ರಾಜ್ಯ

ಕರ್ನಾಟಕ ವಿಧಾನಸಭೆ ಚುನಾವಣೆ: ಸಂಘಟನೆಯನ್ನು ನಿಷೇಧಿಸುವ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಬಜರಂಗ ದಳ ಪ್ರತಿಭಟನೆ

Ramyashree GN

ಮಂಗಳೂರು: ಬಜರಂಗ ದಳದ ಕಾರ್ಯಕರ್ತರು ಕಾಂಗ್ರೆಸ್ ಕಚೇರಿ ಬಳಿ ಪ್ರತಿಭಟನೆ ನಡೆಸಿ, ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಡುಗಡೆ ಮಾಡಿರುವ ಪಕ್ಷದ ಪ್ರಣಾಳಿಕೆಯನ್ನು ಸುಟ್ಟು ಹಾಕಿದರು.

ಮಂಗಳವಾರ ಕಾಂಗ್ರೆಸ್ ತನ್ನ ಕರ್ನಾಟಕ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಮತ್ತು ಇತರ ಸಂಘಟನೆಗಳನ್ನು ನಿಷೇಧಿಸುವುದು ಸೇರಿದಂತೆ ಕಾನೂನಿನ ಪ್ರಕಾರ 'ನಿರ್ಣಾಯಕ ಕ್ರಮ' ತೆಗೆದುಕೊಳ್ಳುತ್ತದೆ ಎಂದು ಹೇಳಿತ್ತು.

ಅಂತಹ ಯಾವುದೇ ಸಂಘಟನೆಗಳ ಮೇಲೆ ನಿಷೇಧ ಹೇರುವುದು ಸೇರಿದಂತೆ ಕಾನೂನು ಪ್ರಕಾರ ನಾವು ನಿರ್ಣಾಯಕ ಕ್ರಮ ಕೈಗೊಳ್ಳುತ್ತೇವೆ ಎಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಲ್ಲಿ  ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿ ಹೇಳಿದರು. 

'ಜಾತಿ ಮತ್ತು ಧರ್ಮದ ಆಧಾರದ ಮೇಲೆ ಸಮುದಾಯಗಳ ವಿರುದ್ಧ ದ್ವೇಷವನ್ನು ಹರಡುವ ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ದೃಢ ಮತ್ತು ನಿರ್ಣಾಯಕ ಕ್ರಮ ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷವು ಬದ್ಧವಾಗಿದೆ' ಎಂದು ಕಾಂಗ್ರೆಸ್ ಹೇಳಿದೆ. 

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ವಕ್ತಾರ ಪವನ್ ಖೇರಾ ಅವರ ಸಮ್ಮುಖದಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಯಿತು.

ಈಮಧ್ಯೆ, ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಅಂತರರಾಷ್ಟ್ರೀಯ ಜಂಟಿ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜೈನ್ ಅವರು, ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ವಿಎಚ್‌ಪಿಯನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಜೊತೆ ಹೋಲಿಸಿದ್ದಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡರು ಮತ್ತು ಈ ಕ್ರಮವು 'ಅತ್ಯಂತ ಆಕ್ಷೇಪಾರ್ಹವಾಗಿದೆ' ಎಂದು ಹೇಳಿದರು.

ವಿಎಚ್‌ಪಿಯನ್ನು ದೇಶವಿರೋಧಿ, ಭಯೋತ್ಪಾದಕ ಮತ್ತು ನಿಷೇಧಿತ ಸಂಘಟನೆಯಾದ ಪಿಎಫ್‌ಐ ಜೊತೆ ಹೋಲಿಸುವುದು ಅತ್ಯಂತ ಆಕ್ಷೇಪಾರ್ಹವಾಗಿದೆ ಎಂದು ಜೈನ್ ಹೇಳಿದ್ದಾರೆ.

ಸೋನಿಯಾ ಗಾಂಧಿಯವರು ದೇಶದ ಜನತೆಗೆ ಮೋಸ ಮಾಡಲು ಸಾಧ್ಯವಿಲ್ಲ. ಕಾಂಗ್ರೆಸ್ ಬಜರಂಗ ದಳದ ಮಾನಹಾನಿ ಮಾಡಲು ಯತ್ನಿಸಿದ ರೀತಿಯನ್ನು ದೇಶದ ಜನತೆ ಸ್ವೀಕರಿಸುವುದಿಲ್ಲ ಮತ್ತು ಬಜರಂಗದಳ ಕಾರ್ಯಕರ್ತರು ಇದನ್ನು ಸವಾಲಾಗಿ ತೆಗೆದುಕೊಳ್ಳುತ್ತಿದ್ದಾರೆ. ಅದಕ್ಕೂ ನಾವು ಉತ್ತರಿಸುತ್ತೇವೆ ಮತ್ತು ನಿಮ್ಮ ಯೋಜನೆಗಳು ಯಶಸ್ವಿಯಾಗಲು ಬಿಡುವುದಿಲ್ಲ ಎಂದರು.

'ಕಾಂಗ್ರೆಸ್ ಪಕ್ಷವು ಬಜರಂಗ ದಳವನ್ನು ನಿಷೇಧಿಸುವ ಬಗ್ಗೆ ಮಾತನಾಡುತ್ತದೆ. ಆದರೆ, 'ಸಿಮ್ಮಿ'ಯಂತಹ ದೇಶವಿರೋಧಿ ಸಂಘಟನೆಗಳ ನಿಷೇಧವನ್ನು ವಿರೋಧಿಸಿದರು ಮತ್ತು ಅವರು ನಿಷೇಧದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಿದರು ಎಂಬುದನ್ನು ಮರೆತಿದೆ' ಎಂದು ಅವರು ಹೇಳಿದರು.

ಮೇ 10 ರಂದು ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.

SCROLL FOR NEXT