ಬೆಳಗಾವಿ: ನನ್ನ ಅನುಮೋದನೆ ಇಲ್ಲದೆ ಯಾವುದೇ ವರ್ಗಾವಣೆ ಆದೇಶ ಹೊರಡಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಾ ಉನ್ನತ ಮಟ್ಟದ ಸರ್ಕಾರಿ ಅಧಿಕಾರಿಗಳಿಗೆ ಕಟ್ಟಪ್ಪಣೆ ಹೊರಡಿಸಿದ್ದಾರೆ.
ಸಾರ್ವತ್ರಿಕ ವರ್ಗಾವಣೆ ಅವಧಿ ಮುಗಿದಿರುವುದರಿಂದ ಇನ್ನು ಮುಂದೆ ಯಾವುದೇ ಇಲಾಖೆಯಲ್ಲಿ ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಯಾವುದೇ ವರ್ಗಾವಣೆ ಮಾಡಬೇಕಾದರೆ ಮುಖ್ಯಮಂತ್ರಿಗಳ ಪೂರ್ವಾನುಮತಿ ಪಡೆಯಬೇಕು ಎಂದು ಮುಖ್ಯಮಂತ್ರಿ ಟಿಪ್ಪಣೆ ಹೊರಡಿಸಿದ್ದಾರೆ.
ಪೂರ್ವಾನುಮತಿ ಪಡೆಯದೇ ವರ್ಗಾವಣೆ ಮಾಡಿದರೆ ಸಂಬಂಧಿಸಿದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಮತ್ತು ಇಲಾಖೆ ಮುಖ್ಯಸ್ಥರನ್ನು ನೇರ ಹೊಣೆಗಾರರನ್ನಾಗಿ ಮಾಡಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಈ ನಿರ್ದೇಶನಗಳನ್ನು ಉಲ್ಲಂಘಿಸಿ, ವರ್ಗಾವಣೆಗೆ ಸಂಬಂಧಿಸಿದಂತೆ ಘಟನೋತ್ತರ ಅನುಮೋದನೆಗಾಗಿ ಇಲಾಖೆಗಳು ಪದೇ ಪದೇ ಕಡತ ಸಲ್ಲಿಸುತ್ತಿರುವುದು ಗಮನಕ್ಕೆ ಬಂದಿದೆ. ಇನ್ನು ಮುಂದೆ ಇಂತಹ ಯಾವುದೇ ವರ್ಗಾವಣೆ ಕಡತಗಳನ್ನು ಘಟನೋತ್ತರ ಅನುಮೋದನೆ ಕೋರಿ ಮಂಡಿಸಬಾರದು ಎಂದು ತಮ್ಮ ಟಿಪ್ಪಣಿಯಲ್ಲಿ ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ.