ರಾಜ್ಯ

ಏಪ್ರಿಲ್ 9 ರಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಪ್ರಧಾನಿ ಭೇಟಿ, ಹುಲಿ ಗಣತಿ ವರದಿ ಬಿಡುಗಡೆ

Ramyashree GN

ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 9 ರಂದು ಕರ್ನಾಟಕಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಸಫಾರಿ ನಡೆಸಲಿದ್ದಾರೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.

ಮೋದಿ ಭೇಟಿ ಹಿನ್ನೆಲೆಯಲ್ಲಿ ಭರದ ಸಿದ್ಧತೆಗಳು ನಡೆಯುತ್ತಿವೆ. ಮೈಸೂರು ಮತ್ತು ಚಾಮರಾಜನಗರಕ್ಕೆ ಭೇಟಿ ನೀಡಲಿರುವ ಮೋದಿ, ‘ಹುಲಿ ಯೋಜನೆ’ಗೆ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಆಯೋಜಿಸಿರುವ ಮೂರು ದಿನಗಳ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. 

ಹುಲಿ ಯೋಜನೆಗೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಅವರು ಇತ್ತೀಚಿನ ಹುಲಿ ಗಣತಿ ವರದಿಯನ್ನು ಸಹ ಬಿಡುಗಡೆ ಮಾಡಲಿದ್ದಾರೆ. ಇದರೊಂದಿಗೆ, ಹುಲಿ ಸಂರಕ್ಷಣೆಗಾಗಿ ಸರ್ಕಾರದ ದೃಷ್ಟಿಕೋನ ಮತ್ತು ಕಾರ್ಯಕ್ರಮದ ಸ್ಮರಣಾರ್ಥ ನಾಣ್ಯವನ್ನು ಬಿಡುಗಡೆ ಮಾಡಲಿದ್ದಾರೆ.

ಮೈಸೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಪ್ರಧಾನಿ ಮೋದಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಆಗಮಿಸಲಿದ್ದಾರೆ. ಅರಣ್ಯ ಅಧಿಕಾರಿಗಳು ಮೀಸಲು ಪ್ರದೇಶದ ರಸ್ತೆಗಳ ದುರಸ್ತಿ ಕಾರ್ಯಗಳನ್ನು ಕೈಗೊಂಡಿದ್ದಾರೆ. 

ಹಿರಿಯ ಅಧಿಕಾರಿಗಳ ಪ್ರಕಾರ, ಚಾಮರಾಜನಗರ ಜಿಲ್ಲಾಧಿಕಾರಿ ರಮೇಶ್ ಮತ್ತು ಎಸ್‌ಪಿ ಪದ್ಮಿನಿ ಸಾಹು ಅವರು ಸೂಕ್ತ ವ್ಯವಸ್ಥೆಗಾಗಿ ಸಿಬ್ಬಂದಿಗೆ ವಿವಿಧ ಕೆಲಸಗಳನ್ನು ನಿಯೋಜಿಸಿದ್ದಾರೆ. ಬಂಡೀಪುರ ಸಮೀಪದ ಮೇಲುಕಾಮನಹಳ್ಳಿಯಲ್ಲಿ ಹೆಲಿಪ್ಯಾಡ್ ನಿರ್ಮಿಸಲಾಗುತ್ತಿದೆ.

ಹಿರಿಯ ಅಧಿಕಾರಿಗಳು ಮತ್ತು ಭದ್ರತಾ ಏಜೆನ್ಸಿಗಳು ಬಂಡೀಪುರಕ್ಕೆ ಆಗಮಿಸಿ ಪರಿಸ್ಥಿತಿಯ ಅವಲೋಕನ ನಡೆಸುತ್ತಿದ್ದಾರೆ. ಬಂಡೀಪುರದ ನಂತರ ತಮಿಳುನಾಡಿನ ಮಧುಮಲೈ ಅರಣ್ಯ ಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಚುನಾವಣೆ ಘೋಷಣೆ ಹಾಗೂ ಮಾದರಿ ನೀತಿ ಸಂಹಿತೆ ಜಾರಿಯಾದ ಬಳಿಕ ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಅವರು ಮಾರ್ಚ್ 16 ರಂದು 16,000 ಕೋಟಿ ರೂಪಾಯಿಗಳ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಮತ್ತು ಇತರ ಯೋಜನೆಗಳನ್ನು ಉದ್ಘಾಟಿಸಿದ್ದರು.

ಈಮಧ್ಯೆ, ಪ್ರಧಾನಿ ಮೋದಿಯವರ ಸಫಾರಿಗೆ ಫೂಲ್‌ಪ್ರೂಫ್ ಭದ್ರತೆ ಒದಗಿಸಲು ಪೊಲೀಸರು 1,500 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸುತ್ತಿದ್ದಾರೆ. ಮೀಸಲು ಪ್ರದೇಶದಿಂದ ಪ್ರಧಾನಿ ಆಗಮನ ಮತ್ತು ನಿರ್ಗಮನಕ್ಕೆ ಅನುಕೂಲವಾಗುವಂತೆ ಮೂರು ಹೆಲಿಪ್ಯಾಡ್‌ಗಳನ್ನು ಸ್ಥಾಪಿಸಲಾಗುವುದು. ಮುಖ್ಯ ಕಾರ್ಯಕ್ರಮವನ್ನು ಸೆನೆಟ್ ಹಾಲ್ ಅಥವಾ ಮೈಸೂರಿನ ಕೆಎಸ್‌ಒಯು ಘಟಿಕೋತ್ಸವ ಸಭಾಂಗಣದಲ್ಲಿ ನಡೆಸಲು ನಿರ್ಧರಿಸಲಾಗಿದ್ದರೂ, ಸ್ಥಳವನ್ನು ಅಂತಿಮಗೊಳಿಸಲಾಗಿಲ್ಲ.

SCROLL FOR NEXT