ಬೆಳಗಾವಿ: 2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಸಮುದಾಯದ ಹೋರಾಟ ಮಂಗಳವಾರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಲಾಠಿ ಚಾರ್ಜ್ ನಡೆಸಿದರು.
ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸುವರ್ಣ ವಿಧಾನಸೌಧದ ಸುತ್ತ ಪೊಲೀಸರು ಬ್ಯಾರಿಕೇಡ್ ಗಳನ್ನು ಹಾಕಿದ್ದರು. ಪ್ರತಿಭಟನೆಕಾರರು ಬ್ಯಾರಿಕೇಡ್ಗಳನ್ನು ತಳ್ಳಿ ಸುವರ್ಣ ಸೌಧಕ್ಕೆ ನುಗ್ಗಲು ಯತ್ನಿಸಿದರು. ಇದರಿಂದ ಸುವರ್ಣಸೌಧ ಮುಂಭಾಗ ಭಾರೀ ಹೈಡ್ರಾಮಾ ಸೃಷ್ಟಿಯಾಗಿದ್ದು, ಪೊಲೀಸರಿಗೆ ಹಾಗೂ ಪ್ರತಿಭಟನೆಕಾರರಿಗೆ ಗಾಯಗಳಾಗಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.
ಬಸವ ಜಯ ಮೃತ್ಯುಂಜಯ ಸ್ವಾಮಿ ನೇತೃತ್ವದಲ್ಲಿ ಪಂಚಮಸಾಲಿ ಸಮಾಜ 2ಎ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದು, ಇಂದು ಟ್ರ್ಯಾಕ್ಟರ್ ರ್ಯಾಲಿಯ ಮೂಲಕ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಮತ್ತು ಪಂಚಮಸಾಲಿ ಸಮಾಜದವರ ನಡುವೆ ತಳ್ಳಾಟ ನೂಕಾಟ ನಡೆದಿದೆ.
ಆಕ್ರೋಶಗೊಂಡ ಪ್ರತಿಭಟನಾಕಾರರು ಸರ್ಕಾರಿ ವಾಹನಗಳು, ಶಾಸಕರು ಮತ್ತು ಎಂಎಲ್‌ಸಿಗಳಿಗೆ ಸೇರಿದ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದರು. ಕಲ್ಲು ತೂರಾಟದಲ್ಲಿ ಇಪ್ಪತ್ತಕ್ಕೂ ಅಧಿಕ ಪೊಲೀಸರಿಗೆ ಗಾಯಗಳಾಗಿದ್ದರೆ, ಐವತ್ತಕ್ಕೂ ಅಧಿಕ ಹೋರಾಟಗಾರರು ಗಾಯಗೊಂಡಿದ್ದಾರೆ.
ಪರಿಸ್ಥಿತಿ ಕೈಮೀರುತ್ತಿರುವುದನ್ನು ಗಮನಿಸಿದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ) ಆರ್ ಹಿತೇಂದ್ರ ಅವರು ಲಾಠಿ ಚಾರ್ಜ್‌ಗೆ ಆದೇಶಿಸಿದ್ದಾರೆ.
ಲಾಠಿ ಚಾರ್ಜ್ ನಲ್ಲಿ ಹಲವಾರು ಪ್ರತಿಭಟನಾಕಾರರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಜಯಮೃತ್ಯುಂಜಯ ಸ್ವಾಮೀಜಿ ವಶಕ್ಕೆ
ಇನ್ನು ಈ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪರಿಸ್ಥಿತಿ ಕೈಮೀರುವ ಹಂತಕ್ಕೆ ಹೋಗಿದೆ. ಹೀಗಾಗಿ ಪ್ರತಿಭಟನೆಯ ನೇತೃತ್ವ ವಹಿಸಿರುವ ಕುಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೆಚ್ಚುವರಿ ಎಸ್ಪಿ ನಾರಾಯಣ್ ಬರಮಣಿ ಅವರು ಸ್ವಾಮೀಜಿ ಅವರನ್ನು ಇನ್ನೋವಾ ಕಾರಿನಲ್ಲಿ ಕರೆದುಕೊಂಡು ಹೋದರು.
ಇನ್ನು ರಾಜಕೀಯ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ಈರಣ್ಣ ಕಡಾಡಿ, ಅರವಿಂದ್ ಬೆಲ್ಲದ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.