ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ನಂದಿನಿಲೇಔಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಸಿಐಡಿಯ ಎಸ್ಐಟಿಗೆ ವರ್ಗಾವಣೆಯಾಗಿದೆ.
ಮುನಿರತ್ನ ಅವರ ಮೇಲಿನ ಎಲ್ಲಾ ಪ್ರಕರಣಗಳ ತನಿಖೆಗಾಗಿ ಸರ್ಕಾರ ಎಸ್ಐಟಿ ರಚನೆ ಮಾಡಿದ್ದು, ಈ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಅಲ್ಲಿಗೆ ವರ್ಗಾವಣೆ ಮಾಡಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ತನ್ನ ಕುಟುಂಬದವರನ್ನು ಹನಿಟ್ರಾಪ್ ಮಾಡಲು ಯತ್ನಿಸಿದರಲ್ಲದೆ ಹತ್ಯೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಬಿಬಿಎಂಪಿಯ ಮಾಜಿ ಸದಸ್ಯೆ ಮಂಜುಳ ಅವರ ಪತಿ ಲಗ್ಗೆಯ ನಾರಾಯಣಸ್ವಾಮಿ ಅವರು ನಂದಿನಿ ಲೇಔಟ್ ಪೊಲೀಸ್ ಠಾಣೆಗೆ ಶಾಸಕ ಮುನಿರತ್ನ ವಿರುದ್ಧ ದೂರು ನೀಡಿದ್ದಾರೆ.
ಶಾಸಕ ಮುನಿರತ್ನ ಮತ್ತು ಅವರ ಬೆಂಬಲಿಗರು ಕಳೆದ 8 ವರ್ಷಗಳಿಂದ ನನ್ನ ಮತ್ತು ಪತ್ನಿಯ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ಬಿಜೆಪಿ ಶಾಸಕ ಮುನಿರತ್ನ ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ. ಸಿಐಡಿಯ ವಿಶೇಷ ತನಿಖಾ ತಂಡ (ಎಸ್‌ಐಟಿ) ಈಗಾಗಲೇ ಮುನಿರತ್ನ ವಿರುದ್ಧದ ಅತ್ಯಾಚಾರ ಆರೋಪ ಸೇರಿದಂತೆ ಮೂರು ಪ್ರಕರಣಗಳ ತನಿಖೆ ನಡೆಸುತ್ತಿದೆ. ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ಮತ್ತು ರಾಮನಗರದ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ.
ಮುನಿರತ್ನ ಅವರ ವಿರುದ್ಧ ಜಾತಿ ನಿಂದನೆ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಿರುವ ಎಸ್ಐಟಿ, ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಶನಿವಾರ 590 ಪುಟಗಳ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದೆ. ಚಾರ್ಜ್‌ಶೀಟ್'ನಲ್ಲಿ ವೈರಲ್ ಆಡಿಯೊದಲ್ಲಿರುವ ಆಡಿಯೊ ಮಾದರಿಗಳು ಶಾಸಕರ ಧ್ವನಿಗೆ ಹೊಂದಿಕೆಯಾಗಿರುವುದನ್ನು ಖಚಿತಪಡಿಸಿದೆ.