ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಸೈಟು ಹಂಚಿಕೆ ಹಗರಣದಲ್ಲಿ ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈ ಕೋರ್ಟ್ ಆ.31 ಕ್ಕೆ ಮುಂದೂಡಿದೆ.
ಇಂದು ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ಸಿಎಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ಆರಂಭವಾಯಿತು. ಸಿಎಂ ಪರ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು.
ಸಿಎಂ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ನ್ಯಾಯಾಂಗ ಪರಿಶೀಲಿಸಬಹುದು. ರಾಜ್ಯಪಾಲರು ಈ ಪ್ರಕ್ರಿಯೆಯಲ್ಲಿ ವಿವೇಚನೆಯನ್ನು ಬಳಸಿಲ್ಲ ಎಂದು ಸಿಎಂ ಪರ ವಾದ ಮಂಡಿಸಿದರು. ರಾಜ್ಯಪಾಲರು ಕ್ಯಾಬಿನೆಟ್ ನಿರ್ಧಾರಕ್ಕೆ ಬದ್ಧನಲ್ಲ ಎಂದಿದ್ದಾರೆ ಎಂದು ಸಿಎಂ ಪರ ವಕೀಲರು ಹೇಳುತ್ತಿದ್ದಂತೇ ಪ್ರತಿಕ್ರಿಯೆ ನೀಡಿದ ನ್ಯಾಯಮೂರ್ತಿಗಳು ಕ್ಯಾಬಿನೆಟ್ ನಿರ್ಧಾರಕ್ಕೆ ರಾಜ್ಯಪಾಲರು ಬದ್ಧರಾಗಬೇಕಿಲ್ಲ. ಉಳಿದೆಲ್ಲ ಪ್ರಕರಣಗಳಲ್ಲಿ ರಾಜ್ಯಪಾಲರು ಕ್ಯಾಬಿನೆಟ್ ಸಲಹೆ ಪರಿಗಣಿಸಬೇಕು. ಈ ಪ್ರಕರಣದಲ್ಲಿ ಸಲಹೆ ಪರಿಗಣಿಸಬೇಕೆಂದಿಲ್ಲ ಎಂದು ಹೇಳಿದ್ದಾರೆ. ನ್ಯಾಯಮೂರ್ತಿಗಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ವಕೀಲ ಅಭಿಷೇಕ್ ಮನು ಸಿಂಘ್ವಿ ಸಂಪುಟ ನಿರ್ಣಯಕ್ಕೆ ಬದ್ಧನಾಗಿಲ್ಲ ಎಂಬ ಕಾರಣಕ್ಕೆ ತನಿಖೆಗೆ ಅನುಮತಿಸುವ ನಿಲುವು ಸರಿಯಲ್ಲ ಎಂದು ಹೇಳಿದರು. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಪ್ರಕರಣಗಳಲ್ಲಿ ರಾಜ್ಯಪಾಲರು ಪಾಸಿಕ್ಯೂಷನ್ಗೆ ಅನುಮತಿಸಿಲ್ಲ ಎಂದು ಹೈಕೋರ್ಟ್ ಗೆ ಮನವರಿಕೆ ಮಾಡಿಕೊಡುವುದಕ್ಕೆ ಸಿಂಘ್ವಿ ಯತ್ನಿಸಿದರು.
ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯೂ ಇಂದು ಹೈಕೋರ್ಟ್ ನಲ್ಲಿ ನಡೆಯಿತು.
ಸಿಬಿಐ, ಯತ್ನಾಳ್ ಸಲ್ಲಿಸಿದ್ದ ಎರಡೂ ಅರ್ಜಿಗಳು ವಿಚಾರಣೆಗೆ ಅರ್ಹವಲ್ಲ ಎಂದು ಹೇಳಿರುವ ಹೈಕೋರ್ಟ್ ರಾಜ್ಯ ಸರ್ಕಾರ- ಸಿಬಿಐ ನಡುವಿನ ವಿವಾದ ಸುಪ್ರೀಂ ಕೋರ್ಟ್ ನಲ್ಲಿ ಬಗೆಹರಿಯುವುದು ಸೂಕ್ತ ಎಂದು ಹೇಳಿದೆ.
ರಾಜ್ಯದ ಕ್ರಮವನ್ನು ಸಮರ್ಥಿಸಿಕೊಂಡ ಅಡ್ವೊಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ ಅವರು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದರು, ಸುಪ್ರೀಂ ಕೋರ್ಟ್‌ನ ತೀರ್ಪಿನ ಪ್ರಕಾರ ಮೂರನೇ ವ್ಯಕ್ತಿ ಕ್ರಿಮಿನಲ್ ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಗೆ ಮನವಿ ಮಾಡಿದರು.