ರಾಜ್ಯ

ಬಹುತೇಕ ಸಮೀಕ್ಷೆಗಳಲ್ಲಿ ಅತಂತ್ರ ವಿಧಾನಸಭೆ ಸುಳಿವು; ಸರ್ಕಾರ ರಚನೆಗೆ ತೆರೆಮರೆಯಲ್ಲಿ ಕಾಂಗ್ರೆಸ್, ಬಿಜೆಪಿ ಕಸರತ್ತು!

Ramyashree GN

ಹುಬ್ಬಳ್ಳಿ: ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆಯ ಸುಳಿವು ನೀಡಿದ್ದು, ರಾಜ್ಯದಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ತೆರೆಮರೆಯಲ್ಲಿ ಕಸರತ್ತು ಆರಂಭಿಸಿವೆ.

ಸರ್ಕಾರ ರಚಿಸಲು ಬಹುಮತಕ್ಕೆ ಕೊರತೆಯಾದರೆ ಕಾಂಗ್ರೆಸ್ ಮತ್ತು ಜೆಡಿಎಸ್‌ನಿಂದ ಚುನಾಯಿತ ಶಾಸಕರನ್ನು ಕರೆತರಲು ಪ್ರಯತ್ನಿಸುತ್ತೇವೆ ಎಂದು ಬಿಜೆಪಿ ನಾಯಕರು ಸುದ್ದಿಸಂಸ್ಥೆ ಐಎಎನ್‌ಎಸ್‌ಗೆ ತಿಳಿಸಿದ್ದಾರೆ.

ಆದರೆ, ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಐಎಎನ್‌ಎಸ್‌ಗೆ ಪ್ರತಿಕ್ರಿಯಿಸಿ, 'ಕಾಂಗ್ರೆಸ್ ಈಗ ಕರ್ನಾಟಕದ ಹಳೆಯ ಕಾಂಗ್ರೆಸ್ ಆಗಿ ಉಳಿದಿಲ್ಲ. ನಾವು ಈಗ ವಿಕಸನಗೊಂಡಿದ್ದೇವೆ ಮತ್ತು ನಮ್ಮ ಶಾಸಕರನ್ನು ಬೇಟೆಯಾಡುವುದು ಸಾಧ್ಯವಿಲ್ಲ' ಎಂದು ಹೇಳಿದರು.

ಪಕ್ಷಕ್ಕೆ ಬಹುಮತದ ಕೊರತೆಯಾದರೆ ಅನುಸರಿಸಬೇಕಾದ ಕಾರ್ಯತಂತ್ರಗಳ ಕುರಿತು ಹಿರಿಯ ಕಾಂಗ್ರೆಸ್ ಮುಖಂಡರಾದ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. 

ಪ್ರಬಲ ಲಿಂಗಾಯತ ನಾಯಕರಾದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಬಿಜೆಪಿಯಿಂದ ಕಾಂಗ್ರೆಸ್‌ ಪಕ್ಷಕ್ಕೆ ಸೇರಿಸಿಕೊಂಡಿರುವುದರಿಂದ ಕರ್ನಾಟಕ ಕಾಂಗ್ರೆಸ್ ನಾಯಕರು ಉತ್ಸಾಹದಲ್ಲಿದ್ದಾರೆ.

ಇದೇ ವೇಳೆ, ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಕುಮಾರಸ್ವಾಮಿ ಮಾತನಾಡಿ, ತಮ್ಮ ಶಾಸಕರನ್ನು ಒಟ್ಟಿಗೆ ಇಟ್ಟುಕೊಳ್ಳಲಾಗುತ್ತದೆ ಮತ್ತು ಮುಖ್ಯಮಂತ್ರಿ ಸ್ಥಾನಕ್ಕೇರಲಿರುವುದಾಗಿ ಹೇಳಿದ್ದಾರೆ.

ಪಕ್ಷದೊಳಗೆ ಕೆಲವು ಆಂತರಿಕ ಸಮಸ್ಯೆಗಳು ಇಲ್ಲದಿದ್ದರೆ, ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಿದ್ದಕ್ಕಿಂತ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಪಡೆಯಬಹುದಿತ್ತು ಎಂದು ಜೆಡಿಎಸ್ ನಾಯಕತ್ವ ಅಭಿಪ್ರಾಯಪಟ್ಟಿದೆ.

SCROLL FOR NEXT