ರಾಜ್ಯ

5 ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನ ಲೋಕಸಭಾ ಚುನಾವಣೆಯಲ್ಲಿ ಸಹಾಯ ಮಾಡಲಿದೆ: ಸಲೀಂ ಅಹ್ಮದ್

Manjula VN

ಹುಬ್ಬಳ್ಳಿ: ಐದು ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಹಾಯ ಮಾಡಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರು ಶನಿವಾರ ಹೇಳಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದೇವೆಂದು ಸುಮ್ಮನೆ ಕೂರಲು ಸಾಧ್ಯವಿಲ್ಲ. ಮುಂಬರುವ ಗ್ರಾಮೀಣ ಸಂಸ್ಥೆಗಳ ಚುನಾವಣೆ ಮತ್ತು ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸಬೇಕಿದೆ. ಮುಂಗಾರು ಅಧಿವೇಶನದ ನಂತರ ಸಿದ್ಧತೆಗಳ ನಡೆಸುತ್ತೇವೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ 20ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಕೇಂದ್ರದ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನರ ಮುಂದೆ ಪ್ರಸ್ತುತಪಡಿಸುತ್ತೇವೆಂದು ಹೇಳಿದರು.

ಪ್ರಸ್ತುತ ಸರ್ಕಾರದ ಗಮನವು ಗ್ಯಾರಂಟಿ ಯೋಜನೆಗಳ ಜಾರಿಗೊಳಿಸುವುದರತ್ತ ಇದ್ದರೂ, ಇದರ ಜೊತೆಗೆ ಪಕ್ಷದ ಸಂಘಟನೆಗೆ ಆದ್ಯತೆ ನೀಡಲಾಗುತ್ತಿದೆ. ನಿಗಮ-ಮಂಡಳಿ ನೇಮಕವನ್ನು ಅಧಿವೇಶನದ ನಂತರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಶಾಸಕರು ಮತ್ತು ಪಕ್ಷದ ಮುಖಂಡರೊಂದಿಗೆ ಸೂಕ್ತ ಚರ್ಚೆ ನಡೆಸಿದ ನಂತರ ಹೆಸರುಗಳನ್ನು ಕಳುಹಿಸುವಂತೆ ಡಿಸಿಸಿ ಮುಖ್ಯಸ್ಥರಿಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಈಗಾಗಲೇ ಸೂಚಿಸಿದ್ದಾರೆಂದು ಮಾಹಿತಿ ನೀಡಿದರು.

ಭ್ರಷ್ಟಾಚಾರ ರಹಿತ ಆಡಳಿತ ನೀಡುವುದು ನಮ್ಮ ಪಕ್ಷದ ಸಂಕಲ್ಪವಾಗಿದೆ. ಈ ನಿಟ್ಟಿನಲ್ಲಿ ಚುನಾವಣೆಯ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡುವಲ್ಲಿ ಮುಂದಾಗುತ್ತೇವೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿರುವ ಗ್ಯಾರಂಟಿಗಳಲ್ಲಿ ಉಚಿತ ಅಕ್ಕಿ ಕೊಡುವ ಯೋಜನೆಗೆ ಕೇಂದ್ರ ಸರ್ಕಾರ ಅಡ್ಡಗಾಲು ಹಾಕುತ್ತಿದ್ದು, ಬಡವರ ಅಕ್ಕಿಯಲ್ಲಿ ಕೇಂದ್ರ ರಾಜಕೀಯ ಮಾಡುತ್ತಿದೆ. ಎಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮಗೆ ಹಿನ್ನಡೆಯಾಗಬಹುದು ಎಂಬ ಭಯದಲ್ಲಿ ರಾಜ್ಯಕ್ಕೆ ಅಕ್ಕಿ ಕೊಡಲು ಹಿಂದೇಟು ಹಾಕುತ್ತಿದೆ. ಜನರಿಗೆ ಅಕ್ಕಿ ವಿತರಣೆಯಲ್ಲಿ ವಿಳಂಬವಾದಲ್ಲಿ ಅದಕ್ಕೆ ನೇರ ಹೊಣೆ ಕೇಂದ್ರ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ವಿದ್ಯುತ್ ದರ ಹೆಚ್ಚಳ ಕುರಿತು ಮಾತನಾಡಿದ ಅವರು, ಬಿಜೆಪಿ ಸರ್ಕಾರ ವಿದ್ಯುತ್ ದರವನ್ನು ಹೆಚ್ಚಳ ಮಾಡಿತ್ತು ಎಂದರು.

SCROLL FOR NEXT