ರಾಜ್ಯ

ಚಕ್ರವರ್ತಿ ಅಣ್ಣನ ಮಾತಿಗೆ ಗೌರವ ನೀಡಿ ಉಪವಾಸ ಸತ್ಯಾಗ್ರಹ ಅಂತ್ಯ- ಪುನೀತ್ ಕೆರೆಹಳ್ಳಿ

Nagaraja AB

ಬೆಂಗಳೂರು: ತಮ್ಮ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳ ಕುರಿತು ಸ್ಪಷ್ಪೀಕರಣ ನೀಡುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಆಸ್ಪತ್ರೆಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ರಾಷ್ಟ್ರ ರಕ್ಷಣಾ ಪಡೆ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ತಮ್ಮ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಪುನೀತ್ ಕೆರೆಹಳ್ಳಿ, ಸರ್ಕಾರದ ಪರವಾಗಿ ಮನವಿ ಸ್ವೀಕರಿಸಿದ ತಹಸೀಲ್ದಾರರಿಗೆ ಧನ್ಯವಾದಗಳು. ಚಕ್ರವರ್ತಿ ಅಣ್ಣನವರ ಮಾತಿಗೆ ಗೌರವ ನೀಡಿ ಉಪವಾಸ ಸತ್ಯಾಗ್ರಹ ಅಂತ್ಯ ಮಾಡುತ್ತಿದ್ದೇನೆ, ಕಾನೂನು ಹೋರಾಟ ಮುಂದುವರೆಸುತ್ತೇನೆ ಎಂದು ತಿಳಿಸಿದ್ದಾರೆ. 

ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನ ಚಾಮರಾಜಪೇಟೆ, ರಾಮನಗರ ಜಿಲ್ಲೆಯ ಸಾತನೂರು ಸೇರಿದಂತೆ ವಿವಿಧ ಠಾಣೆಗಳಲ್ಲಿ ದೊಂಬಿ, ಕೊಲೆ, ಹಲ್ಲೆ, ಪ್ರಾಣ ಬೆದರಿಕೆ ಮತ್ತಿತರ ಆರೋಪದಡಿ ಪ್ರಕರಣ ದಾಖಲಾಗಿದ್ದು, ಈ ಹಿಂದೆ ಅವರ ಹೆಸರನ್ನು ರೌಡಿಪಟ್ಟಿಗೆ  ಸೇರ್ಪಡೆ ಮಾಡಲಾಗಿತ್ತು. ನಂತರ ಅವರನ್ನು ಬಂಧಿಸಲಾಗಿತ್ತು. ಇತ್ತೀಚಿಗೆ ಜಾಮೀನು ಪಡೆದು ಜೈಲಿನಿಂದ ಹೊರಗೆ ಬಂದಿದ್ದಾರೆ.

ಅಕ್ಟೋಬರ್ 3 ರಂದು ಸ್ವಾತಂತ್ರ್ಯ ಉದ್ಯಾನವದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪುನೀತ್ ಕೆರೆಹಳ್ಳಿ ಅವರನ್ನು ವಶಕ್ಕೆ ಪಡೆದ ಪೊಲೀಸರು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿಯೂ ಆಹಾರ, ನೀರು ಸೇವಿಸುವುದಿಲ್ಲ, ಚಿಕಿತ್ಸೆ ಪಡೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಅಲ್ಲದೇ ಅವರ ವಿರುದ್ಧ ಆತ್ಮಹತ್ಯೆ ಯತ್ನ ಪ್ರಕರಣ ಕೂಡಾ ದಾಖಲಾಗಿತ್ತು.

SCROLL FOR NEXT