ಬೆಂಗಳೂರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಕೋರಿ ಕೋರ್ಟ್ ಮೆಟ್ಟಿಲೇರಿದ್ದು ಈ ಬಗ್ಗೆ ರಾಜ್ಯ ಕಾಂಗ್ರೆಸ್ ಅನುಮಾನ ವ್ಯಕ್ತಪಡಿಸಿದೆ. ತಮ್ಮ ವಿರುದ್ಧ ಯಾವುದೇ ರೀತಿಯ ಮಾನಹಾನಿಕರ ಹೇಳಿಕೆ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರುವಂತೆ ಕೋರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.
ನಗರದ ಸಿಟಿ ಸಿವಿಲ್ ಕೋರ್ಟ್ನಲ್ಲಿ ಸಂಸದ ಬಸವರಾಜ್ ಬೊಮ್ಮಾಯಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಾಣಿ.ಎ. ಶೆಟ್ಟಿ ಅವರಿದ್ದ ಏಕಸದಸ್ಯ ಪೀಠವು ಯಾವುದೇ ಮಾನಹಾನಿಕರ ಸುದ್ದಿ ಪ್ರಸಾರ ಮಾಡದಂತೆ ತಡೆ ನೀಡಿ ಆದೇಶ ಹೊರಡಿಸಿದೆ.
ಈ ವಿಚಾರವಾಗಿ ಟ್ವೀಟ್ ಮೂಲಕ ಬೊಮ್ಮಾಯಿ ಅವರಿಗೆ ಟಾಂಗ್ ನೀಡಿರುವ ರಾಜ್ಯ ಕಾಂಗ್ರೆಸ್, ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಕೋರ್ಟಿನಿಂದ ತಡೆಯಾಜ್ಞೆ ತರುವುದಕ್ಕೆ ಕಾರಣ ಏನು? ಯಾರು ಕಾರಣ? ಎಂದು ಪ್ರಶ್ನಿಸಿದ್ದಾರೆ. ಈ ತಡೆಯಾಜ್ಞೆಗೆ ಕೆ.ಸುಧಾಕರ್ ಕಾರಣವೇ ಅಥವಾ ಸ್ಯಾಂಟ್ರೋ ರವಿ ಕಾರಣವೇ? ಯಾವ ಸುದ್ದಿಗೆ ಬೊಮ್ಮಾಯಿಯವರು ಈ ಪರಿ ಬೆದರುತ್ತಿರುವುದು? ಎಂದು ಪ್ರಶ್ನೆಗಳನ್ನು ಮುಂದಿಟ್ಟಿದೆ. ಮತ್ತೊಂದೆಡೆ ಬೊಮ್ಮಾಯಿ ಅವರ ವಿರುದ್ಧ ಷಡ್ಯಂತ್ರ ನಡೆದಿದೆಯಾ ಎಂಬ ಮಾತುಗಳೂ ಕೇಳಿಬರುತ್ತಿವೆ.