ಆರೋಪಿಸಿದರು.