ಬೆಳಗಾವಿ: ಅತಿವೃಷ್ಟಿ ಹಾಗೂ ಪ್ರವಾಹದಿಂದ ಬಾಧಿತಗೊಂಡಿರುವ ಬೆಳಗಾವಿ ಜಿಲ್ಲೆಗೆ ಸೋಮವಾರ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಳೆಯಿಂದಾದ ಹಾನಿಯನ್ನು ಪರಿಶೀಲಿಸಿದರು.
ಅತಿವೃಷ್ಟಿಯಿಂದಾಗಿ ಘಟಪ್ರಭಾ ನದಿಯಿಂದ ಮುಳುಗಡೆಯಾಗಿದ್ದ ಲೋಳಸೂರ ಸೇತುವೆಯನ್ನು ವೀಕ್ಷಿಸಿದ ಮುಖ್ಯಮಂತ್ರಿ, ಹಿನ್ನೀರಿನಿಂದ ಒಂದು ವಾರದಿಂದ ಮುಳುಗಡೆಯಾಗಿದ್ದ ಗೋಕಾಕನಗರದ ಹಳೆ ದನಗಳ ಪೇಟೆ, ಮಟನ್ ಮಾರ್ಕೆಟ್, ಕುಂಬಾರಗಲ್ಲಿ, ಉಪ್ಪಾರಗಲ್ಲಿ, ಭೋಜಗಾರ ಗಲ್ಲಿ ಮತ್ತಿತರ ಪ್ರದೇಶಗಳಿಗೆ ಭೇಟಿದರು.
ನಂತರ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ, ಸಂತ್ರಸ್ತರಿಗೆ ಊಟೋಪಚಾರ ಹಾಗೂ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತಿತರರು ಉಪಸ್ಥಿತರಿದ್ದರು.
ಇದಕ್ಕೂ ಮುನ್ನಾ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಈ ಹಿಂದೆ ಬಿ.ಎಸ್. ಯಡಿಯೂರಪ್ಪನವರು ಸಂಪೂರ್ಣ ಮನೆ ಹಾನಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಈ ನೆರವಿನ ದುರುಪಯೋಗವಾಗಿತ್ತು, ಹಲವರಿಗೆ ಮೊದಲನೇ ಕಂತು ಮಾತ್ರ ಬಿಡುಗಡೆಯಾಗಿ, ಎರಡು ಹಾಗೂ ಮೂರನೇ ಕಂತಿನ ಪರಿಹಾರ ಈವರೆಗೂ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ 1.2 ಲಕ್ಷ ರೂ. ಪರಿಹಾರ ಹಾಗೂ ಮನೆ ನೀಡುವ ನಿರ್ಧಾರ ಮಾಡಿದೆ. ಜನರ ಸಹಕಾರವಿದ್ದರೆ ಪದೇ ಪದೇ ಮುಳುಗಡೆಯಾಗುವ ಹಳ್ಳಿಗಳ ಸ್ಥಳಾಂತರ ಮೂಲಕ ಶಾಶ್ವತ ಪರಿಹಾರ ಒದಗಿಸಲು ಚಿಂತಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
ರಾಜ್ಯದ ಹಲವೆಡೆ ಮಳೆಯಿಂದ ಹಾನಿಯಾಗಿದೆ. ಎಲ್ಲ ಕಡೆ ಪರಿಹಾರ ಕೆಲಸಗಳನ್ನು ಪ್ರಾರಂಭಿಸಲಾಗಿದೆ. ಮೈಸೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಭೇಟಿ ನೀಡಲಾಗಿದ್ದು, ಜನ-ಜಾನುವಾರುಗಳ ಸಾವಿಗೆ ಕೂಡಲೇ ಪರಿಹಾರ ವಿತರಿಸಲಾಗುತ್ತಿದೆ. ಮನೆಗಳು ಬಿದ್ದಿರುವುದಕ್ಕೆ ಪರಿಹಾರ, ವಿದ್ಯುತ್ ಕಂಬ, ಟ್ರಾನ್ಸ್‌ಫಾರ್ಮರ್ ಗಳ ದುರಸ್ತಿ ಮೊದಲಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಬೆಳಗಾವಿಯಲ್ಲಿ ಕಳೆದ 42 ದಿನದಿಂದ ನಿರಂತರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿಗಳಿಗೂ ರಜೆ ಘೋಷಣೆ ಮಾಡುವಂತೆ ಸೂಚಿಸಲಾಗಿದೆ. ಮುಂದಿನ ವಾರ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ಇದಕ್ಕಾಗಿ ಕಂದಾಯ, ವಿಪತ್ತು ನಿರ್ವಹಣೆ, ಅರಣ್ಯ ಇಲಾಖೆ, ಇಂಧನ, ನೀರಾವರಿ ಸೇರಿದಂತೆ ಎಲ್ಲ ಇಲಾಖೆಗಳು ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ ಎಂದು ಹೇಳಿದರು.