ನೀರಿನ ಬಿಲ್ ಏರಿಕೆ ಮಾಡುವುದಾಗಿ ಶಾಕ್ ನೀಡಿದ್ದ ರಾಜ್ಯ ಸರ್ಕಾರ, ಜನತೆ ಸುಧಾರಿಸಿಕೊಳ್ಳುವ ಮೊದಲೇ ಇದೀಗ ಮತ್ತೊಂದು ಶಾಕ್ ನೀಡಿದೆ. ಕೆಎಸ್ಆರ್'ಟಿಸಿ ಬಸ್ ಟಿಕೆಟ್ ದರ ಏರಿಕೆ ಮಾಡುವ ಸುಳಿವನ್ನು ಸಾರಿಗೆ ಸಚಿವ ರಾಮಲಿಂಗಾ ರಡ್ಡಿಯವರು ಶನಿವಾರ ನೀಡಿದ್ದಾರೆ. ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ (KERC) ಮಾದರಿಯಲ್ಲೇ ಸಾರಿಗೆ ನಿಗಮಗಳಲ್ಲಿ ಪ್ರಯಾಣ ದರ ಏರಿಕೆ ನಿರ್ಧಾರಗಳನ್ನು ಕೈಗೊಳ್ಳಲು ಪ್ರತ್ಯೇಕ ನಿಯಂತ್ರಣ ಆಯೋಗ (KTRC) ರಚನೆಗೆ ಸರ್ಕಾರ ಮುಂದಾಗಿದೆ ಎಂಬ ವರದಿಯನ್ನು ಉಲ್ಲೇಖಿಸಿ ವಿಧಾನಸಭೆ ವಿರೋಧ ಪಕ್ಷದ ನಾಯಕರ ಆರ್.ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಶೋಕ್ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿರುವ ರಾಮಲಿಂಗಾರೆಡ್ಡಿ ಅಶೋಕ್ ರವರೇ, ನೀವು ಸಾರಿಗೆ ಸಚಿವರಾಗಿದ್ದವರು. ಸಾರಿಗೆ ಸಂಸ್ಥೆಗಳ ಬಗ್ಗೆ ತಿಳಿದೂ ಕೂಡ ಈ ರೀತಿ ಮಾತನಾಡುತ್ತಿದ್ದಾರಾ ಎಂದರೆ ಆಶ್ಚರ್ಯವಾಗುತ್ತಿದೆ. 2013 ರಲ್ಲಿ ತಾವು ಸಾರಿಗೆ ಸಚಿವರಾಗಿದ್ದಾಗ ಬಸ್ ಪ್ರಯಾಣ ದರ ಶೇ.10.5 ಏರಿಕೆ ಮಾಡಿರುವುದು ಮರೆತುಬಿಟ್ಟಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.
ಮದ್ಯದಲ್ಲಿ ಮಾದಕ ವಸ್ತು ನೀಡಿ 21 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆಸಲಾಗಿದ್ದು, ಆರೋಪಿ ಅಲ್ತಾಫ್ ಮತ್ತು ಆತನ ಸ್ಮೇಹಿತ ರಿಚರ್ಡ್ ಕರ್ಡೋಜ ಎಂಬುವರನ್ನು ಬಂಧಿಸಲಾಗಿದೆ. ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂತ್ರಸ್ತ ಯುವತಿಗೆ ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದ ಅಲ್ತಾಫ್, ಯುವತಿಯನ್ನು ಪುಸಲಾಯಿಸಿ ಸುತ್ತಾಡಲು ಕರೆದುಕೊಂಡು ಹೋಗಿ ಬಿಯರ್‌ನಲ್ಲಿ ಮಾದಕ ವಸ್ತು ಬೆರೆಸಿ ಅತ್ಯಾಚಾರವೆಸಗಿದ್ದಾನೆ. ಈ ಕೃತ್ಯಕ್ಕೆ ಆತನ ಸ್ನೇಹಿತರೂ ನೆರವು ನೀಡಿದ್ದು, ಸಾಮೂಹಿಕ ಅತ್ಯಾಚಾರ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕೃತ್ಯ ನಡೆಸಿದ ಬಳಿಕ ಆಕೆಯನ್ನು ಮನೆ ಸಮೀಪ ಬಿಟ್ಟು ಹೋಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಕಾರ್ಕಳ ಠಾಣೆಯ ಸಮೀಪ ಹಿಂದೂ ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಸೇರಿದ್ದರು. ಸಂತ್ರಸ್ತ ಯುವತಿಯ ಹೇಳಿಕೆ ಮತ್ತು ವೈದ್ಯಕೀಯ ವರದಿ ಆಧರಿಸಿ ಪೊಲೀಸರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.
