ರಾಜ್ಯ

ಕಾಡಾನೆ ದಾಳಿಗೆ ರೈತ ಸಾವು; ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

Ramyashree GN

ಮೈಸೂರು: ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಬಳಿ ಗುರುವಾರ ಕಾಡಾನೆ ದಾಳಿಗೆ ರೈತರೊಬ್ಬರು ಸಾವಿಗೀಡಾಗಿದ್ದಾರೆ. ಘಟನೆ ನಡೆದರೂ ಸ್ಥಳಕ್ಕೆ ಭೇಟಿ ನೀಡಲು ಮುಂದಾಗದ ಅರಣ್ಯ ಇಲಾಖೆ ಅಧಿಕಾರಿಗಳನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ.

ಮೃತ ರೈತನನ್ನು 65 ವರ್ಷದ ಚಿಕ್ಕೇಗೌಡ ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಉದ್ಯಾನವನದ ಮೊಳೆಯೂರು ಅರಣ್ಯ ವ್ಯಾಪ್ತಿಯ ನಡಹಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಪೊಲೀಸ್ ಇಲಾಖೆಯಿಂದ ಉಪ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲಕೃಷ್ಣ, ಸರ್ಕಲ್ ಇನ್ಸ್‌ಪೆಕ್ಟರ್ ಲಕ್ಷ್ಮೀಕಾಂತ್ ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದರು. ಈ ವೇಳೆ, ಅರಣ್ಯ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ಕಿಡಿಕಾರಿದ್ದು, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕ್ರಮ ಕೈಗೊಳ್ಳುವ ಭರವಸೆ ನೀಡಬೇಕು ಎಂದು ಒತ್ತಾಯಿಸಿದರು.

ಮೈಸೂರು, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಕಾಡಾನೆಗಳ ಹಾವಳಿ ಹೆಚ್ಚಿದೆ. ಕ್ಷಿಪ್ರ ಕಾರ್ಯಾಚರಣೆ ತಂಡದ ಸದಸ್ಯರೊಬ್ಬರ ಮೇಲೆ ಕಾಡಾನೆಯೊಂದು ದಾಳಿ ನಡೆಸಿ ಕೊಂದು ಹಾಕಿದ ಘಟನೆ ಕೊಡಗು ಜಿಲ್ಲೆಯ ಆನೆಕಾಡು ಅರಣ್ಯದಲ್ಲಿ ಸೆಪ್ಟೆಂಬರ್ 4 ರಂದು ವರದಿಯಾಗಿದೆ.

SCROLL FOR NEXT