ಅನುಭವ ಮಂಟಪದ ತೈಲಚಿತ್ರ ಅನಾವರಣಗೊಳಿಸಿದ ಸಿಎಂ. 
ರಾಜ್ಯ

ಅನುಭವ ಮಂಟಪದ ತೈಲ ವರ್ಣ ಚಿತ್ರ: ಸುವರ್ಣ ಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅನಾವರಣ

ಜಾತಿ ವ್ಯವಸ್ಥೆಯಿಂದ ಲಾಭ ಪಡೆಯುತ್ತಿರುವ ಪಟ್ಟ ಭದ್ರರು ಜಾತಿ ವ್ಯವಸ್ಥೆಯ ಅಸಮಾನತೆಯನ್ನು ಪೋಷಿಸುತ್ತಿದ್ದಾರೆ.

ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ವಿಶ್ವಗುರು ಬಸವಣ್ಣನವರು ಸ್ಥಾಪಿಸಿದ, ವಿಶ್ವದ ಮೊದಲ ಸಂಸತ್ತು ಎಂಬ ಖ್ಯಾತಿಯ ಅನುಭವ ಮಂಟಪದ ಬೃಹತ್ ತೈಲವರ್ಣ ಚಿತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸುವರ್ಣ ವಿಧಾನಸೌಧದ ಮೊದಲ ಮಹಡಿಯಲ್ಲಿ ಸೋಮವಾರ ಅನಾವರಣಗೊಳಿಸಿದರು.

ಈ ಸಂಬಂಧ ವಿಧಾನಸಭೆಯಲ್ಲಿ ನಡೆದ ಚರ್ಚೆಯ ವೇಳೆ ಮಾತನಾಡಿದ ಸಿದ್ದರಾಮಯ್ಯ ಅವರು, ಅನುಭವ ಮಂಟಪದ ತೈಲಚಿತ್ರದ ಅನಾವರಣ ನನ್ನ ಕೈಯಿಂದ ಆಗಿರುವುದು ನನ್ನ ಸೌಭಾಗ್ಯ. 12ನೇ ಶತಮಾನದಲ್ಲಿ ಅಸಮಾನತೆ, ಜಾತಿ ವ್ಯವಸ್ಥೆ, ಮನುಷ್ಯ ಶೋಷಣೆಯ ವ್ಯವಸ್ಥೆ ಹೋಗಲಾಡಿಸಿ, ಜಾತಿರಹಿತ ಸಮ ಸಮಾಜ ತರಬೇಕು ಎನ್ನುವ ಉದ್ದೇಶದಿಂದ ಬಸವಾದಿ ಶರಣರು ಸಾಮಾಜಿಕ ಕ್ರಾಂತಿಯನ್ನು ಮಾಡಿದರು. ಮೇಲು-ಕೀಳು ಇದ್ದರೆ, ಮನುಷ್ಯ ತಾರತಮ್ಯ ಇದ್ದರೆ ಅದು ಧರ್ಮ ಆಗಲು ಸಾಧ್ಯವಿಲ್ಲ. ದಯೆಯೇ ಧರ್ಮದ ಮೂಲ ಎಂದು ಅವಿದ್ಯಾವಂತರಿಗೂ ಅರ್ಥ ಆಗುವಂತೆ ಶರಣರು ಧರ್ಮವನ್ನು ಬೋಧಿಸಿದ್ದರು.

ಮದುವೆ ಕೂಡ ಜಾತಿ ಆಧಾರದಲ್ಲಿ ಏರ್ಪಡಿಸಲಾಗುತ್ತಿತ್ತು.‌ ವ್ಯಕ್ತಿಯ ಯೋಗ್ಯತೆಯನ್ನು ಜಾತಿ, ವರ್ಣ ವ್ಯವಸ್ಥೆ ಆಧಾರದ ಮೇಲೆ ನಿರ್ಧಾರ ಆಗುತ್ತಿತ್ತು.‌ ಪ್ರತಿಭೆ ಕೂಡ ಯೋಗ್ಯತೆ ಆಧಾರದ ಮೇಲೆ ನಿರ್ಧಾರ ಆಗದೆ ಜಾತಿ ಆಧಾರದಲ್ಲಿ ನಿರ್ಧರಿಸಲಾಗುತ್ತಿತ್ತು. ಜಾತಿ ವ್ಯವಸ್ಥೆಯಿಂದ ಲಾಭ ಪಡೆಯುತ್ತಿರುವ ಪಟ್ಟ ಭದ್ರರು ಜಾತಿ ವ್ಯವಸ್ಥೆಯ ಅಸಮಾನತೆಯನ್ನು ಪೋಷಿಸುತ್ತಿದ್ದಾರೆ.

