ರಾಜ್ಯ

ಚಿಕ್ಕಬಳ್ಳಾಪುರ ಭೀಕರ ಅಪಘಾತದಲ್ಲಿ 13 ಮಂದಿ ಸಾವು: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

Lingaraj Badiger

ಬೆಂಗಳೂರು: ಚಿಕ್ಕಬಳ್ಳಾಪುರದ ಚಿತ್ರಾವತಿ ಸಮೀಪ ಗುರುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ 13 ಮಂದಿ ಮೃತಪಟ್ಟಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ, ಚಿಕ್ಕಬಳ್ಳಾಪುರದ ಚಿತ್ರಾವತಿ ಸಮೀಪ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ 13 ಮಂದಿ ಮೃತಪಟ್ಟ ಸುದ್ದಿ ತಿಳಿದು ಅತೀವ ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ.

ಮೃತ ದುರ್ದೈವಿಗಳ ಕುಟುಂಬಗಳಿಗೆ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂದು ಬೆಳಗಿನ ಜಾವ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆಯ ಮುಂದೆಯೇ ರಸ್ತೆ ಬದಿ ನಿಂತಿದ್ದ ಸಿಮೆಂಟ್ ಲಾರಿಗೆ ಟಾಟಾ ಸುಮೋ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಸುಮೋದಲ್ಲಿ 12 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಗಂಭೀರವಾಗಿ ಗಾಯಗೊಂಡಿದ್ದ ಒಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಟಾ ಸುಮೋ ಬಾಗೇಪಲ್ಲಿಯಿಂದ ಚಿಕ್ಕಬಳ್ಳಾಪುರದ ಕಡೆ ಹೋಗುತ್ತಿತ್ತು. ಆದರೆ ದಟ್ಟ ಮಂಜು ಕವಿದ ಹಿನ್ನೆಲೆಯಲ್ಲಿ ಟಾಟಾ ಸುಮೊ ಚಾಲಕನಿಗೆ ಸರಿಯಾಗಿ ರಸ್ತೆ ಕಾಣಿಸಿಲ್ಲ. ಇದರಿಂದ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. 

SCROLL FOR NEXT