ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಆರೋಪಿ ದರ್ಶನ್ಗೆ ರಾಜಾತಿಥ್ಯ ನೀಡುತ್ತಿರುವ ವಿಚಾರ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದ್ದು, ಜೈಲಿನ ಅವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ, ಇದಕ್ಕೆ ಕಾರಣರಾದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಹಾಗೂ ದರ್ಶನ್ ಮತ್ತು ಆತನ ಸಹಚರರನ್ನು ರಾಜ್ಯದ ವಿವಿಧ ಜೈಲುಗಳಿಗೆ ಸ್ಥಳಾಂತರಿಸುವಂತೆ ಸೂಚನೆ ನೀಡಿದ್ದರು. ಹೀಗಾಗಿ ದರ್ಶನ್ ಅವರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರ ಮಾಡಲಾಗುತ್ತದೆ ಎನ್ನಲಾಗಿದೆ. ಕಾರಾಗೃಹಕ್ಕೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಸಿಎಂ ಸೂಚನೆ ಹಿನ್ನೆಲೆಯಲ್ಲಿ ಜೈಲಿಗೆ ಭೇಟಿ ನೀಡಿದ ಡಿಜಿಪಿ ಮಾಲಿನಿ ಕೃಷ್ಣ ಮೂರ್ತಿ ಅವರು ಇಬ್ಬರು ಜೈಲರ್ಗಳು ಸೇರಿದಂತೆ ಒಂಬತ್ತು ಸಿಬ್ಬಂದಿಯನ್ನು ಅಮಾನತು ಮಾಡಿರುವುದಾಗಿ ತಿಳಿಸಿದ್ದಾರೆ. ಈಮಧ್ಯೆ, ವಿಚಾರ ಬಹಿರಂಗವಾಗುತ್ತಿದ್ದಂತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಗೃಹಸಚಿವ ಡಾ. ಪರಮೇಶ್ವರ್ ಭೇಟಿ ನೀಡಿದರು. ಜೈಲಿನಲ್ಲಿ ಅಕ್ರಮ ನಡೆದಿರೋದು ನಮಗೆ ತಿಳಿದಿದೆ. ಅಧೀಕ್ಷಕರಾದ ಮಲ್ಲಿಕಾರ್ಜುನಸ್ವಾಮಿ, ಶೇಷಮೂರ್ತಿಯಿಂದ ಲೋಪವಾಗಿದೆ. ಈ ಇಬ್ಬರು ಜೈಲು ಅಧಿಕಾರಿಗಳನ್ನೂ ಸಹ ಅಮಾನತು ಮಾಡಿದ್ದೇವೆ ಎಂದು ತಿಳಿಸಿದರು.
ಕೊಲೆ ಪ್ರಕರಣದಂತಹ ಗಂಭೀರ ಆರೋಪ ಹೊತ್ತು ಜೈಲು ಸೇರಿರುವ ನಟನಿಗೆ ಹಲವು ಬಗೆಯ ಸೌಲಭ್ಯಗಳನ್ನು ನೀಡಲಾಗಿದೆ. ಆ ಮೂಲಕ ಕಾನೂನಿನ ಉಲ್ಲಂಘನೆ ಮಾಡಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ 3 ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ಈ ಮೂರೂ ಎಫ್ಐಆರ್ಗಳಲ್ಲಿ ದರ್ಶನ್ ಹೆಸರು ಪ್ರಸ್ತಾಪ ಆಗಿದೆ. ಜೈಲು ಅಧೀಕ್ಷಕರ ದೂರು ಆಧರಿಸಿ ಮೂರು ಎಫ್ಐಆರ್ ದಾಖಲು ಮಾಡಲಾಗಿದೆ. ಕೊಲೆ ಆರೋಪಿಗಳಾದ ದರ್ಶನ್, ವಿಲ್ಸನ್ ಗಾರ್ಡನ್ ನಾಗ, ಕುಳ್ಳ ಸೀನ ದರ್ಶನ್ ಆಪ್ತ ನಾಗರಾಜ್ ವಿರುದ್ಧ ಒಂದು ಎಫ್ಐಆರ್ ಆಗಿದೆ. ಆರೋಪಿ ದರ್ಶನ್ಗೆ ಸಿಗರೇಟ್ ಕೊಟ್ಟಿದ್ದಕ್ಕೆ ಮತ್ತೊಂದು ಎಫ್ಐಆರ್ ದಾಖಲಾಗಿದೆ. ವಿಡಿಯೋ ಮಾಡಿ ವೈರಲ್ ಮಾಡಿದ್ದಕ್ಕೆ 3ನೇ ಎಫ್ಐಆರ್ ದಾಖಲಾಗಿದೆ.