ಹುಟ್ಟುವಾಗ ಎಲ್ಲರೂ ವಿಶ್ವ ಮಾನವರೇ ಎಂದು ಕುವೆಂಪು ಹೇಳಿದರೆ, ಕುಲ ಕುಲವೆಂದು ಬಡಿದಾಡದಿರಿ ಎಂದು ಕನಕದಾಸರು ಹೇಳಿದ್ದಾರೆ. ಇವತ್ತಿನ ವಿಧಾನಸಭೆ, ಇವತ್ತಿನ ಪಾರ್ಲಿಮೆಂಟೇ ಅವತ್ತಿನ ಅನುಭವ ಮಂಟಪ. ಅತ್ಯಂತ ಕೆಳ ಸಮುದಾಯದ ಅಲ್ಲಮಪ್ರಭು ಅವರು ಅದರ ಅಧ್ಯಕ್ಷರಾಗಿದ್ದರು. ಎಲ್ಲಾ ಜಾತಿಯ ಪ್ರತಿನಿಧಿಗಳು, ಮಹಿಳಾ ಪ್ರತಿನಿಧಿ ಶರಣ ಶರಣೆಯರೂ ಅನುಭವ ಮಂಟಪದ ಸದಸ್ಯರಾಗಿದ್ದರು.

ಬುದ್ಧನ ಕಾಲದಲ್ಲೂ ಈ ರೀತಿಯ ಸರ್ವ ಜಾತಿ , ಸರ್ವ ಧರ್ಮದ ಪ್ರತಿನಿಧಿಗಳನ್ನು ಒಳಗೊಂಡ ಮಂಟಪಗಳಿದ್ದವು ಎಂದು ಚರಿತ್ರೆಯಲ್ಲಿ ಓದಿದ್ದೇವೆ. ಹೀಗಾಗಿ ಅಂಬೇಡ್ಕರ್ ಅವರ ಮಾತು, "ಇತಿಹಾಸ ತಿಳಿಯದವರು ಇತಿಹಾಸ ಸೃಷ್ಟಿಸಲಾರರು" ಎನ್ನುವ ಮಾತನ್ನು ಸ್ಮರಿಸಬೇಕು. ಶೂದ್ರರು ಮತ್ತು ಮಹಿಳೆಯರಿಗೆ ಶಿಕ್ಷಣವನ್ನು ನಿಷೇಧಿಸಲಾಗಿತ್ತು. ಈ ನಿಷೇಧ ಬಸವಾದಿ ಶರಣರ ಕಾಲದಲ್ಲಿ ಇರಲಿಲ್ಲ. ಜಾತಿ ವ್ಯವಸ್ಥೆಗೆ ಚಲನೆ ಇಲ್ಲ. ನಮ್ಮ ಸಮಾಜ ಚಲನೆ ರಹಿತವಾಗಿದೆ ಎಂದು ರಾಮ ಮನೋಹರ ಲೋಹಿಯಾ ಅವರು ಹೇಳಿದ್ದರು. ಆರ್ಥಿಕ ಮತ್ತು ಸಾಮಾಜಿಕ ಚಲನೆ ಸಿಕ್ಕಾಗ ಮಾತ್ರ ಸಮಾಜದ ಚಲನೆ ಸಾಧ್ಯ. ಜಾತಿ ವ್ಯವಸ್ಥೆ ಬಾವಿಯೊಳಗಿನ‌ ಕಸದಂತೆ. ನೀರು ಸೇದಲು ಕೊಡ ಬಾವಿಗಿಳಿಸಿ ಕದಕಿದಾಗ ಕಸ ಪಕ್ಕಕ್ಕೆ ಸರಿಯುತ್ತದೆ. ನೀರು ಸೇದಿದ ಬಳಿಕ ಮತ್ತೆ ಕಸ ಆವರಿಸಿಕೊಳ್ಳುತ್ತದೆ. ಇದೇ ಜಾತಿ ವ್ಯವಸ್ಥೆ. 850 ವರ್ಷಗಳ ಹಿಂದೆಯೇ ಬಸವಾದಿ ಶರಣರು ಜಾತಿ ಮೀರಿದ ಸಾಮಾಜಿಕ ವ್ಯವಸ್ಥೆ ರೂಪಿಸಲು ಶ್ರಮಿಸಿದ್ದರು. ಅವರ ಶ್ರಮಕ್ಕೆ ಪ್ರತೀಕವಾದ ಅನುಭವ ಮಂಟಪದ ತೈಲಚಿತ್ರವನ್ನು ಇಂದು ಅನಾವರಣಗೊಳಿಸಿದ್ದು ಅತ್ಯಂತ ಸಂತೋಷದ ವಿಚಾರ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT