ರಾಜ್ಯ

ಶಓಮಿ ಸಂಸ್ಥೆ ಖಾತೆ ಜಪ್ತಿ ಪ್ರಕರಣ: ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್‌

Manjula VN

ಬೆಂಗಳೂರು: ಚೀನಾದ ಶಓಮಿ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಅರ್ಜಿಯನ್ನು ಏಕಸದಸ್ಯ ಪೀಠ ವಜಾಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ ಕುರಿತು ಹೈಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಸಂಸ್ಥೆಗೆ ಸೇರಿದ 5551.27 ಕೋಟಿ ರೂಪಾಯಿಯನ್ನು ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿದ್ದರ ವಿರುದ್ಧ ಸಂಸ್ಥೆ ಅರ್ಜಿ ಸಲ್ಲಿಸಿತ್ತು.

ಜಾರಿ ನಿರ್ದೇಶನಾಲಯದ ಆದೇಶವನ್ನು ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ (ಫೆಮಾ) 1999ರ ಅಡಿ ರಚಿಸಿರುವ ಸಕ್ಷಮ ಪ್ರಾಧಿಕಾರವು ಕಾಯಂಗೊಳಿಸಿತ್ತು. ಇದನ್ನು ಏಕಸದಸ್ಯ ಪೀಠವು ಪುರಸ್ಕರಿಸಿತ್ತು.

ಶಓಮಿ ಟೆಕ್ನಾಲಜಿ ಪ್ರೈವೇಟ್‌ ಲಿಮಿಟೆಡ್‌ ಸಲ್ಲಿಸಿದ್ದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ ಜಿ ಎಸ್‌ ಕಮಲ್‌ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.

ಕೇಂದ್ರ ಸರ್ಕಾರ ಮತ್ತು ಜಾರಿ ನಿರ್ದೇಶನಾಲಯಕ್ಕೆ ನ್ಯಾಯಾಲಯವು ನೋಟಿಸ್‌ ಜಾರಿ ಮಾಡಿದ್ದು, ಆಕ್ಷೇಪಣೆ ಸಲ್ಲಿಸಲು ನಿರ್ದೇಶಿಸಿದೆ. ಇದರಂತೆ ವಿಚಾರಣೆಯನ್ನು ಜುಲೈ 11ಕ್ಕೆ ಮುಂದೂಡಿದೆ.

ಫೆಮಾ ಕಾಯಿದೆಯ ಸೆಕ್ಷನ್‌ 37ಎ ಸಾಂವಿಧಾನಿಕ ಸಿಂಧುತ್ವವನ್ನು ಏಕಸದಸ್ಯ ಪೀಠ ಎತ್ತಿ ಹಿಡಿದಿತ್ತು. ಇದನ್ನು ಮೇಲ್ಮನವಿಯಲ್ಲಿ ಪ್ರಶ್ನಿಸಲಾಗಿದೆ.

2022ರ ಸೆಪ್ಟೆಂಬರ್‌ 19ರಂದು ಸಕ್ಷಮ ಪ್ರಾಧಿಕಾರವು ಜಾರಿ ನಿರ್ದೇಶನಾಲಯದ ಜಪ್ತಿ ಆದೇಶವನ್ನು ಎತ್ತಿ ಹಿಡಿದಿತ್ತು. ಇದನ್ನು ಪ್ರಶ್ನಿಸಿ ಶಓಮಿಯು ಹೈಕೋರ್ಟ್‌ ಮೆಟ್ಟಿಲೇರಿದ್ದು, ಏಕಸದಸ್ಯ ಪೀಠವು ಸಕ್ಷಮ ಪ್ರಾಧಿಕಾರದ ಆದೇಶ ಕಾಯಂಗೊಳಿಸಿತ್ತು. ಈಗ ಏಕಸದಸ್ಯ ಪೀಠದ ಆದೇಶವನ್ನು ವಿಭಾಗೀಯ ಪೀಠದಲ್ಲಿ ಪ್ರಶ್ನಿಸಲಾಗಿದೆ.

SCROLL FOR NEXT