ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಚಂದ್ರು 
ರಾಜ್ಯ

ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ನಡುವಿನ ಒಳಜಗಳದಿಂದ ಕಾವೇರಿ ಹೋರಾಟಕ್ಕೆ ಹಿನ್ನಡೆ: ಮುಖ್ಯಮಂತ್ರಿ ಚಂದ್ರು

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಒಳಜಗಳದಿಂದ ಕಾವೇರಿ ಹೋರಾಟಕ್ಕೆ ಹಿನ್ನಡೆಯಾಗಿದೆ. ಈ ಇಬ್ಬರಿಗೂ ರಾಜ್ಯದ ಜನರ ಹಿತ ಬೇಕಿಲ್ಲ, ಅಧಿಕಾರ ಉಳಿಸಿಕೊಳ್ಳುವುದಷ್ಟೆ ಮುಖ್ಯವಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು  ಆರೋಪಿಸಿದರು. 

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಒಳಜಗಳದಿಂದ ಕಾವೇರಿ ಹೋರಾಟಕ್ಕೆ ಹಿನ್ನಡೆಯಾಗಿದೆ. ಇಬ್ಬರಿಗೂ ರಾಜ್ಯದ ಜನರ ಹಿತ ಕಾಪಾಡುವುದು ಬೇಕಿಲ್ಲ, ಅಧಿಕಾರ ಉಳಿಸಿಕೊಳ್ಳುವುದಷ್ಟೆ ಮುಖ್ಯವಾಗಿದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು  ಆರೋಪಿಸಿದರು. 

ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ದಮನಕಾರಿ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷ ಬೆಂಗಳೂರಿನ ಪ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿತು. ಈ ವೇಳೆ ಖಾಲಿ ಬಿಂದಿಗೆ, ಖಾಲಿ ಬಕೆಟ್ ಪ್ರದರ್ಶಿಸುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. 

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ಕಾವೇರಿ ನೀರಿನ ಸಮಸ್ಯೆ ಹಲವು ದಶಕಗಳಿಂದ ಇದೆ. ಈ ಸಮಸ್ಯೆಗೆ ಸರ್ಕಾರದ ಇಚ್ಚಾಶಕ್ತಿ ಕೊರತೆಯೇ ಕಾರಣವಾಗಿದೆ. ರಾಜ್ಯಕ್ಕೆ ನೀರಿಲ್ಲದಿರುವಾಗ ತಮಿಳುನಾಡಿಗೆ ಬಿಡಲು ಹೇಗೆ ಸಾಧ್ಯ?. ತಕ್ಷಣವೇ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲಿ. ಮುಂದೇ ಏನೆ ಬಂದರೂ ಎದುರಿಸಲಿ, ನಾವೂ ಜೊತೆಗೆ ಇರುತ್ತೇವೆ ಎಂದರು. 

ಕಾವೇರಿ ಹೋರಾಟಕ್ಕೆ ಸಾಹಿತಿಗಳು, ಚಲನಚಿತ್ರ ನಟರು, ಗಣ್ಯರು, ಬೆಂಗಳೂರು ನಿವಾಸಿಗಳು ಕೂಡ ಕೈಜೋಡಿಸಬೇಕು. ಕಾವೇರಿ ಇಲ್ಲದಿದ್ದರೆ ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ. ಜನ ಈಗಲೇ ಎಚ್ಚೆತ್ತುಕೊಂಡು ಹೋರಾಟಕ್ಕೆ ಮುಂದಾಗದಿದ್ದರೆ, ಮುಂದಿನ ದಿನಗಳಲ್ಲಿ ಭಾರಿ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದರು.

