ರಾಜ್ಯ

ಕಲಬುರಗಿ: ಅಕ್ರಮ ಮರಳು ಸಾಗಣೆ ತಡೆಯಲು ಬಂದ ಪೇದೆ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆ, ಚಾಲಕನ ಬಂಧನ

Lingaraj Badiger

ಕರ್ನಾಟಕ: ಕಲಬುರಗಿ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣೆ ತಡೆಯಲು ಬಂದ ಹೆಡ್ ಕಾನ್‌ಸ್ಟೆಬಲ್ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆ ಮಾಡಿದ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಜೇವರ್ಗಿ ತಾಲೂಕಿನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಅನ್ನು ತಡೆಯಲು ಬಂದ ಕಾನ್‌ಸ್ಟೆಬಲ್ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಹತ್ಯೆ ಮಾಡಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.

ಪ್ರಮುಖ ಆರೋಪಿ ಟ್ರ್ಯಾಕ್ಟರ್ ಚಾಲಕನನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಕಲಬುರಗಿ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ತಿಳಿಸಿದ್ದಾರೆ.

ಜೂನ್ 15 ರಂದು ಕಲಬುರಗಿಯ ಜೇವರ್ಗಿ ತಾಲೂಕಿನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರಾಕ್ಟರ್ ಅನ್ನು ಹೆಡ್ ಕಾನ್‌ಸ್ಟೆಬಲ್ ಮಯೂರ ಚೌಹಾಣ್(51) ಅವರು ತಡೆಯಲು ಪ್ರಯತ್ನಿಸುತ್ತಿದ್ದಾಗ ಘಟನೆ ನಡೆದಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

ಮೃತ ಪೇದೆಯನ್ನು ನೆಲೋಗಿ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾಗಿದ್ದು, ಘಟನೆಯ ಸಮಯದಲ್ಲಿ ಅವರು ಕರ್ತವ್ಯದಲ್ಲಿದ್ದರು.

ಹೆಡ್ ಕಾನ್‌ಸ್ಟೆಬಲ್‌ ಸಾವಿಗೆ ಕಾರಣರಾದವರ ವಿರುದ್ಧ ಐಪಿಸಿ ಸೆಕ್ಷನ್ 302, 333, 307, 379, 504 ಮತ್ತು 506 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದೇ ವೇಳೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಮತ್ತು ಮೃತ ಪೊಲೀಸ್ ಪೇದೆಯ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಸಾಧ್ಯವಿರುವ ಎಲ್ಲ ನೆರವು ನೀಡಲಿದೆ ಎಂದು ಭರವಸೆ ನೀಡಿದ್ದಾರೆ.

SCROLL FOR NEXT