ಚಿಕ್ಕಮಗಳೂರು: ಸುವರ್ಣ ಸೌಧ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯ ಪದದಿಂದ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರ ತವರು ಜಿಲ್ಲೆ ಚಿಕ್ಕಮಗಳೂರಿನಲ್ಲಿ ನಾಳೆ ಬಂದ್ ಗೆ ಬಿಜೆಪಿ ಕರೆ ನೀಡಿದೆ.
ಸಿ.ಟಿ. ರವಿ ಬಂಧನವಾಗುತ್ತಿದ್ದಂತೆ ಚಿಕ್ಕಮಗಳೂರಿನಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು. ಸಿಟಿ ರವಿ ಮನೆಗೆ ಆಗಮಿಸಿದ ಬಿಜೆಪಿ ಜಿಲ್ಲಾಧ್ಯಕ್ಷರು ಸೇರಿದಂತೆ ಜಿಲ್ಲಾ ಬಿಜೆಪಿ ಸದಸ್ಯರು ಮಹತ್ವದ ಸಭೆ ನಡೆಸಿ, ನಾಳೆ ಚಿಕ್ಕಮಗಳೂರು ನಗರ ಬಂದ್‌ಗೆ ತೀರ್ಮಾನಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಮಧುರಾಜ್ ಅರಸ್ , ನಾಳೆ ಚಿಕ್ಕಮಗಳೂರು ನಗರ ಬಂದ್‌ಗೆ ಕರೆ ನೀಡಲಾಗಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಬಂದ್ ಮಾಡಲಾಗುತ್ತೆ. ಹೀಗಾಗಿ ಸಾರ್ವಜನಿಕರು ಈ ಬಂದ್‌ಗೆ ಸಹಕಾರ ನೀಡಬೇಕೆಂದು ಮನವಿ ಮಾಡಿದ್ದಾರೆ.
ಈ ಮಧ್ಯೆ ಸಿ.ಟಿ. ರವಿ ಮನೆ ಬಳಿ ಜಮಾಯಿಸಿದ್ದ ಕಾರ್ಯಕರ್ತರು , ಬಸವನಹಳ್ಳಿ ರಸ್ತೆಯಲ್ಲಿ ಧರಣಿ ನಡೆಸಿ ಸಿಟಿ ರವಿ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸಿ ಬಂಧಿಸಲಾಗಿದೆ. ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು. ಹಲ್ಲೆ ನಡೆಸಲು ಮುಂದಾಗಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆಂಬಲಿಗರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.