ಧರ್ಮ-ಜಾತಿ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ ಎಂದು ಸಿ.ಎಂ.ಸಿದ್ದರಾಮಯ್ಯ ಹೇಳಿದ್ದಾರೆ. ಗಾಂಧಿ ಸ್ಮಾರಕ ನಿಧಿಯ 75ನೇ ವರ್ಷದ ಸಂಸ್ಮರಣೆಗಾಗಿ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ "21ನೇ ಶತಮಾನಕ್ಕೆ ಮಹಾತ್ಮ ಗಾಂಧೀಜಿ" ಅಂತಾರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ, ಜಾತಿ ವ್ಯವಸ್ಥೆ ಕಾರಣದಿಂದ ಬಹು ಜನರು ಶಿಕ್ಷಣದಿಂದ ವಂಚಿತರಾದರು. ಈ ಕಾರಣಕ್ಕೆ ಅಸಮಾನತೆ ಹೆಚ್ಚಾಯಿತು. ಈಗ ವಿದ್ಯಾವಂತರೇ ಹೆಚ್ಚೆಚ್ಚು ಜಾತಿವಾದಿಗಳಾಗುತ್ತಿರುವುದು ದುರಂತ. ಜಾತಿ ಅಸಮಾನತೆಯ ಪೋಷಕರೇ ಮಹಾತ್ಮಗಾಂಧಿಯವರನ್ನು ಕೊಂದರು ಎಂದು ಸಿಎಂ ಬೇಸರ ವ್ಯಕ್ತಪಡಿಸಿದ್ದಾರೆ. ಇಡೀ ವಿಶ್ವವೇ ಪರಸ್ಪರ ಪ್ರೀತಿಸುವ ಗುಣವನ್ನು ರೂಢಿಸಿಕೊಂಡರೆ ಇಡೀ ಸಮಾಜ ನೆಮ್ಮದಿಯಿಂದ ಇರಬಹುದು ಎಂದು ಸಿಎಂ ಇದೇ ವೇಳೆ ಹೇಳಿದರು.
ಹುಬ್ಬಳ್ಳಿಯ ಹೆಬ್ಬಸೂರ ಗ್ರಾಮದ ಬಳಿ ರಸ್ತೆ ಅಪಘಾತ ಸಂಭವಿಸಿದ್ದು, ಕೊಪ್ಪಳ ಜಿಲ್ಲೆಯ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಜಾಫರ್ ಎಂಬುವವರಿಗೆ ಪಾರ್ಶ್ವವಾಯು ಸಂಬಂಧಿತ ಸಮಸ್ಯೆಗೆ ಚಿಕಿತ್ಸೆ ಕೊಡಿಸಲು ಒಂದೇ ಕುಟುಂಬದ ಆರು ಜನ ಓಮಿನಿ ವಾಹನದಲ್ಲಿ ಎರಡು ದಿನಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಅಲಗಾಕ್ಕೆ ತೆರಳಿದ್ದರು. ವಾಪಸ್ಸಾಗುವಾಗ ಓಮಿನಿ ಮತ್ತು ಲಾರಿ ನಡುವೆ ಈ ಅಪಘಾತ ನಡೆದಿದಿದೆ. ಸ್ಥಳದಲ್ಲಿಯೇ ಮೂವರು ಮೃತಪಟ್ಟಿದ್ದರೆ, ಇನ್ನು ಮೂವರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ತಮ್ಮ ದೆಹಲಿ ಭೇಟಿಯ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿನ ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಮತ್ತು ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಮಂಜೂರು ಮಾಡಿರುವ ಬಗ್ಗೆ ಕಾಂಗ್ರೆಸ್ ಹೈಕಮಾಂಡ್‌ಗೆ ವಿವರಿಸಲಾಗಿದೆ ಎಂದು ಹೇಳಿದ್ದಾರೆ. ರಾಜ್ಯಪಾಲರ ನಡೆಯನ್ನು "ಸಂವಿಧಾನ ವಿರೋಧಿ ಮತ್ತು ಕಾನೂನುಬಾಹಿರ" ಎಂದಿರುವ ಅವರು, ರಾಜ್ಯಪಾಲರು ಕೆಲವು ವಿಧೇಯಕಗಳನ್ನು ಸರ್ಕಾರಕ್ಕೆ ವಾಪಸ್ ಕಳುಹಿಸುವ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮವನ್ನು ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್ದೀಪ್ ಸಿಂಗ್ ಸುರ್ಜೆವಾಲ ಹಲವು ಹಿರಿಯ ಸಚಿವರು ಶುಕ್ರವಾರ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು.