ರಾಜ್ಯ

ಬೆಂಗಳೂರಿನಲ್ಲಿ ವಿದ್ಯುತ್ ತಗುಲಿ ತಾಯಿ, ಮಗು ಸಾವು: ರಾಜ್ಯ ಸರ್ಕಾರಕ್ಕೆ NHRC ನೋಟಿಸ್

Lingaraj Badiger

ನವದೆಹಲಿ: ಬೆಂಗಳೂರಿನ ವೈಟ್ ಫೀಲ್ಡ್ ಬಳಿ ಫುಟ್‌ಪಾತ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ವಿದ್ಯುತ್ ತಂತಿ ತುಳಿದು ತಾಯಿ ಮತ್ತು ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್‌ಎಚ್‌ಆರ್‌ಸಿ) ಮಂಗಳವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ವರದಿ ಆಧರಿಸಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ಎನ್‌ಎಚ್‌ಆರ್‌ಸಿ, ಘಟನೆ ಬಗ್ಗೆ ಮತ್ತು ತೆಗೆದುಕೊಂಡ ಕ್ರಮಗಳ ಬಗ್ಗೆ ಆರು ವಾರಗಳಲ್ಲಿ ವಿವರವಾದ ವರದಿ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ ನೋಟಿಸ್ ನೀಡಿದೆ.

ಈ ಘಟನೆಯು ಬೆಂಗಳೂರಿನ ವಿದ್ಯುತ್ ಇಲಾಖೆಯ ನಿರ್ಲಕ್ಷ್ಯವನ್ನು ಸೂಚಿಸುತ್ತದೆ ಮತ್ತು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಎನ್‌ಎಚ್‌ಆರ್‌ಸಿ ಹೇಳಿದೆ.

ಬೆಸ್ಕಾಂ ಅಧಿಕಾರಿಗಳು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯದಿಂದಲೇ ತಾಯಿ, ಮಗು ಪ್ರಾಣ ಕಳೆದುಕೊಂಡಿದ್ದಾರೆ ಎಂಬುದು ಮೇಲ್ನೋಟಕ್ಕೆ ತೋರುತ್ತದೆ. ಸಿಬ್ಬಂದಿ, ಅಧಿಕಾರಿಗಳ ವಿರುದ್ಧ ಏನು ಕ್ರಮ ಕೈಗೊಂಡಿರಿ? ಸಂತ್ರಸ್ತರಿಗೆ ಯಾವ ರೀತಿ ಪರಿಹಾರ ನೀಡಲಾಗಿದೆ? ಎಂಬ ಬಗ್ಗೆ ವರದಿ ನೀಡುವಂತೆ ಎನ್‌ಎಚ್‌ಆರ್‌ಸಿ ರಾಜ್ಯ ಸರ್ಕಾರ ಸೂಚಿಸಿದೆ.

ಬೆಸ್ಕಾಂ ಕಚೇರಿಯಿಂದ 100 ಮೀಟರ್ ದೂರದಲ್ಲಿರುವ ವೈಟ್‌ಫೀಲ್ಡ್ ಮುಖ್ಯರಸ್ತೆಯ ಹೋಪ್ ಫಾರ್ಮ್ ಜಂಕ್ಷನ್ ಬಳಿ ಭಾನುವಾರ ಫುಟ್‌ಪಾತ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸೌಂದರ್ಯ (23) ಮತ್ತು ಅವರ ಒಂಬತ್ತು ತಿಂಗಳ ಮಗು ಸಜೀವ ದಹನವಾಗಿದ್ದರು.

SCROLL FOR NEXT