ರಾಜ್ಯ

ನಿಗಮ, ಮಂಡಳಿಗಳಿಗೆ ನೇಮಕ: ನಾಲ್ಕು ತಾಸು ಸಭೆ ನಡೆಸಿದ ಸಿಎಂ, ಡಿಸಿಎಂ!

Nagaraja AB

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಅನುಕೂಲವಾಗುವಂತೆ ನಿಗಮ, ಮಂಡಳಿಗೆ ಶಾಸಕರನ್ನು ನೇಮಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸುಮಾರು ನಾಲ್ಕು ತಾಸು ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಸುಮಾರು 20 ಶಾಸಕರಿಗೆ ಆಯಕಟ್ಟಿನ ನಿಗಮ ಮತ್ತು ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಲು ಉಭಯ ನಾಯಕರು ಒಮ್ಮತಕ್ಕೆ ಬಂದಿದ್ದಾರೆ ಎಂದು ವರದಿಗಳು ಹೇಳಿವೆ.

ನಿಗಮ-ಮಂಡಳಿಗಳ ನೇಮಕಾತಿಯಲ್ಲೂ ಪ್ರಾದೇಶವಾರು, ಜಾತಿವಾರು, ಪ್ರಾತಿನಿಧ್ಯ ನೀಡಲು ನಿರ್ಧರಿಸಲಾಗಿದ್ದು, ಸಂಪುಟ ಸೇರಲು ಆಕಾಂಕ್ಷಿಗಳಾಗಿದ್ದ ಕೆಲವು ಹಿರಿಯ ಶಾಸಕರನ್ನೂ ನಿಗಮ, ಮಂಡಳಿಗಳ ಅಧ್ಯಕ್ಷರಾಗಿ ಮಾಡುವ ಮೂಲಕ ಅವರನ್ನು ಸಮಾಧಾನಪಡಿಸಲು ತೀರ್ಮಾನಿಸಲಾಗಿದೆ. 

ಇತ್ತೀಚಿಗೆ ಈ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಜೊತೆಗೆ ಶಿವಕುಮಾರ್ ಚರ್ಚೆ ನಡೆಸಿದ್ದರು. ಸುರ್ಜೇವಾಲಾ ಅವರು ಮಧ್ಯ ಪ್ರದೇಶ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿದ್ದು, ಅವರ ಜೊತೆಗೆ ಚರ್ಚಿಸಿದ ಬಳಿಕ ನಿಗಮ, ಮಂಡಳಿಗಳ ನೇಮಕಾತಿ ಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

SCROLL FOR NEXT