ರಾಜ್ಯ

ಮೇಕೆದಾಟು, ಮಹದಾಯಿ ಯೋಜನೆಗಳಿಗೆ ಸಿದ್ಧತೆಗಳ ಆರಂಭಿಸಿ: ಅಧಿಕಾರಿಗಳಿಗೆ ಡಿಕೆಶಿ ಸೂಚನೆ

Manjula VN

ಬೆಂಗಳೂರು: ಮೇಕೆದಾಟು ಮತ್ತು ಮಹದಾಯಿ ಯೋಜನೆಗಳನ್ನು ಆದ್ಯತೆ ಮೇಲೆ ಕೈಗೆತ್ತಿಕೊಂಡು ಪೂರ್ವಸಿದ್ಧತಾ ಕಾಮಗಾರಿ ಆರಂಭಿಸುವಂತೆ ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದರು.

ಜಲಸಂಪನ್ಮೂಲ ಸಚಿವರಾದ ಬಳಿಕ  ನೀರಾವರಿ ಅಧಿಕಾರಿಗಳೊಂದಿಗೆ ಮಂಗಳವಾರ ಮೊದಲ ಸಭೆ ನಡೆಸಿದ ಅವರು, ರಾಜ್ಯದಲ್ಲಿನ ನೀರಾವರಿಗೆ ಸಂಬಂಧಿಸಿ ಯೋಜನೆಗಳ ಕುರಿತು ಚರ್ಚೆ ನಡೆಸಿದರು.

ಸಭೆಯಲಿ ಕೇಂದ್ರದಿಂದ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಅನುಮತಿ ತರುವುದೇ ನಾನು ನಿಮಗೆ ನೀಡುತ್ತಿರುವ ಗುರಿ. ಮೇಕೆದಾಟು, ಮಹದಾಯಿ ಯೋಜನೆಗಳನ್ನು ಆದ್ಯತೆ ಮೇರೆಗೆ ಅನುಷ್ಠಾನಕ್ಕೆ ತರಬೇಕು. ಅದಕ್ಕೆ ಬೇಕಾದ ಸಿದ್ಧತೆ ಮಾಡಿಕೊಳ್ಳಿ. ಜಲವಿವಾದ ಪರಿಹಾರ, ಬಾಕಿ ಯೋಜನೆಗಳ ಪೂರ್ಣ, ನೀರಾವರಿ ಯೋಜನೆಗಳಿಗೆ ಸಂಪನ್ಮೂಲ ಕ್ರೋಡೀಕರಣ, ಕೇಂದ್ರದಿಂದ ಅನುದಾನ ತರುವುದು, ಉದ್ಯೋಗ ಸೃಷ್ಟಿಗೆ ಒತ್ತು ಕೊಡಬೇಕು. ನೀರಾವರಿ ಯೋಜನೆಗಳಿಗೆ 5 ವರ್ಷದಲ್ಲಿ 2 ಲಕ್ಷ ಕೋಟಿ ರು ವಿನಿಯೋಗಿಸುತ್ತೇವೆ ಎಂದು ಮಾತು ಕೊಟ್ಟಿದ್ದೇವೆ. ಸರ್ಕಾರ, ಸಂಸ್ಥೆಗಳು, ಕೇಂದ್ರದ ಅನುದಾನದ ಮೂಲಕ ಸಂಪನ್ಮೂಲ ಒಟ್ಟುಗೂಡಿಸಬೇಕಿದೆ ಎಂದು ಸೂಚನೆ ನೀಡಿದರು.

ಇದೇ ವೇಳೆ ಮೇಕೆದಾಟು ಯೋಜನೆಗೆ ರಾಜ್ಯ ಸರಕಾರ 1000 ಕೋಟಿ ರೂ. ಮಂಜೂರು ಮಾಡಿದ್ದರೂ ಭೂಮಿ ಸ್ವಾಧೀನಪಡಿಸಿಕೊಳ್ಳುವಂತಹ ಕಾರ್ಯವನ್ನೇಕೆ ಆರಂಭಿಸಿಲ್ಲ ಎಂದು ಪ್ರಶ್ನಿಸಿದರು.

ನೆರೆಯ ರಾಜ್ಯಗಳಾದ ತಮಿಳುನಾಡು, ಮಹಾರಾಷ್ಟ್ರಕ್ಕೆ ಹಲವು ನೀರಾವರಿ ಯೋಜನೆಗಳಿದ್ದರೆ, ಕರ್ನಾಟಕಕ್ಕೆ ಕೆಲವನ್ನು ಮಾತ್ರ ಮಂಜೂರು ಮಾಡಲಾಗಿದೆ. ಇದು ರಾಜ್ಯಕ್ಕೆ ನ್ಯಾಯ ಸಿಕ್ಕಿಲ್ಲ ಎಂಬುದನ್ನು ತೋರಿಸುತ್ತದೆ. ಕೇಂದ್ರದಿಂದ ರಾಜ್ಯಕ್ಕೆ ಹೆಚ್ಚಿನ ಯೋಜನೆಗಳನ್ನು ತಲುಪಿಸಲು ಅಧಿಕಾರಿಗಳು ಕೆಲಸ ಮಾಡಬೇಕು.

ನೀರಾವರಿ ಯೋಜನೆಗಳಿಗೆ ಮುಂದಿನ ಐದು ವರ್ಷಗಳಲ್ಲಿ 1 ಲಕ್ಷ ಕೋಟಿ ರೂ.ಗಳನ್ನು ಬಳಸಿಕೊಳ್ಳುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ. ನೀವು ಸರ್ಕಾರದಿಂದ ಅಥವಾ ಇತರ ಮೂಲಗಳಿಂದ ಸಂಪನ್ಮೂಲಗಳನ್ನು ಕ್ರೋಢೀಕರಿಸುವ ಕೆಲಸ ಮಾಡಬೇಕು ಎಂದರು.

ಇದೇ ವೇಳೆ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರಸಿಂಗ್ ಶೇಕಾವತ್ ಅವರನ್ನು ಶ್ಲಾಘಿಸಿದ ಶಿವಕುಮಾರ್ ಅವರು, ಗಜೇಂದ್ರಸಿಂಗ್ ಒಳ್ಳೆಯ ವ್ಯಕ್ತಿ. ಕರ್ನಾಟಕಕ್ಕಾಗಿ ಅವರ ನೆರವು ತೆಗೆದುಕೊಳ್ಳೋಣ, ಸಂಸದರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳೋಣ, ಬೇಕಾದರೆ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಭೇಟಿ ಮಾಡುತ್ತೇವೆ ಎಂದು ಹೇಳಿದರು.

ಕಾಮಗಾರಿ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಬೇಡಿ, ಭ್ರಷ್ಟಾಚಾರಕ್ಕೆ ಅವಕಾಶ ನೀಡದಂತೆ ಇದೇ ವೇಳೆ ಎಚ್ಚರಿಕೆ ನೀಡಿದರು.

ಅಧಿಕಾರಿಗಳು ಟೆಂಡರ್ ಕರೆಯುವುದು, ಕಾಮಗಾರಿ ಮಂಜೂರು ಮಾಡುವುದು, ಬಿಲ್ ಜನರೇಟ್ ಮಾಡುವುದು ಹಾಗೂ ಇತರೆ ಕಾಮಗಾರಿಗಳಿಗೆ ಸಮಯ ವ್ಯರ್ಥ ಮಾಡಬಾರದು. ಬದಲಾವಣೆ ತರೋಣ, ನೀವು ಕೆಲಸ ಮಾಡದಿದ್ದರೆ ನಿಮ್ಮ ಜಾಗದಲ್ಲಿ ಬೇರೆ ಅಧಿಕಾರಿಗಳು ಕೆಲಸ ಮಾಡುತ್ತಾರೆ, ಕೆಲಸ ಮಾಡಿ ಎಂದರು.

2018ರಲ್ಲಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಜಲಸಂಪನ್ಮೂಲ ಸಚಿವರಾಗಿದ್ದ ಶಿವಕುಮಾರ್ ಅವರು, ‘ನಾನು ಸಚಿವ ಸ್ಥಾನದಿಂದ ಕೆಳಗಿಳಿದ ನಂತರ ಇಲಾಖೆಯಲ್ಲಿ ಯಾವುದೇ ಪ್ರಗತಿಗಳು ಕಂಡು ಬರಲಿಲ್ಲ. ಇದೀಗ ಮರಳಿ ಸಚಿವನಾಗಿ ಬಂದಿದ್ದು, ಇಲಾಖೆಯಲ್ಲಿನ ಅಧಿಕಾರಿಗಳು ಚುರುಕುನಿಂದ ಕೆಲಸ ಮಾಡಬೇಕು. ಜಲಾಶಯಗಳನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ನೀಲನಕ್ಷೆ ಸಿದ್ಧಪಡಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಳೆದ ವರ್ಷ ಮೇ ತಿಂಗಳಲ್ಲಿ ಮೇಕೆದಾಟುವಿನಿಂದ ಬೆಂಗಳೂರಿಗೆ ಬೃಹತ್ ರ್ಯಾಲಿ ನಡೆಸಿದ್ದ ಡಿಕೆ.ಶಿವಕುಮಾರ್ ಅವರು, ಅಂದಿನ ಬಿಜೆಪಿ ಸರ್ಕಾರ ಯೋಜನೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿದ್ದರು.

SCROLL FOR NEXT