ಮುಡಾ ಹಗರಣದಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ 'ವೈಟ್ನರ್' ಪ್ರಸಂಗಕ್ಕೆ ಸಂಬಂಧಿಸಿದಂತೆ ಬಿಜೆಪಿ ಪಕ್ಷಕ್ಕೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ವೈಟ್ನರ್ ಹಿಂದಿರುವ ಅಕ್ಷರಗಳೇನು ಎಂಬುದನ್ನು ಸ್ಪಷ್ಟವಾಗಿ ನೋಡಿ ಎಂದು ಹೇಳಿದ್ದಾರೆ. ನನ್ನ ಪತ್ನಿ ಬದಲೀ ಭೂಮಿ ಕೇಳಿದ್ದು, ತನ್ನದೇ ಜಮೀನನ್ನು ಮುಡಾ ವಶಕ್ಕೆ ಪಡೆದು ಅಭಿವೃದ್ಧಿಪಡಿಸಲಾದ ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ ಪ್ರಾಧಿಕಾರವು ಅಭಿವೃದ್ಧಿಪಡಿಸಿದ ಸಮಾನಾಂತರ ಬಡಾವಣೆಯಲ್ಲಿ. “ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ” ಎಂಬ ನಾಲ್ಕೈದು ಪದಗಳಿಗೆ ವೈಟ್ನರ್ ಹಾಕಲಾಗಿದೆ ಎಂದು ಸ್ಪಷ್ಟನೆ ನೀಡಿದರು. ಇದಕ್ಕೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದು, ಇದನ್ನು ಯಾಕೆ ಕೋರ್ಟ್ಗೆ ಕೊಟ್ಟಿಲ್ಲ!? ನೀವು ನ್ಯಾಯಾಲಯವನ್ನೂ ದಾರಿ ತಪ್ಪಿಸುತ್ತಿದ್ದೀರಿ ಎಂದು ಕಿಡಿಕಾರಿದ್ದಾರೆ. ಇದರ ಮೂಲ ದಾಖಲೆ ಮೂಡಾದಲ್ಲಿದೆ. ನಿಮ್ಮ ಬಳಿಗೆ ಹೇಗೆ ಬಂತು? ನಿಮಗೆ ಈ ಮೂಲ ದಾಖಲೆ ತಂದು ಕೊಟ್ಟ ಮಹಾಶಯರು ಯಾರು? ಇಷ್ಟಕ್ಕೂ ಈ ಮೂಲ ದಾಖಲೆ ಮೂಡಾದಲ್ಲಿದೆಯಾ? ಅಥವಾ ನಿಮ್ಮ ಮನೆಯಲ್ಲಿದೆಯಾ? ಎಂದು ಪ್ರಶ್ನಿಸಿದ್ದಾರೆ.
ಮುಡಾ ಹಗರಣ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಂದಿಟ್ಟಿದ್ದು, ಇದರ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ವಿರುದ್ಧ ಭೂ ಹಗರಣ ಆರೋಪ ಕೇಳಿಬಂದಿದೆ. ಮಲ್ಲಿಕಾರ್ಜುನ ಖರ್ಗೆ ಪುತ್ರ ರಾಹುಲ್ ಖರ್ಗೆ ಅವರ ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್ಗೆ ಏರೋಸ್ಪೇಸ್ ಪಾರ್ಕ್ನಲ್ಲಿನ 45.94 ಎಕರೆ ಪೈಕಿ ಐದು ಎಕರೆ ಜಮೀನನ್ನು ಯಾವ ಆಧಾರದ ಮೇಲೆ ಟ್ರಸ್ಟ್ಗೆ ಮಂಜೂರು ಮಾಡಿದ್ದೀರಿ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಪ್ರಶ್ನಿಸಿದ್ದರು. ಈ ಆರೋಪಕ್ಕೆ ಪ್ರತಿಕ್ರಿಯಿಸಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್, ಏರೋಸ್ಪೇಸ್ ಪಾರ್ಕ್ನಲ್ಲಿನ ಸಿಎ ನಿವೇಶನವನ್ನು ಕಾನೂನಿನ ಪ್ರಕಾರವೇ ನಿಗದಿತ ಬೆಲೆಗೆ ಕೊಡಲಾಗಿದೆ. ಅಲ್ಲಿ ಸಂಶೋಧನೆ ಮತ್ತು ತರಬೇತಿ ಕೇಂದ್ರ ಸ್ಥಾಪಿಸುವುದಾಗಿ ಹೇಳಿದ್ದಾರೆ. ಇದರಲ್ಲಿ ಯಾವ ನಿಯಮವೂ ಉಲ್ಲಂಘನೆ ಆಗಿಲ್ಲ ಎಂದು ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಕಾಡಾನೆ ದಾಳಿಗೆ 41 ವರ್ಷದ ಕೃಷಿ ಕಾರ್ಮಿಕ ಗದಗದ ಲಕ್ಷ್ಮೇಶ್ವರ ಮೂಲದ ಹನುಮಂತಪ್ಪ ಮೃತಪಟ್ಟಿದ್ದಾರೆ. ಪುರದಾಳ್ ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಶ್ಫಾಕ್ ಅಹ್ಮದ್ ಖಾನ್ ಒಡೆತನದ ಎಸ್ಟೇಟ್ನಲ್ಲಿ ಕೆಲಸ ಮುಗಿಸಿ ಆಲದೇವರ ಹೊಸೂರಿನ ಮನೆಗೆ ಹನುಮಂತಪ್ಪ ವಾಪಸಾಗುತ್ತಿದ್ದಾಗ ಆನೆ ದಾಳಿ ಮಾಡಿತ್ತು.