ಡಿಕೆ ಶಿವಕುಮಾರ್ ನಿದ್ದೆ ಮಾಡುತ್ತಿದ್ದಾರೆ 

ಮೇಕೆದಾಟು ಯೋಜನೆ ಜಾರಿ ಮಾಡುತ್ತೇವೆ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಡಿಕೆ ಶಿವಕುಮಾರ್ ಅವರಿಂದು ಮಲಗಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಗೆ ಒಪ್ಪಂದ ಮಾಡಿಕೊಂಡಿದ್ದು, ಮತಬ್ಯಾಂಕ್‌ಗೆ ತೊಂದರೆಯಾಗಲಿದೆ ಎಂಬ ಕಾರಣಕ್ಕಾಗಿ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ ಎಂದು ಎಎಪಿ ಬೆಂಗಳೂರು ಘಟಕದ ಅಧ್ಯಕ್ಷ ಡಾ. ಸತೀಶ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. 

ತಮಿಳುನಾಡು ಸರ್ಕಾರದ ರಾಜಕಾರಣಿಗಳು ರೈತರಿಗೆ ನೀರು ಬಿಡಿಸಿಕೊಂಡಿದ್ದಾರೆ. ಆದರೆ, ನಮ್ಮ ರಾಜ್ಯದ ರೈತರಿಗೆ ಇರಲಿ, ಕುಡಿಯುವ ನೀರಿಗೂ ಅಭಾವ ಎದುರಾಗಿದೆ. ತಮಿಳುನಾಡಿನ ರಾಜಕಾರಣಿಗಳನ್ನು ನೋಡಿ ಕಲಿಯಬೇಕು. ಕಾಂಗ್ರೆಸ್‌ನ ಭ್ರಷ್ಟ ರಾಜಕಾರಣಕ್ಕೆ ರಾಜ್ಯದ ಜನರನ್ನು ದಾಳವನ್ನಾಗಿ ಬಳಸಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಬೆಂಗಳೂರಿಗೆ ಖಾಲಿ ಬಕೆಟ್, ಖಾಲಿ ಬಿಂದಿಗೆ ಸಿಗಲಿದೆ ಎಂದು ಹೇಳಿದರು. 

ಮೈಸೂರು-ಕೊಡಗು, ಬೆಂಗಳೂರು ಸಂಸದರು ಧ್ವನಿ ಎತ್ತಲಿ

ಆಮ್‌ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಮೋಹನ್ ದಾಸರಿ ಮಾತನಾಡಿ, ಚುನಾವಣೆಗೆ ಮುನ್ನ ಬೆಂಗಳೂರು ನಗರಕ್ಕೆ ಕುಡಿಯುವ ನೀರಿಗಾಗಿ ಮೇಕೆದಾಟು ಯೋಜನೆ ಬೇಕು ಎಂದು ಹೋರಾಟ ಮಾಡಿದ ಡಿಕೆ ಶಿವಕುಮಾರ್ ಇಂದು ನೀರಾವರಿ ಸಚಿವರಾಗಿದ್ದಾರೆ. ಬೆಂಗಳೂರು ಉಸ್ತುವಾರಿ ಕೂಡ ಅವರದ್ದೇ ಆಗಿದೆ. ಆದರೆ, ನಮಗೇ ನೀರಿಲ್ಲದಿದ್ದರೂ ತಮಿಳುನಾಡಿಗೆ ನೀರು ಹರಿಸುತ್ತಿದ್ದಾರೆ ಎಂದು ಹೇಳಿದರು. 

ಕಾಂಗ್ರೆಸ್, ಬಿಜೆಪಿ ಎರಡೂ ಪಕ್ಷಗಳು ಕೂಡ ರಾಜಕೀಯ ಕಾರಣಗಳಿಗಾಗಿ ತಮಿಳುನಾಡಿಗೆ ನೀರು ಹರಿಸುತ್ತಿವೆ. ರಾಜ್ಯಕ್ಕೆ ಹೆಚ್ಚಿನ ನಷ್ಟವಾಗುತ್ತಿದೆ. ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ, ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಅವರಂತಹವರು ಕೂಡ ಈ ವಿಚಾರದಲ್ಲಿ ಮಾತನಾಡುತ್ತಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT