ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದರ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಪ್ರಕರಣ ಮುಂದಿನ ವಿಚಾರಣೆಯನ್ನು ಆಗಸ್ಟ್ 29ಕ್ಕೆ ಮುಂದೂಡಿದೆ. ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸುವಂತೆ ಸಾಮಾಜಿಕ ಹೋರಾಟಗಾರರಾದ ಸ್ನೇಹಮಯಿ ಕೃಷ್ಣ ಮತ್ತು ಟಿಜೆ ಅಬ್ರಹಾಂ ಸಲ್ಲಿಸಿರುವ ದೂರುಗಳ ವಿಚಾರಣೆ ಕುರಿತ ಆದೇಶವನ್ನು ಜನಪ್ರತಿನಿಧಿಗಳ ಕೋರ್ಟ್ ನಾಳೆ ನೀಡಬೇಕಿತ್ತು. ಆದರೆ, ಸಿಎಂ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠವು, ಈ ಆದೇಶವನ್ನು ಆಗಸ್ಟ್ 29ಕ್ಕೆ ಮುಂದೂಡುವಂತೆ ಜನಪ್ರತಿನಿಧಿಗಳ ಕೋರ್ಟ್ ಗೆ ನಿರ್ದೇಶಿಸಿದೆ. ಈ ಮೂಲಕ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಇನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ವಕೀಲ, ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ಆಗಿರುವ ತುಷಾರ್ ಮೆಹ್ತಾ ಅವರು ರಾಜ್ಯಪಾಲರ ಅನುಮತಿಗೆ ತಡೆಯಾಜ್ಞೆ ನೀಡದಂತೆ ವಾದ ಮಂಡಿಸಿದರು.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ವಿರುದ್ಧ ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಮಂಗಳೂರಿನಲ್ಲಿ ಕಾಂಗ್ರೆಸ್ MLC ಐವನ್ ಡಿಸೋಜಾ ನೇತೃತ್ವದಲ್ಲಿ ನಡೆದ ಪ್ರತಿಭಟನೆ ವೇಳೆ, ರಾಜ್ಯಪಾಲರು ಕೂಡಲೇ ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ಬಾಂಗ್ಲಾದೇಶದ ಹಿಂದಿನ ಪ್ರಧಾನಿ ಶೇಖ್ ಹಸೀನಾ ಅವರಿಗೆ ಆದ ಗತಿಯೇ ನಿಮಗೂ ಆಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು. ಈ ಹೇಳಿಕೆ ಹಿನ್ನೆಲೆಯಲ್ಲಿ ಐವನ್ ಡಿಸೋಜಾ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪೊಲೀಸರಿಗೆ ಒತ್ತಾಯಿಸಿದೆ.
ಮುಡಾ ಅಕ್ರಮ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ವಿರೋಧಿಸಿ ಸುದ್ದಿಗೋಷ್ಠಿ ನಡೆಸುವ ವೇಳೆ ಹೃದಯಾಘಾತವಾಗಿ ಕೋಲಾರ ಜಿಲ್ಲೆ ಕುರುಬರ ಸಂಘದ ಅಧ್ಯಕ್ಷ ಸಿ.ಕೆ. ರವಿಚಂದ್ರನ್ ಸಾವನ್ನಪ್ಪಿದ್ದಾರೆ. ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಯುತ್ತಿದ್ದ ವೇಳೆ ರವಿಚಂದ್ರನ್ ಕುಸಿದುಬಿದ್ದಿದ್ದರು. ಕೂಡಲೇ ಅವರನ್ನು ಆಂಬುಲೆನ್ಸ್‌ನಲ್ಲಿ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆ ತಲುಪುವ ಮುನ್ನವೇ ಮೃತಪಟ್ಟಿದ್ದಾರೆ. ಮತ್ತೊಂದೆಡೆ ಬಾಗಲಕೋಟೆಯ ಜಿಲ್ಲಾಡಳಿತ ಭವನದ ಮುಂದೆ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿತ್ತು. ಈ ವೇಳೆ ಸಿದ್ದರಾಮಯ್ಯ ಬೆಂಬಲಿಗನೊಬ್ಬ ಪೆಟ್ರೋಲ್ ಕ್ಯಾನ್ ತೆಗೆದುಕೊಂಡು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದನು. ಈ ವೇಳೆ ಸಮೀಪದಲ್ಲೇ ಇದ್ದ ಮತ್ತೊಬ್ಬ ಪ್ರತಿಭಟನಾಕಾರನಿಗೆ ಬೆಂಕಿ ತಲುಗಿ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳಗಳನ್ನು ದ್ಯಾವಪ್ಪ ಮಾಗಿ ಹಾಗೂ ಹನುಮಂತ್ ಎಂದು ಗುರುತಿಸಲಾಗಿದೆ.
ಬೆಂಗಳೂರಿನಲ್ಲಿ ಆಗಸ್ಟ್ 18ರಂದು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 24 ವರ್ಷದ ಕೊರಿಯೋಗ್ರಾಫರ್ ನನ್ನು ಬಂಧಿಸಲಾಗಿದೆ. ಆರೋಪಿ 2003ರಿಂದ HSR ಲೇಔಟ್ ನಲ್ಲಿ ನೆಲೆಸಿದ್ದ ತಮಿಳುನಾಡು ಮೂಲದ ಮುಕೇಶ್ವರನ್ ಎಂದು ತಿಳಿದುಬಂದಿದೆ. ಆರೋಪಿಯನ್ನು ವಶಕ್ಕೆ ಪಡೆದಿದ್ದು ತೀವ್ರ ವಿಚಾರಣೆ ನಡೆಸುತ್ತಿದ್ದೇವೆ ಎಂದು ಡಿಸಿಪಿ ಸಾರಾ ಫಾತಿಮಾ ತಿಳಿಸಿದ್ದಾರೆ. ಮತ್ತೊಂದೆಡೆ ಬೆಂಗಳೂರಿನ ಜ್ಞಾನಭಾರತಿಯ ಅಮ್ಮ ಆಶ್ರಮದ ಮುಂಭಾಗದ ಪಿಜಿಯಲ್ಲಿ ಕಳೆದ ರಾತ್ರಿ 8 ಗಂಟೆ ಸುಮಾರಿಗೆ ವಿದ್ಯಾರ್ಥಿಗಳು ಊಟ ಮಾಡುವಾಗ ಇಲಿ ಪಾಷಾಣ ಸಿಂಪಡಿಸಿದ್ದರ ಪರಿಣಾಮ ಬೆಂಗಳೂರಿನ ಆದರ್ಶ ನರ್ಸಿಂಗ್ ಕಾಲೇಜಿನ 19 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಮೂವರ ಸ್ಥಿತಿ ಗಂಬೀರವಾಗಿದ್ದು, ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ನಮ್ಮ ಮೆಟ್ರೋದ ಮೆಜೆಸ್ಟಿಕ್ ನಿಲ್ದಾಣದಲ್ಲಿ ಇಬ್ಬರು ಅಂಧ ಪ್ರಯಾಣಿಕರು ಹಳಿ ಮೇಲೆ ಬಿದ್ದ ಘಟನೆ ನಡೆದಿದೆ. ಈ ಕುರಿತು BMRCL ಮಾಹಿತಿ ನೀಡಿದೆ. ಇಂದು ಮಧ್ಯಾಹ್ನ ಗಂಟೆ 1.13ರ ಸುಮಾರಿಗೆ ಹಸಿರು ಮಾರ್ಗದ ಮೆಜೆಸ್ಟಿಕ್ ನಲ್ಲಿ ಜಯನಗರದಿಂದ ಅತ್ತಿಗುಪ್ಪೆಗೆ ತೆರಳುತ್ತಿದ್ದ ಇಬ್ಬರು ರೈಲು ಮಾರ್ಗ ಬದಲಾವಣೆ ವೇಳೆ ಆಸ್ಮಿಕವಾಗಿ ಹಳಿ ಮೇಲೆ ಬಿದ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೂಡಲೇ ಎಚ್ಚೆತ್ತ ಮೆಟ್ರೋ ಭದ್ರತಾ ಸಿಬ್ಬಂದಿ ತುರ್ತು ಟ್ರಿಪ್ ಸಿಸ್ಟಂ ಕಾರ್ಯಾಚರಣೆ ನಡೆಸಿ ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಸದ್ಯ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ಈ ಘಟನೆಯಿಂದ ಕೆಲ ಕಾಲ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿತ್ತು.