ರಾಜ್ಯ

ಬೆಂಗಳೂರಿನಲ್ಲಿ ಪಟಾಕಿ ದುರಂತ: ಉನ್ನತ ಮಟ್ಟದ ತನಿಖೆಗೆ ಆದೇಶಿಸಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ; ಎಚ್‌ಡಿ ಕುಮಾರಸ್ವಾಮಿ

Ramyashree GN

ಬೆಂಗಳೂರು: ಆನೇಕಲ್ ತಾಲೂಕಿನ ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಸಂಭವಿದ ಅಗ್ನಿ ದುರಂತದಲ್ಲಿ 14 ಜನ ಕಾರ್ಮಿಕರು ಸಾವಿಗೆ ಸಂತಾಪ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ಘಟನೆ ಬಗ್ಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಬೆಂಕಿ ಅವಘಡದಲ್ಲಿ 14 ಜನರು ಸಾವಿಗೀಡಾಗಿರುವ ಘಟನೆ ಬಗ್ಗೆ ತಿಳಿದು ನನಗೆ ತೀವ್ರ ದಿಗ್ಭ್ರಮೆ ಉಂಟಾಗಿದೆ. ದೀಪಾವಳಿಗೆ ಬದುಕು ಕಟ್ಟಿಕೊಳ್ಳಲು ಹೊರಟಿದ್ದ ಈ ಮುಗ್ಧ ಜೀವಗಳು ಬೆಂಕಿಯ ಕೆನ್ನಾಲಿಗೆಗೆ ಸಿಕ್ಕಿ ಬಲಿಯಾಗಿರುವ ಘಟನೆ ನನ್ನ ಮನವನ್ನು ಕಲಕಿದೆ ಎಂದಿದ್ದಾರೆ.

ಜೀವ ಕಳೆದುಕೊಂಡ ಎಲ್ಲಾ ನತದೃಷ್ಟ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಕುಟುಂಬಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಂಭವಿಸಿರುವ ಈ ಘಟನೆ ಅನೇಕ ಪ್ರಶ್ನೆಗಳಿಗೆ ದಾರಿ ಮಾಡಿಕೊಟ್ಟಿದೆ. ಸುರಕ್ಷತೆ ಬಗ್ಗೆ ಮುನ್ನೆಚ್ಚರಿಕೆ ವಹಿಸದೆ ಇದ್ದಿದ್ದೇ ದುರಂತಕ್ಕೆ ಕಾರಣ ಎಂಬುದರಲ್ಲಿ ಎರಡು ಮಾತಿಲ್ಲ. ಈ ಬಗ್ಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು. ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಮುಂದೆ ಇಂತಹ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬದುಕು ಕಳೆದುಕೊಂಡ ಕುಟುಂಬಗಳಿಗೆ ರಾಜ್ಯ ಸರ್ಕಾರ ಆಸರೆಯಾಗಿ ನಿಲ್ಲಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

SCROLL FOR NEXT