ಬೆಂಗಳೂರು: ಪೊಲೀಸರು ವಿಶೇಷವಾಗಿ ಮಹಿಳೆಯರಿಗೆ ರಕ್ಷಣೆ ನೀಡಬೇಕು, ತಮ್ಮ ಕಾರ್ಯವ್ಯಾಪ್ತಿಯಲ್ಲಿ ಬಿಗಿ ನಿಗಾ ಇಡಬೇಕು ಮತ್ತು ಅಪರಾಧ ತಡೆಗೆ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸ್ಥಾಪಿಸಲಾದ 'ಸೇಫ್ ಸಿಟಿ ಕಮಾಂಡ್ ಸೆಂಟರ್' ನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಇಂತಹ ಸೌಲಭ್ಯಗಳ ಪ್ರಯೋಜನಗಳು ಜನರಿಗೆ ತಲುಪಬೇಕು ಎಂದರು.
ಬೆಂಗಳೂರಿನಲ್ಲಿ ಸರಗಳ್ಳತನ, ಮಹಿಳೆಯರ ಮೇಲಿನ ದೌರ್ಜನ್ಯ, ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಅಪರಾಧಗಳು ಮತ್ತು ಕಾನೂನುಬಾಹಿರ ಚಟುವಟಿಕೆಗಳನ್ನು ನಿಗ್ರಹಿಸಲು ‘ನಿರ್ಭಯಾ ನಿಧಿ’ ಬಳಸಿ 668 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಈ ಕೇಂದ್ರವನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.
ನಗರವು ಎಲ್ಲರಿಗೂ ಸುರಕ್ಷಿತವಾಗಿದೆ ಎಂದು ಖಚಿತಪಡಿಸಿಕೊಳ್ಳಲು ಒಂಟಿ ಮನೆಗಳ ಮೇಲೆ ಮತ್ತು ಒಂಟಿ ಮಹಿಳೆಯರು ವಾಸಿಸುವ ನಿವಾಸಗಳ ಮೇಲೆ ಪೊಲೀಸರು ನಿಗಾ ಇಡಬೇಕು ಎಂದರು.
ನಗರದಲ್ಲಿ ಸಂಚಾರ ಸುಗಮಗೊಳಿಸಲು ಪೊಲೀಸರು ಗಮನಹರಿಸಬೇಕು. ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಆಯಾ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಸಿದ್ದರಾಮಯ್ಯ ಸೂಚಿಸಿದರು.
ಅಪರಾಧಗಳು ನಡೆಯದಂತೆ ನೋಡಿಕೊಳ್ಳಿ ಎಂದು ಪೊಲೀಸರಿಗೆ ಸೂಚಿಸಿದ ಅವರು, ಅಪರಾಧ ನಡೆದ ನಂತರ ಅಪರಾಧಿಯನ್ನು ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕು. ಇದರಿಂದ ಸಮಾಜದಲ್ಲಿ ತಪ್ಪು ಕೆಲಸ ಮಾಡುವವರಿಗೆ ಬಿಸಿ ಮುಟ್ಟಿಸಿದಂತಾಗುತ್ತದೆ ಎಂದು ಹೇಳಿದರು.