ಅತಿವೃಷ್ಟಿ ಹಾಗೂ ಪ್ರವಾಹದಿಂದ ಬಾಧಿತಗೊಂಡಿರುವ ಬೆಳಗಾವಿ ಜಿಲ್ಲೆಗೆ ಸೋಮವಾರ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಳೆಯಿಂದಾದ ಹಾನಿಯನ್ನು ಪರಿಶೀಲಿಸಿದರು. ಅತಿವೃಷ್ಟಿಯಿಂದಾಗಿ ಘಟಪ್ರಭಾ ನದಿಯಿಂದ ಮುಳುಗಡೆಯಾಗಿದ್ದ ಲೋಳಸೂರ ಸೇತುವೆಯನ್ನು ವೀಕ್ಷಿಸಿದ ಸಿಎಂ, ಹಿನ್ನೀರಿನಿಂದ ಒಂದು ವಾರದಿಂದ ಮುಳುಗಡೆಯಾಗಿದ್ದ ಗೋಕಾಕನಗರದ ಪ್ರದೇಶಗಳಿಗೆ ಭೇಟಿ ನೀಡಿದರು. ಇದಕ್ಕೂ ಮುನ್ನಾ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಈ ಹಿಂದೆ ಬಿ.ಎಸ್. ಯಡಿಯೂರಪ್ಪನವರು ಸಂಪೂರ್ಣ ಮನೆ ಹಾನಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಈ ನೆರವಿನ ದುರುಪಯೋಗವಾಗಿತ್ತು, ಹಲವರಿಗೆ ಮೊದಲನೇ ಕಂತು ಮಾತ್ರ ಬಿಡುಗಡೆಯಾಗಿ, ಎರಡು ಹಾಗೂ ಮೂರನೇ ಕಂತಿನ ಪರಿಹಾರ ಈವರೆಗೂ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ 1.2 ಲಕ್ಷ ರೂ. ಪರಿಹಾರ ಹಾಗೂ ಮನೆ ನೀಡುವ ನಿರ್ಧಾರ ಮಾಡಿದೆ. ಜನರ ಸಹಕಾರವಿದ್ದರೆ ಪದೇ ಪದೇ ಮುಳುಗಡೆಯಾಗುವ ಹಳ್ಳಿಗಳ ಸ್ಥಳಾಂತರ ಮೂಲಕ ಶಾಶ್ವತ ಪರಿಹಾರ ಒದಗಿಸಲು ಚಿಂತಿಸಲಾಗುವುದು ಎಂದು ತಿಳಿಸಿದರು. ಇದೇ ವೇಳೆ, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದರೆ ಕಾನೂನಾತ್ಮಕ ಹಾಗೂ ರಾಜಕೀಯ ಹೋರಾಟ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನ ಕೋಣನಕುಂಟೆಯ ಕೃಷ್ಣಾ ನಗರದಲ್ಲಿ ಮನೆ ಬಳಿ ಬೆಳಗ್ಗೆ 5 ಗಂಟೆ ಸುಮಾರಿಗೆ ವಾಕಿಂಗ್ ಹೊರಟಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಕ್ಯಾಬ್ ಚಾಲಕನನ್ನು ಬಂಧಿಸಿದ್ದಾರೆ. ಆಗಸ್ಟ್ 2ರಂದು ಮಹಿಳೆ ವಾಕಿಂಗ್ ಗೆ ಹೊರಟಿದ್ದಾಗ ದುಷ್ಕರ್ಮಿಯೊಬ್ಬ ಆಕೆ ಬಳಿ ಬಂದು ಆಕೆಯನ್ನು ತಬ್ಬಿಕೊಂಡು ಬಲವಂತವಾಗಿ ಮುತ್ತಿಟ್ಟಿದ್ದನು. ಈ ವೇಳೆ ಮಹಿಳೆ ಕಿರುಚಿಕೊಂಡಿದ್ದು, ಕೂಡಲೇ ಆತ ಆಕೆಯನ್ನು ಬಿಟ್ಟು ಓಡಿ ಹೋಗಿದ್ದನು. ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೇ ವಿಡಿಯೋ ಆಧಾರದ ಮೇರೆಗೆ ಕಾರ್ಯಾಚರಣೆ ನಡೆಸಿದ ಬೆಂಗಳೂರು ಪೊಲೀಸರು ಆರೋಪಿ ಕ್ಯಾಬ್ ಚಾಲಕ 25 ವರ್ಷದ ಸುರೇಶ್ ಎಂಬಾತನನ್ನು ಬಂಧಿಸಿದ್ದಾರೆ.