ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದ ಕೆಲವು ಭಾಗಗಳಲ್ಲಿ ಬಿಸಿಗಾಳಿ: ಹವಾಮಾನ ಇಲಾಖೆ ಎಚ್ಚರಿಕೆ

Nagaraja AB

ಬೆಂಗಳೂರು: ತೀವ್ರತರವಾದ ಬಿಸಿಲಿನ ಸಮಯದಲ್ಲಿ ಜನರು ತಮ್ಮನ್ನು ತಾವು ಸುರಕ್ಷಿತವಾಗಿರಿಸಿಕೊಳ್ಳಲು ತೆಗೆದುಕೊಳ್ಳಬೇಕಾದ ಸೂಕ್ತ ಕ್ರಮಗಳ ಕುರಿತು ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಸಲಹೆ ನೀಡಿದೆ.

ಕರ್ನಾಟಕದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಬಿಸಿಲು, ಉಷ್ಣಾಂಶ ಹೆಚ್ಚಿದ್ದು, ಸುರಕ್ಷತಾ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ರಾಜ್ಯದ ಕೆಲವು ಭಾಗಗಳಲ್ಲಿ ಮುಂದಿನ ಐದು ದಿನಗಳ ಕಾಲ ಬಿಸಿಗಾಳಿ ಎಚ್ಚರಿಕೆ ನೀಡಿದೆ.

ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ತುಮಕೂರು, ಮಂಡ್ಯ, ಗದಗ, ದಾವಣಗೆರೆ ಮತ್ತು ಚಿತ್ರದುರ್ಗದಂತಹ ಪ್ರದೇಶಗಳಲ್ಲಿ ನಾಳೆ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ಗೆ ತಲುಪುವ ಸಾಧ್ಯತೆಯಿದೆ ಎಂದು ಕೇಂದ್ರದ ನಿರ್ದೇಶಕ ಸಿ ಪಿ ಪಾಟೀಲ್ ತಿಳಿಸಿದ್ದಾರೆ. ಏಪ್ರಿಲ್ 25 ರಂದು ಈ ಕಡೆಗಳಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.ಕರಾವಳಿ ಪ್ರದೇಶದಲ್ಲಿ ತುಂಬಾ ಬಿಸಿ ಗಾಳಿ ಇರಲಿದ್ದು, ಮಕ್ಕಳು ಮತ್ತು ವೃದ್ಧರು ಶಾಖಕ್ಕೆ ಒಡ್ಡಿಕೊಳ್ಳುದನ್ನು ತಪ್ಪಿಸುವುದು ಉತ್ತಮ ಎಂದು ಅವರು ಸಲಹೆ ನೀಡಿದ್ದಾರೆ.

ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಮನೆಯಿಂದ ಹೊರಗೆ ಹೋಗುವುದನ್ನು ಆದಷ್ಟು ಕಡಿಮೆ ಮಾಡಬೇಕು, ಹೊರಗೆ ಹೋದಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ ಅಥವಾ ಟೋಪಿಯನ್ನು ಬಳಸುವುದು ಉತ್ತಮ. ನಿರ್ಜಲೀಕರಣಕ್ಕೆ ಕಾರಣವಾಗುವ ಕಾರಣ ತಂಪು ಪಾನೀಯ ಕೂಡಾ ತ್ಯಜಿಸಬೇಕು, ಬಾಯಾರಿಕೆಯಿಲ್ಲದಿದ್ದರೂ ಸಾಧ್ಯವಾದಷ್ಟು ನೀರು ಕುಡಿಯುವುದು ಉತ್ತಮ ಎಂದು ಬೆಂಗಳೂರಿನ ಹವಾಮಾನ ಕೇಂದ್ರದ ಎಲ್‌ಎಸಿಡಿ ಮುಖ್ಯಸ್ಥ ಎಂ ರಾಜವೇಲ್ ಹೇಳಿದರು.

ಮುಂದಿನ 48 ಗಂಟೆಗಳ ಕಾಲ ಬೆಂಗಳೂರಿನ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 37 ಡಿಗ್ರಿ ಸೆಲ್ಸಿಯಸ್ ಮತ್ತು 23 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯಿದೆ ಎಂದು ಪಾಟೀಲ್ ಹೇಳಿದ್ದಾರೆ.

SCROLL FOR NEXT