ರಾಜ್ಯ

ಹುಬ್ಬಳ್ಳಿ: ಉದ್ಯಮಿ ಮನೆ ಮೇಲೆ ಸಿಸಿಬಿ ದಾಳಿ, ಮೂರು ಕೋಟಿ ರೂ. ನಗದು ಪತ್ತೆ

Lingaraj Badiger

ಹುಬ್ಬಳ್ಳಿ: ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಲಂಚ ಪ್ರಕರಣ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ಹುಬ್ಬಳ್ಳಿಯ ಉದ್ಯಮಿಯೊಬ್ಬರ ಮನೆ ಮೇಲೆ ಸಿಸಿಬಿ ದಾಳಿ ನಡೆಸಿದ್ದು, ಬರೋಬ್ಬರಿ ಮೂರು ಕೋಟಿ ರೂಪಾಯಿ ನಗದು ಪತ್ತೆಯಾಗಿದೆ.

ಹುಬ್ಬಳ್ಳಿಯ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಉದ್ಯಮಿ ರಮೇಶ್ ಬೊಣಗೇರಿ ನಿವಾಸದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಮೂರು ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ. ರಮೇಶ್ ಬೊಣಗೇರಿ ಕೃಷಿ ಇಲಾಖೆಗೆ ರಾಸಾಯನಿಕ ಸರಬರಾಜು ಮಾಡುತ್ತಿದ್ದ ಉದ್ಯಮಿಯಾಗಿದ್ದಾರೆ.

ಉದ್ಯಮಿ ರಮೇಶ್ ಅವರು ಹಣದ ಮೂಲದ ಬಗ್ಗೆ ಯಾವುದೇ ದಾಖಲೆ ನೀಡಿಲ್ಲ. ಹೀಗಾಗಿ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಆದಾಯ ತೆರಿಗೆ ಇಲಾಖೆಗೆ ವರ್ಗಾಯಿಸಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಅವರ ಪುತ್ರ ಪ್ರಶಾಂತ್ ನಿವಾಸಗಳಲ್ಲಿ 8 ಕೋಟಿ ರೂ. ಹೆಚ್ಚು ನಗದು ಹಾಗೂ ಚಿನ್ನಾಭರಣ ಪತ್ತೆಯಾಗಿರುವುದು ರಾಜ್ಯ ರಾಜಕೀಯದಲ್ಲಿ ತೀವ್ರ ಕೋಲಾಹಲ ಸೃಷ್ಟಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ಕಾಂಗ್ರೆಸ್ ಆಗ್ರಹಿಸಿದೆ.

SCROLL FOR NEXT