ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯಪಾಲ ಎಸ್.ಎಂ.ಕೃಷ್ಣ ಅವರು ದೀರ್ಘಕಾಲದ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗಿನ ಜಾವ 2.30ಕ್ಕೆ ತಮ್ಮ ನಿವಾಸದಲ್ಲಿ ನಿಧನರಾದರು. ಗೌರವ ಸೂಚಕವಾಗಿ ರಾಜ್ಯ ಸರ್ಕಾರ ಮೂರು ದಿನಗಳ ಶೋಕಾಚರಣೆ ಮತ್ತು ಬುಧವಾರ ಸರ್ಕಾರಿ ರಜೆ ಘೋಷಿಸಿದೆ. ವಿದೇಶಾಂಗ ಸಚಿವರಾಗಿಯೂ ಸೇವೆ ಸಲ್ಲಿಸಿರುವ ಕೃಷ್ಣ ಅವರ ಅಂತ್ಯಕ್ರಿಯೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಬುಧವಾರ ಬೆಳಗ್ಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ಅಂತಿಮ ದರ್ಶನಕ್ಕೆ ಸದಾಶಿವನಗರದ ಅವರ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿದೆ. ಎಸ್ಎಂ ಕೃಷ್ಣ ಅವರ ಪಾರ್ಥಿವ ಶರೀರ ಕಂಡು ಡಿಸಿಎಂ ಡಿಕೆ ಶಿವಕುಮಾರ್ ಗದ್ಗದಿತರಾದರು. ಅಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ. ಪರಮೇಶ್ವರ್, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಮಾಜಿ ಸಂಸದೆ, ನಟಿ ರಮ್ಯಾ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಸುಮಲತಾ ಸೇರಿದಂತೆ ರಾಜಕೀಯ ಮುಖಂಡರು ಹಾಗೂ ಸಮಾಜದ ಎಲ್ಲಾ ವರ್ಗದ ಜನರು ಅಂತಿಮ ದರ್ಶನ ಪಡೆದರು.
ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಎಸ್ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಇಂದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಬೆಳಗ್ಗೆ ಸದನ ಸೇರಿದಾಗ ಸ್ಪೀಕರ್ ಯು.ಟಿ ಖಾದರ್ ಸಂತಾಪ ಸೂಚನೆ ನಿರ್ಣಯ ಮಂಡಿಸಿದರು. ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಕನಸು ಕಂಡಿದ್ದ ಕೃಷ್ಣ ಅವರು ಭೂ ದಾಖಲೆಯನ್ನು ಡಿಜಿಟಲೀಕರಣಗೊಳಿಸುವ, ಸರ್ಕಾರಿ ಮಕ್ಕಳಿಗೆ ಬಿಸಿಯೂಟ ಯೋಜನೆ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಬೆಂಗಳೂರು-ಮೈಸೂರು ಹೆದ್ದಾರಿ ಯೋಜನೆ ಸೇರಿದಂತೆ ಹತ್ತು ಹಲವು ಅಭಿವೃದ್ಧಿ ಯೋಜನೆ ಜಾರಿಗೆ ತಂದಿದ್ದರು. ಅಲ್ಲದೆ ರಾಜ್ಯದಲ್ಲಿ ಐಟಿಬಿಟಿ ಕ್ರಾಂತಿ ಮಾಡಿದ್ದರು. ಬೆಂಗಳೂರನ್ನು ಸಿಲಿಕಾನ್ ಸಿಟಿಯಾಗಿಸಿ ಸಿಂಗಾಪುರ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಮಹತ್ವಾಕಾಂಕ್ಷೆ ಹೊಂದಿದ್ದರು ಎಂದು ಖಾದರ್ ಶ್ಲಾಘಿಸಿದರು. ಇದೇ ವೇಳೆ ಶಾಸಕರು, ಪರಿಷತ್ ಸದಸ್ಯರು ಪಕ್ಷಾತೀತವಾಗಿ ತಮ್ಮ ನೆಚ್ಚಿನ ನಾಯಕನನ್ನು ಹೊಗಳಿದರು. ಇನ್ನು ಎಸ್ಎಂ ಕೃಷ್ಣ ಅವರ ಅಗಲಿಕೆಗೆ ರಾಷ್ಟ್ರಪತಿ ದ್ರೌಪತಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ರಾಜಕೀಯ ಮುಖಂಡರು, ಗಣ್ಯರು ಸಂತಾಪ ಸೂಚಿಸಿದ್ದಾರೆ.
2ಎ ಮೀಸಲಾತಿಗೆ ಆಗ್ರಹಿಸಿ ಬಸವ ಜಯ ಮೃತ್ಯುಂಜಯ ಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಲಿಂಗಾಯತ ಪಂಚಮಸಾಲಿ ಸಮುದಾಯದ ಹೋರಾಟ ಮಂಗಳವಾರ ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಲಾಠಿ ಚಾರ್ಜ್ ನಡೆಸಿದರು. ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸುವರ್ಣ ವಿಧಾನಸೌಧದ ಸುತ್ತ ಪೊಲೀಸರು ಬ್ಯಾರಿಕೇಡ್ ಗಳನ್ನು ಹಾಕಲಾಗಿತ್ತು. ಈ ಬ್ಯಾರಿಕೇಡ್ಗಳನ್ನು ತಳ್ಳಿ ಪ್ರತಿಭಟನೆಕಾರರು ಸುವರ್ಣ ಸೌಧಕ್ಕೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಮತ್ತು ಪಂಚಮಸಾಲಿ ಸಮಾಜದವರ ನಡುವೆ ತಳ್ಳಾಟ ನೂಕಾಟ ನಡೆದಿದೆ. ಇದರಿಂದಾಗಿ ಪೊಲೀಸರಿಗೆ ಹಾಗೂ ಪ್ರತಿಭಟನೆಕಾರರಿಗೆ ಗಾಯಗಳಾಗಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಜಯಮೃತ್ಯುಂಜಯ ಸ್ವಾಮಿ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಬಿಬಿಎಂಪಿ, ಬೆಸ್ಕಾಂ, ಆರೋಗ್ಯ ಇಲಾಖೆ ಸೇರಿದಂತೆ ರಾಜ್ಯದ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಇಂದು ಬೆಳಗ್ಗೆಯಿಂದಲೇ ದಾಳಿ ನಡೆಸಿದ್ದಾರೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ರಾಯಚೂರು, ಗದಗ, ಹಾಗೂ ಚಿತ್ರದುರ್ಗದಲ್ಲಿ ದಾಳಿ ನಡೆದಿದೆ. ಬೆಂಗಳೂರಿನ ಬೆಸ್ಕಾಂ ಸೂಪರಿಂಟೆಂಡೆಂಟ್ ಎಂಜಿನಿಯರ್ ಲೋಕೇಶ್ ಬಾಬು, ಬಿಬಿಎಂಪಿ ವಸಂತಪುರ ವಾರ್ಡ್ ಕಂದಾಯ ನಿರೀಕ್ಷಕ ಸುರೇಶ್ ಬಾಬು, ಯಲಹಂಕ ತೆರಿಗೆ ನಿರೀಕ್ಷಕ ಕೃಷ್ಣಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯಾಧಿಕಾರಿ ಎಂ.ಸಿ. ಸುನೀಲ್ ಕುಮಾರ್, ಚನ್ನಪಟ್ಟಣದ ಪೊಲೀಸ್ ತರಬೇತಿ ಶಾಲೆಯ ಡಿಎಫ್ ಪಿ ನಂಜುಂಡಯ್ಯ, ಗದಗ್ ನ ಇಇ ಕಚೇರಿಯ ಎಸ್ ಡಿ ಎ ಲಕ್ಷ್ಮಣ್ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.