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಇಂದು ಬೆಂಗಳೂರಿನ ಎಸಿಎಂಎಂ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದೆ. ಸುಮಾರು 3 ಸಾವಿರ ಪುಟಗಳ ಪ್ರಾಥಮಿಕ ದೋಷಾರೋಪ ಪಟ್ಟಿಯಲ್ಲಿ, ಆರೋಪಿಗಳಾದ ಸತ್ಯನಾರಾಯಣ ವರ್ಮ, ಸತ್ಯನಾರಾಯಣ ಇಟ್ಕಾರಿ, ವಾಲ್ಮೀಕಿ ನಿಗಮ ಎಂಡಿ ಪದ್ಮನಾಭ. ಲೆಕ್ಕಾಧಿಕಾರಿ ಪರಶುರಾಮ, ನೆಕ್ಕುಂಟಿ ನಾಗರಾಜ್, ನಾಗೇಶ್ವರ್, ತೇಜ, ಸಾಯಿ ತೇಜ ಸೇರಿ 12 ಜನರನ್ನು ಹೆಸರಿಸಲಾಗಿದೆ ಎಂದು ತಿಳಿದುಬಂದಿದೆ. ಆದರೆ ಇದೇ ಪ್ರಕರಣದಲ್ಲಿ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ, ಸದ್ಯ ಇಡಿ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ನಾಗೇಂದ್ರ ಹಾಗೂ ಮತ್ತೋರ್ವ ಶಾಸಕ ಬಸನಗೌಡ ದದ್ದಲ್ ಅವರ ಹೆಸರು ಸಹ ಉಲ್ಲೇಖವಾಗಿಲ್ಲ.
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಇಂದು ಆರೋಪಿಗಳನ್ನು ಕೃತ್ಯ ನಡೆದ ಸ್ಥಳಕ್ಕೆ ಕರೆ ತಂದು ಸ್ಥಳ ಮಹಜರು ನಡೆಸಿದೆ. ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಗೆ ಆರೋಪಿಗಳಾದ ಮಸ್ಸಾವೀರ್, ಅಬ್ಧುಲ್ ಮತೀನ್ ತಹಾ ನನ್ನು ಕರೆದುಕೊಂಡು ಬಂದ ಎನ್‌ಐಎ ಅಧಿಕಾರಿಗಳು, ಸ್ಥಳ ಮಹಜರು ಪ್ರಕ್ರಿಯೆ ನಡೆಸಿದರು. ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ಬಹುತೇಕ ಅಂತಿಮ ಹಂತಕ್ಕೆ ತಂದಿರುವ ಎನ್‌ಐಎ ಅಧಿಕಾರಿಗಳು ಮುಂಜಾನೆ ಬಾಂಬ್ ಇರಿಸಿದ ಭಯೋತ್ಪಾದಕರನ್ನು ಕೆಫೆಗೆ ಕರೆತಂದು ಮಾರ್ಚ್ 1ರಂದು ನಡೆದಿದ್ದ ಸ್ಫೋಟ ಮರುಸೃಷ್ಟಿ ನಡೆಸಿ, ಹೇಳಿಕೆ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು ಪೊಲೀಸ್‌ನ ಕೇಂದ್ರ ಅಪರಾಧ ವಿಭಾಗದ ಇನ್‌ಸ್ಪೆಕ್ಟರ್ ತಿಮ್ಮೇಗೌಡ ಮೃತದೇಹ ಬಿಡದಿಯ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ. 50 ವರ್ಷದ ತಿಮ್ಮೇಗೌಡ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಕೂಡ ಸಿಕ್ಕಿಲ್ಲ. ದೇಹದ ಮೇಲೆ ಗಾಯದ ಗುರುತುಗಳು ಕಂಡುಬಂದಿಲ್ಲ. ಮರಣೋತ್ತರ ಪರೀಕ್ಷೆಯ ವರದಿಯನ್ನು ಪಡೆದ ನಂತರವೇ, ಸಾವಿಗೆ ನಿಖರ ಕಾರಣ ತಿಳಿಯಲಿದೆ. ನಾವು ತನಿಖೆ ನಡೆಸುತ್ತಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.